ಸಾರಾಂಶ
ಬೆಂಗಳೂರು : ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ಶುಕ್ರವಾರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಗರ ಸ್ವಾಂತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ ಹಾಗೂ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, ಅಹಿಂದ ಹೆಸರಿನಲ್ಲಿ ಅಧಿಕಾರಿ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು, ಬಜೆಟ್‌ನಲ್ಲಿ ಹಿಂದುಳಿದ ವರ್ಗದ ನಿಗಮಗಳಿಗೆ 1600 ಕೋಟಿ ರು. ಅನುದಾನ ನೀಡುವುದಾಗಿ ಘೋಷಿಸಿತ್ತು. ಆದರೆ, ಈವರೆಗೆ ಕೇವಲ 347 ಕೋಟಿ ರು. ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ಆರೋಪ ಮಾಡಿದರು.
ಬಿಜೆಪಿ ಅವಧಿಯಲ್ಲಿ ₹1000 ಕೋಟಿಗೂ ಹೆಚ್ಚು ಅನುದಾನ:
ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ 1000 ಕೋಟಿ ರು.ಗೂ ಹೆಚ್ಚು ಅನುದಾನವನ್ನು ಡಿ.ದೇವರಾಜ ಅರಸು, ಒಕ್ಕಲಿಗ, ಮರಾಠ, ವಿಶ್ವಕರ್ಮ, ವೇರಶೈವ ಅಂಗಾಯತ, ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಅಲೆಮಾರಿ ಅರೆ ಅಲೆಮಾರಿ, ಮಡಿವಾಳ ಮಾಚಿದೇವ ಮತ್ತು ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಹಣ ಬಿಡುಗದೆ ಮಾಡಿತ್ತು.
ಆದರೆ, ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಜನರ ಆರ್ಥಿಕ, ಔದ್ಯೋಗಿಕ, ಕೃಷಿ ಮತ್ತು ಶಿಕ್ಷಣಕ್ಕಾಗಿ ನಿಗಮಗಳಿಗೆ ಹಣ ಬಿಡುಗಡೆ ಮಾಡದೇ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದರು.ಅತ್ಯಂತ ಹಿಂದುಳಿದ ಹೂಗಾರ, ಕುಂಬಾರ, ಗಾಣಿಗ, ಹಡಪದ, ಈಡಿಗ ಮತ್ತು ಮಾಳಿ ಸಮುದಾಯಗಳೂ ಕೂಡ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ಬರಬೇಕೆಂದು ಬಿಜೆಪಿ ಸರ್ಕಾರ ಪ್ರತ್ಯೇಕ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿತ್ತು. ಆದರೆ, ತಮ್ಮ ಸರ್ಕಾರ ಇಂತಹ ಸಣ್ಣ ಸಣ್ಣ ಹಿಂದುಳಿದ ಸಮುದಾಯಗಳ ನಿಗಮಗಳಿಗೆ ಒಂದೇ ಒಂದು ಪೈಸೆ ಹಣ ಬಿಡುಗಡೆ ಮಾಡದೆ ಅನ್ಯಾಯ ಮಾಡಲಾಗಿರುತ್ತದೆ. ಹೀಗಾಗಿ, ಸರ್ಕಾರ ಕೂಡಲೇ ನಿಗಮಗಳಿಗೆ ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ವಿದ್ಯಾರ್ಥಿಳಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ
ರಾಜ್ಯದ ಹಿಂದುಳಿದ ವರ್ಗಗಳ 6,065 ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಕ್ಕಾಗಿ ವಿವಿಧ ನಿಗಮಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈವರೆಗೆ ನಯಾ ಪೈಸೆ ಹಣ ಬಿಡುಗಡೆ ಮಾಡದೇ ಹಿಂದುಳಿದ ವರ್ಗಗಳ ಮಕ್ಕಳಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಪ್ರತಿಭಟನಾಕಾರರು ಆರೋಪ ಮಾಡಿದರು.