ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ: ಡಿಸಿ ನಲಿನ್ ಅತುಲ್

| Published : Mar 24 2024, 01:31 AM IST

ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ: ಡಿಸಿ ನಲಿನ್ ಅತುಲ್
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗಬಾರದು.

ಬರ ನಿರ್ವಹಣೆ ಮತ್ತು ಕುಡಿಯುವ ನೀರು ಪೂರೈಕೆ ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗಬಾರದು. ಸಮಸ್ಯಾತ್ಮಕ ಗ್ರಾಮಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕುಡಿಯುವ ನೀರು ಪೂರೈಸಲು ಮೊದಲ ಆದ್ಯತೆ ನೀಡಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಮತ್ತು ಕುಡಿಯುವ ನೀರು ಪೂರೈಕೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಸರ್ಕಾರಿ ಬೋರ್‌ವೆಲ್‌ಗಳಿಂದ ಕುಡಿಯುವ ನೀರು ಸರಬರಾಜು ಮಾಡಬೇಕು. ಒಂದು ವೇಳೆ ಸರ್ಕಾರಿ ಬೋರ್‌ವೆಲ್‌ಗಳಲ್ಲಿ ಇಳುವರಿ ಕಡಿಮೆಯಾಗಿದ್ದಲ್ಲಿ ಖಾಸಗಿ ಬೋರ್‌ವೆಲ್‌ಗಳೊಂದಿಗೆ ಒಪ್ಪಂದ ಮಾಡಿಕೊಂಡು ನೀರು ಸರಬರಾಜು ಮಾಡಬೇಕು. ಜೂನ್ 30 ರವರೆಗೂ ಕುಡಿಯುವ ನೀರಿನ ತೊಂದರೆ ಬರದಂತೆ ಎಚ್ಚರಿಕೆ ಕ್ರಮ ವಹಿಸಬೇಕು. ಅಗತ್ಯ ಪರಿಸ್ಥಿತಿಗಳಲ್ಲಿ ಹೊಸ ಬೋರ್‌ವೆಲ್‌ಗಳನ್ನು ಕೊರೆಸಿ ನೀರು ಪೂರೈಕೆಗೆ ಅವಕಾಶವಿದ್ದು, ಸ್ಥಳೀಯ ಜನಸಂಖ್ಯೆಗೆ ಅನುಗುಣವಾಗಿ ಬೇಡಿಕೆ ಅನುಸಾರ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಿ. ಕುಡಿಯುವ ನೀರು ಪೂರೈಕೆ ಮೊದಲ ಆದ್ಯತೆ ಆಗಬೇಕು ಎಂದು ಪಿಡಿಒಗಳಿಗೆ ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಟೆಂಡರ್ ಕೀ ನೀಡಲಾಗಿದೆ. ಅದನ್ನು ಬಳಸಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟ್ಯಾಂಕರ್‌ಗಳಿಗೆ ಟೆಂಡರ್ ಆಹ್ವಾನಿಸಿ. ನಿಗದಿಪಡಿಸಿದ ಸಾಮಾನ್ಯ ದರದ ಅನ್ವಯ ಗ್ರಾಮದ ಬೇಡಿಕೆಗೆ ಅನುಗುಣವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ. ಟ್ಯಾಂಕರ್ ಮೂಲಕ ಸರಬರಾಜು ಆಗುವ ನೀರಿನ ಮೂಲದ ಬಗ್ಗೆಯೂ ಅಧಿಕಾರಿಗಳಿಗೆ ಮಾಹಿತಿ ಇರಬೇಕು. ಯಾವುದೇ ಖಾಸಗಿ ಬೋರ್‌ವೆಲ್‌ನಿಂದ ಟ್ಯಾಂಕರ್‌ಗಳು ನೀರು ಪಡೆಯುತ್ತಿದ್ದರೆ ಪ್ರತಿ ಗ್ರಾಮ ಪಂಚಾಯಿತಿಗೆ ನೀಡಲಾದ ನೀರು ಪರೀಕ್ಷಾ ಕಿಟ್‌ಗಳನ್ನು ಬಳಸಿ ಟ್ಯಾಂಕರ್‌ನ ಪ್ರತಿ ಟ್ರಿಪ್ ನೀರು ಸರಬರಾಜು ಆಗುವ ಮುನ್ನ ಪರೀಕ್ಷೆಗೊಳಪಡಿಸಿ, ಕುಡಿಯಲು ಯೋಗ್ಯ ಎಂದು ತೀರ್ಮಾನಿಸಿದ ಮೇಲೆ ನೀರು ಸರಬರಾಜು ಮಾಡಿ. ಕಲುಷಿತ ನೀರು ಸರಬರಾಜು ಆದಲ್ಲಿ ಸಂಬಂಧಿಸಿದ ಪಿಡಿಒಗಳು ನೇರ ಹೊಣೆಗಾರರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ನಗರ ಪ್ರದೇಶಗಳಲ್ಲಿ ನೀರಿನ ಆಕರಗಳ ಸಂಗ್ರಹಣೆ ಸಾಮರ್ಥ್ಯ, ಪರ್ಯಾಯ ನೀರಿನ ಮೂಲಗಳನ್ನು ಬಳಸಿಕೊಂಡು ಯೋಜನೆ ರೂಪಿಸಬೇಕು. ತುಂಗಭದ್ರಾ ನದಿ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸುವಂತೆ ನಿರ್ದೇಶನವಿದ್ದು, ಇದನ್ನು ಯಾರೂ ಮೀರಬಾರದು, ಕುಡಿಯುವ ನೀರಿನ ಹೊರತಾಗಿ ಬೇರೆ ಉದ್ದೇಶಕ್ಕೆ ನದಿ ನೀರನ್ನು ಬಳಸುವುದು ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾಯ್ದೆಯನ್ವಯ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ. ಕುಡಿಯುವ ನೀರಿನ ಸಮಸ್ಯೆಯ ದೂರು ದಾಖಲಿಸಲು ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ದಾಖಲಾಗುವ ದೂರುಗಳನ್ನು ದಾಖಲಿಸಿಕೊಂಡು, ಕೂಡಲೇ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಹೋಬಳಿವಾರು ಜಾನುವಾರು, ಕುರಿ ಮೇಕೆಗಳ ಸಂಖ್ಯೆಯ ಮಾಹಿತಿಯನ್ನು ಪಶು ಸಖಿ ಅವರಿಂದ ಪಡೆದು, ಜಿಲ್ಲೆಯಲ್ಲಿ ಸದ್ಯಕ್ಕೆ ಇರುವ ಮೇವು ದಾಸ್ತಾನು ಹಾಗೂ ಮುಂದಿನ ದಿನಗಳಲ್ಲಿ ಬರಬಹುದಾದ ಬೇಡಿಕೆಯ ವರದಿಯನ್ನು ಸಿದ್ದಪಡಿಸಿ. ಪ್ರತಿ ವಾರ ಪಶು ಸಖಿ ಅವರಿಂದ ನಿಖರ ಮಾಹಿತಿ ಪಡೆದು ಮೇವು ದಾಸ್ತಾನು ಪರಿಶೀಲಿಸಿ. ಅಗತ್ಯವಿದ್ದಲ್ಲಿ ಮೇವು ಖರೀದಿಗೆ ಕ್ರಮ ಕೈಗೊಳ್ಳಲಾಗುತ್ತದೆ. ರೈತರಿಗೆ ಮೇವು ಕಿಟ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಿ. ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಸಂದರ್ಭದಲ್ಲಿ ಜನಸಂಖ್ಯೆ ಮಾತ್ರವಲ್ಲದೆ, ಗ್ರಾಮದ ಜಾನುವಾರು, ಕುರಿ ಮೇಕೆಗಳಿಗೆ ಬೇಕಾಗುವ ನೀರಿನ ಪ್ರಮಾಣವನ್ನು ಆಧರಿಸಿ ನೀರು ಸರಬರಾಜು ಮಾಡಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ, ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಡಿ. ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ. ಸೇರಿದಂತೆ ಎಲ್ಲ ತಾಲೂಕುಗಳ ತಹಸೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಮುಖ್ಯಾಧಿಕಾರಿಗಳು, ಪಿಡಿಒಗಳು ಇತರರಿದ್ದರು.