ಕಚೇರಿಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ

| Published : Jun 25 2025, 01:18 AM IST

ಕಚೇರಿಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ತಾಲೂಕಿನ ಜುಮನಾಳ, ಹಿಟ್ಟಿನಹಳ್ಳಿ ಮತ್ತು ಐನಾಪುರ ಗ್ರಾಮ ಪಂಚಾಯತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ತಾಲೂಕಿನ ಜುಮನಾಳ, ಹಿಟ್ಟಿನಹಳ್ಳಿ ಮತ್ತು ಐನಾಪುರ ಗ್ರಾಮ ಪಂಚಾಯತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಹಿಟ್ಟಿನಹಳ್ಳಿ ಹಾಗೂ ಐನಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಪ್ರತಿನಿತ್ಯ ತಪ್ಪದೇ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಮಕ್ಕಳ ಆಕರ್ಷಣಿಯ ಬಾಲಾ ಪೇಂಟಿಂಗ್ ಹಾಗೂ ಗ್ರಾಮ ಪಂಚಾಯತಿಯಲ್ಲಿ ಲಭ್ಯವಿರುವ ಅನುದಾನ ಬಳಸಿಕೊಂಡು ದುರಸ್ತಿಯನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು. ಅಂಗನವಾಡಿಗಳಲ್ಲಿ ಕಡ್ಡಾಯವಾಗಿ ಮಕ್ಕಳಿಗೆ ಮೂಲಭೂತ ಸೌಕರ್ಯ ಇರುವಂತೆ ನೋಡಿಕೊಳ್ಳಬೇಕು ಎಂದರು.

ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸುವುದರ ಬಗ್ಗೆ ನಿಗಾವಹಿಸಬೇಕು. ಅಂಗನವಾಡಿ ಕೇಂದ್ರಗಳ ಒಳಾಂಗಣ ಮತ್ತು ಹೊರಾಂಗಣ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಬಾಲ್ಯದಲ್ಲಿಯೇ ಮಕ್ಕಳಿಗೆ ಶಿಸ್ತು ಮೂಡಲು ಸ್ವಚ್ಛತೆ ಹಾಗೂ ಶುಚಿತ್ವದ ಮಹತ್ವ ಅಗತ್ಯವಾಗಿದೆ. ಅಂಗನವಾಡಿಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಹಿಟ್ಟಿನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಗ್ರಂಥಾಲಯದಲ್ಲಿ ಅಗತ್ಯ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಬೇಕು. ಜುಮನಾಳ, ಹಿಟ್ಟಿನಹಳ್ಳಿ ಮತ್ತು ಐನಾಪುರ ಗ್ರಾಮ ಪಂಚಾಯಿತಿಗಳ ಎಲ್ಲಾ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ ನಡೆಸಿ, ಸಿಬ್ಬಂದಿ ಕಡ್ಡಾಯವವಾಗಿ ಇ-ಹಾಜರಾತಿ ಸಲ್ಲಿಸಬೇಕು. ಕರ್ತವ್ಯದಲ್ಲಿ ಸಮಯ ಪಾಲನೆ ಮತ್ತು ಶಿಸ್ತನ್ನು ರೂಢಿಸಿಕೊಳ್ಳಬೇಕು. ಗ್ರಾಮ ಪಂಚಾಯತಿಯ ಖಾಲಿ ಇರುವ ಜಾಗದಲ್ಲಿ ಸಸಿಗಳನ್ನು ನೆಟ್ಟು ಹಸಿರೀಕರಣಕ್ಕೆ ಒತ್ತು ನೀಡಬೇಕು. ಗ್ರಾಮಗಳಲ್ಲಿ ನಿರಂತರ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಐನಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿ ಸಮಯ ಪಾಲನೆ ಮಾಡಬೇಕು. ದಿನದ ೨೪ ಗಂಟೆಯೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಾಗಬೇಕು. ಜೊತೆಗೆ, ಆಸ್ಪತ್ರೆಯಲ್ಲಿ ನಿರಂತರ ಸ್ವಚ್ಛತೆ ಕಾಪಾಡಬೇಕು. ಐನಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಕಾರ್ಯಾತ್ಮಕ ನಲ್ಲಿ ಸಂಪರ್ಕದ ಮೂಲಕ ನೀರು ಸರಬರಾಜು ವ್ಯವಸ್ಥೆಯನ್ನು ತುರ್ತಾಗಿ ಪ್ರಾರಂಭಿಸಬೇಕು. ಐನಾಪುರ ಗ್ರಾಮದ ಕೆರೆಯನ್ನು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು.

ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದ ಸಿಇಒ, ಅವರ ಕುಂದುಕೊರತೆಗಳನ್ನು ಆಲಿಸಿದರು.ಈ ಸಂದರ್ಭದಲ್ಲಿ ಹಿಟ್ಟಿನಹಳ್ಳಿ ಗ್ರಾಪಂ ಕಾರ್ಯದರ್ಶಿ ಓಂಪ್ರಕಾಶ ಬಂಡಿ, ಜುಮನಾಳ ಗ್ರಾಪಂ ಕಾರ್ಯದರ್ಶಿ ಎಸ್.ಕೆ.ಹೊನಕಟ್ಟಿ, ಎಸ್‌ಡಿಎ ಕಸ್ತೂರಿ ಲಮಾಣಿ, ಐನಾಪುರ ಗ್ರಾಪಂ ಕಾರ್ಯದರ್ಶಿ ರಾಜೇಶ.ಟಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.