ಹಾವೇರಿ: ಸ್ವಚ್ಛತಾ ಕಾರ್ಮಿಕರ ಮಕ್ಕಳ ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ್ಯಾಭಿವೃದ್ಧಿ, ವಸತಿ, ಸಾಲ ಸೌಲಭ್ಯ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ್ ಸಾಲಪ್ಪ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರ ಕಲ್ಯಾಣ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾರ್ಮಿಕರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಸಫಾಯಿ ಕರ್ಮಚಾರಿ ಕುಟುಂಬಗಳ ಮಕ್ಕಳನ್ನು ಗುರುತಿಸಿ, ಅವರಿಗೆ ಸ್ವಾಭಿಮಾನದಿಂದ ಜೀವನ ಸಾಗಿಸಲು ಹಾಗೂ ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಲು ವಿಶೇಷ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ತಮ್ಮ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಸಫಾಯಿ ಕರ್ಮಚಾರಿ ಕುಟುಂಬಗಳ ಐವರು ಫಲಾನುಭವಿಗಳನ್ನು ಆಯ್ಕೆ ಮಾಡಿ, ಅವರಿಗೆ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಯೋಜನೆಗೆ ಅಗತ್ಯವಿರುವ ಆರ್ಥಿಕ ನೆರವನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಬಿಡುಗಡೆ ಮಾಡಲಾಗುತ್ತದೆ ಸಫಾಯಿ ಕರ್ಮಚಾರಿ ಕುಟುಂಬಗಳ ಮಕ್ಕಳು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಬೇಕು. ಉದ್ಯೋಗಕ್ಕಾಗಿ ಇತರರನ್ನು ಅವಲಂಬಿಸದೆ, ಸ್ವಂತ ಉದ್ಯಮ ಆರಂಭಿಸಿ ಗೌರವಯುತ ಬದುಕು ಕಟ್ಟಿಕೊಳ್ಳುವಂತೆ ಪ್ರೋತ್ಸಾಹಿಸುವುದು ನಿಗಮದ ಉದ್ದೇಶವಾಗಿದೆ ಎಂದರು.

ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಕುಟುಂಬಗಳಿಗೆ ಮೊದಲ ಆದ್ಯತೆ ನೀಡಬೇಕು. ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವುದು ಸರ್ಕಾರ ಹಾಗೂ ಸಮಾಜದ ಜವಾಬ್ದಾರಿಯಾಗಿದೆ ಎಂದರು.


ಸಫಾಯಿ ಕರ್ಮಚಾರಿ ಕುಟುಂಬಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ರಾಜ್ಯದಾದ್ಯಂತ ವಿಶೇಷ ಕಲಿಕಾ ಕೇಂದ್ರಗಳನ್ನು ಆರಂಭಿಸುವ ಯೋಜನೆಯನ್ನು ಸರ್ಕಾರ ರೂಪಿಸಿದೆ. ಗುಣಮಟ್ಟದ ಶಿಕ್ಷಣ ಹಾಗೂ ಮಾರ್ಗದರ್ಶನ ಒದಗಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಫಾಯಿ ಕರ್ಮಚಾರಿ ವಸತಿ ಪ್ರದೇಶಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಯುವಕರನ್ನು ಗುರುತಿಸಿ, ಅವರಿಗೆ ಮಾಸಿಕ ಗೌರವಧನ ನೀಡುವ ಮೂಲಕ ಅಲ್ಲಿನ ಮಕ್ಕಳಿಗೆ ಟ್ಯೂಷನ್ ಹಾಗೂ ಶೈಕ್ಷಣಿಕ ಮಾರ್ಗದರ್ಶನ ನೀಡಲು ಅವಕಾಶ ಕಲ್ಪಿಸಲಾಗುವುದು. ಇದರಿಂದ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಆಸಕ್ತಿ ಹೆಚ್ಚಿಸುವುದು, ಶಾಲಾ ಶಿಕ್ಷಣದಲ್ಲಿ ಉತ್ತಮ ಸಾಧನೆಗೆ ಪ್ರೋತ್ಸಾಹಿಸುವುದು ಹಾಗೂ ಉನ್ನತ ಶಿಕ್ಷಣದತ್ತ ಅವರನ್ನು ಮುನ್ನಡೆಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ರಾಜ್ಯ ಸಪಾಯಿ ಕರ್ಮಚಾರಿ ವ್ಯವಸ್ಥಾಪ ನಿರ್ದೇಶಕರಾದ ಟಿ.ಬಿ.ಮಂಜುನಾಥ, ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್, ನಗರಸಭೆ ಆಯುಕ್ತ ಎಚ್.ಕಾಂತರಾಜು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ, ಸಪಾಯಿ ಕರ್ಮಚಾರಿ ನಿಗಮದ ಜಿಲ್ಲಾ ಸದಸ್ಯರು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಸಮಯಕ್ಕೆ ಸರಿಯಾಗಿ ವೇತನ ಪಾವತಿಸಿ..

ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗದಿರುವ ಬಗ್ಗೆ ಗಂಭೀರ ದೂರುಗಳು ಬಂದಿವೆ. ಕೆಲವು ಕಡೆ ಕಳೆದ ಒಂದು ವರ್ಷದಿಂದಲೂ ಕಾರ್ಮಿಕರಿಗೆ ವೇತನ ಪಾವತಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಗುತ್ತಿಗೆ ಏಜೆನ್ಸಿಗಳನ್ನು ತಕ್ಷಣವೇ ಕರಿಸಿ ಬಾಕಿ ಉಳಿದಿರುವ ವೇತನವನ್ನು ವಸೂಲಿ ಮಾಡಿ ಸಫಾಯಿ ಕರ್ಮಚಾರಿಗಳಿಗೆ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.