ಕ್ರೀಡೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿವೆ.
ಹರಪನಹಳ್ಳಿ: ಇಂದಿನ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆಗಳಿಗೂ ಸಮಾನ ಆದ್ಯತೆ ನೀಡಬೇಕು. ಕ್ರೀಡಾ ಕ್ಷೇತ್ರದಲ್ಲಿ ದೊರೆಯುವ ಅವಕಾಶ ಸದುಪಯೋಗ ಪಡಿಸಿಕೊಂಡು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಗುರಿ ಹೊಂದಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ತಿಳಿಸಿದ್ದಾರೆ.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ಪುರುಷ ಮತ್ತು ಮಹಿಳೆಯರ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಖೋ-ಖೋ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡದ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.ಕ್ರೀಡೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿವೆ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದೊಂದಿಗೆ ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸುವ ಮನೋಭಾವ ಬೆಳೆಯುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ಉತ್ತಮ ಸಾಧನೆ ಮಾಡುವ ಮೂಲಕ ತಮ್ಮ ಕಾಲೇಜು, ಊರು ಹಾಗೂ ಹರಪನಹಳ್ಳಿ ತಾಲೂಕಿಗೆ ಕೀರ್ತಿ ತರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸತೀಶ್, ಸ್ಥಳೀಯ ಪಿಎಸ್ಐ ಹುಲಿಗೇಶ್ ಎಸ್. ಓಂಕಾರ್, ಡಾ.ಎಂ. ಸುರೇಶ, ಡಾ. ತಿಪ್ಪೇಸ್ವಾಮಿ ಗೊಂಚಿಗಾರ, ಡಾ. ಎಚ್.ಕೊಟ್ರೇಶ್, ಎಂ. ವಿಜಯಕುಮಾರ್, ಡಾ.ಹರಾಳು ಬುಳ್ಳಪ್ಪ, ಡಾ. ಭೀಮಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಎಸ್.ಪಿ.ಗಂಗಪ್ಪ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಷಣ್ಮುಖಪ್ಪ ಸೇರಿದಂತ್ತೆ ಕಾಲೇಜಿನ ಉಪನ್ಯಾಸಕರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.