ಚಿತ್ತಾಪುರ ವಿಧಾನಸಭಾ ವ್ಯಾಪ್ತಿಯಲ್ಲಿ ದಂಡೊತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ನನಗೆ ಜಿಲ್ಲಾ ಪಂಚಾಯಿತಿ ಅಭ್ಯರ್ಥಿಯನ್ನಾಗಿ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಇಬ್ರಾಹಿಂ ಕೊಳದ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಚಿತ್ತಾಪುರ

ಚಿತ್ತಾಪುರ ವಿಧಾನಸಭಾ ವ್ಯಾಪ್ತಿಯಲ್ಲಿ ದಂಡೊತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ನನಗೆ ಜಿಲ್ಲಾ ಪಂಚಾಯಿತಿ ಅಭ್ಯರ್ಥಿಯನ್ನಾಗಿ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಇಬ್ರಾಹಿಂ ಕೊಳದ ಒತ್ತಾಯಿಸಿದರು.

ಪಟ್ಟಣದಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಲ್ಪಸಂಖ್ಯಾತರ ಪರವಾಗಿರುವ ಪಕ್ಷವಾಗಿದ್ದು, ಕೆಲವರು ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಪಕ್ಷ ಎಂದು ಬಿಂಬಿಸಲು ಹೊರಟಿದ್ದಾರೆ. ಬಿಜೆಪಿ ಪಕ್ಷವು ಅಲ್ಪಸಂಖ್ಯಾತರನ್ನು ಎಂದು ಕಡೆಗಣಿಸಿಲ್ಲ ಎಂದ ಅವರು ಬಿಜೆಪಿ ಪಕ್ಷದ ತತ್ವ ಮತ್ತು ಸಿದ್ದಾಂತ ಒಪ್ಪಿಕೊಂಡು ಮತ್ತು ದೇಶದಲ್ಲಿ ಪ್ರಧಾನಿ ನರೇಂದ್ರ ಮೊದಿಯವರ ಅಭಿವೃದ್ದಿ ಚಿಂತನೆ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ಮಾಡಿರುವ ಕೊಡುಗೆಗಳು ಸಾಕಷ್ಟಿವೆ. ನಾನು ಹದಿನೈದು ವರ್ಷಗಳಿಂದ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಪಕ್ಷವು ನನ್ನ ಸೇವೆ ಗುರುತಿಸಿ ಕಳೆದ ಎರಡು ವರ್ಷಗಳ ಹಿಂದ ಚಿತ್ತಾಪುರ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷನನ್ನಾಗಿ ನೇಮಿಸಿ ಪಕ್ಷ ಸೇವೆಗೆ ಅನುಕೂಲ ಮಾಡಿಕೊಟ್ಟಿದೆ. ಅದೇ ರೀತಿ ನನಗೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ದಂಡೊತಿ ಮತಕ್ಷೇತ್ರದಿಂದ ಅವಕಾಶ ಕಲ್ಪಿಸಿಕೊಟ್ಟಲ್ಲಿ ಪಕ್ಷಕ್ಕೆ ಗೆಲ್ಲುವ ಅವಕಾಶ ಹೆಚ್ಚಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಪಕ್ಷದ ವತಿಯಿಂದ ತಾಲೂಕಿನಲ್ಲಿ ಇದುವರೆಗೆ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅವಕಾಶಗಳು ಸಿಕ್ಕಿಲ್ಲ. ಅದಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅವಕಾಶಗಳು ಕಲ್ಪಿಸಬೇಕು ಮತ್ತು ನನಗೆ ದಂಡೊತಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಅಭ್ಯರ್ಥಿಯನ್ನಾಗಿಸಬೇಕು ಎಂದು ಅವರು ಪಕ್ಷದ ಮುಖಂಡರಿಗೆ ಮನವಿ ಮಾಡಿದರು.