ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರೆ ನೀಡಲಾಗುವುದು
ಕೊಪ್ಪಳ: ಯಾವುದೇ ಮಗು ಜಂತು ನಿವಾರಕ ಮಾತ್ರೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಂತುರಹಿತ ಮಗು ದೇಶದ ಸಂಪತ್ತು, ಮಕ್ಕಳ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆ ಆ.10ರಂದು ನಡೆಯಲಿರುವ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಕುರಿತು ವ್ಯಾಪಕ ಜನಜಾಗೃತಿ ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕರೆ ನೀಡಿದರು.ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಪ್ರಕಾಶ್ ವಿ. ಮಾತನಾಡಿ, ನಿವಾರಣಾ ಕಾರ್ಯಕ್ರಮದ ಜಿಲ್ಲೆಯ 1 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಜಂತುನಿವಾರಕ ಅಲ್ಬೆಂಡಾಜೋಲ್ ಮಾತ್ರೆ ವಿತರಿಸಲಾಗುವುದು. ಅಂಗನವಾಡಿ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಸರ್ಕಾರಿ ಮತ್ತು ಖಾಸಗಿ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಯಾ ಶಿಕ್ಷಣ ಸಂಸ್ಥೆಗಳ ಮೂಲಕ ಮಾತ್ರೆ ನೀಡಲಾಗುವುದು.ಆ. 10ರ ರಾಷ್ಟ್ರೀಯ ಜಂತುಹುಳು ಕಾರ್ಯಕ್ರಮ ದಿನದಂದು ಗೈರುಹಾಜರಾಗುವ ಮಕ್ಕಳಿಗೆ ಆ.17ರಂದು ಮರು ಅವಕಾಶ ಕಲ್ಪಿಸಲಾಗಿದೆ ಎಂದರು.
ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರೆ ನೀಡಲಾಗುವುದು. 1 ರಿಂದ 2 ವರ್ಷದ ಮಕ್ಕಳಿಗೆ ಅರ್ಧ ಮಾತ್ರೆ (200 ಮಿಗ್ರಾಂ) ಹಾಗೂ 2 ವರ್ಷ ಮೇಲ್ಪಟ್ಟ ಮಕ್ಕಳಿಗೆ ಪೂರ್ಣ ಮಾತ್ರೆ (400 ಮಿ.ಗ್ರಾಂ) ನೀಡಲಾಗುತ್ತದೆ. ಸಣ್ಣ ಮಕ್ಕಳಿಗೆ ಮಾತ್ರೆ ನೀರಿನಲ್ಲಿ ಕರಗಿಸಿ ಕುಡಿಸುವಂತೆ ಸೂಚಿಸಲಾಗಿದೆ. ಮಕ್ಕಳಲ್ಲಿ ಜಂತುಬಾಧೆ, ಅಪೌಷ್ಟಿಕತೆ ಹಾಗೂ ರಕ್ತಹೀನತೆ ತಡೆಗಟ್ಟಿ, ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿಯಾಗುವ ಉದ್ದೇಶದಿಂದ ಪ್ರತಿ ಆರು ತಿಂಗಳಿಗೊಮ್ಮೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ವಿವರಿಸಿದರು.ಜಂತುಹುಳು ನಿವಾರಣಾ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಾಲಾ ಶಿಕ್ಷಕರಿಗೆ ಆರೋಗ್ಯ ಕೇಂದ್ರಗಳ ಹಂತದಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪೋಸ್ಟರ್ ಬಿಡುಗಡೆ:ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಪೋಸ್ಟರ್‌ನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ್ ಎಂ.ಎಚ್., ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಪ್ರಕಾಶ್ ಎಚ್., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಶಶಿಧರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಸೇರಿದಂತೆ ಎಲ್ಲ ತಾಲೂಕು ಆರೋಗ್ಯಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿ, ವೈದ್ಯಾಧಿಕಾರಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳಿದ್ದರು.