ಹೆಚ್‌ಐವಿ ಸೋಂಕಿತರಿಗೆ ನೈತಿಕ ಬಲ ತುಂಬಲಿ: ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ

| Published : Dec 04 2024, 12:30 AM IST

ಹೆಚ್‌ಐವಿ ಸೋಂಕಿತರಿಗೆ ನೈತಿಕ ಬಲ ತುಂಬಲಿ: ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ
Share this Article
  • FB
  • TW
  • Linkdin
  • Email

ಸಾರಾಂಶ

1980ರ ದಶಕದಲ್ಲಿ ಕಂಡುಬಂದ ಹೆಚ್‌ಐವಿ ಸೋಂಕಿನಿಂದ ಹರಡುವ ಏಡ್ಸ್ ಕಾಯಿಲೆಯು ಇಂದು ಜಗತ್ತಿನ ಎಲ್ಲ ರಾಷ್ಟ್ರಗಳಲ್ಲಿ ತನ್ನ ಪ್ರಭಾವವನ್ನು ಬೀರಿದೆ ಎಂದು ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ಹೇಳಿದರು.

ಬಳ್ಳಾರಿ: ಹೆಚ್‌ಐವಿ ಸೋಂಕಿಗೆ ತುತ್ತಾದವರು ಕಾಯಿಲೆಗಿಂತ ಹೆಚ್ಚಾಗಿ ಮಾನಸಿಕವಾಗಿ ಭಯಭೀತರಾಗುತ್ತಾರೆ. ಸಮಾಜದಲ್ಲಿ ಎಲ್ಲ ರೀತಿಯ ಹಕ್ಕು ಹೊಂದಲು ಅವರು ಅರ್ಹರಿದ್ದು, ಅವರಿಗೆ ಸ್ಫೂರ್ತಿ, ಧೈರ್ಯ ಮತ್ತು ನೈತಿಕ ಬಲ ಒದಗಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಹೇಳಿದರು.

ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ “ಹಕ್ಕುಗಳನ್ನು ಪಡೆಯಲು ಸರಿಯಾದ ಮಾರ್ಗ ಅನುಸರಿಸೋಣ: ನನ್ನ ಆರೋಗ್ಯ ನನ್ನ ಹಕ್ಕು” ಎಂಬ ಘೋಷವಾಕ್ಯದಡಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಏಡ್ಸ್ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

1980ರ ದಶಕದಲ್ಲಿ ಕಂಡುಬಂದ ಹೆಚ್‌ಐವಿ ಸೋಂಕಿನಿಂದ ಹರಡುವ ಏಡ್ಸ್ ಕಾಯಿಲೆಯು ಇಂದು ಜಗತ್ತಿನ ಎಲ್ಲ ರಾಷ್ಟ್ರಗಳಲ್ಲಿ ತನ್ನ ಪ್ರಭಾವವನ್ನು ಬೀರಿದೆ. ಹೆಚ್.ಐ.ವಿ. ಸೋಂಕಿತರನ್ನು ಮಾನವೀಯ ದೃಷ್ಟಿಯಿಂದ ನೋಡುವುದರ ಜೊತೆಗೆ ಧೈರ್ಯ ತುಂಬುವ ಕೆಲಸ ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದರು.

ಎಚ್.ಐ.ವಿ. ಸೋಂಕಿನಿಂದ ಹರಡುವ ಏಡ್ಸ್ ಕಾಯಿಲೆಯ ಬಗ್ಗೆ ಜನರಲ್ಲಿ ಇರುವ ಭಯ ದೂರ ಮಾಡುವುದರ ಜೊತೆಗೆ ಎಚ್.ಐ.ವಿ. ಏಡ್ಸ್‌ನಿಂದ ಉಂಟಾಗುವ ಕಳಂಕ ಮತ್ತು ತಾರತಮ್ಯ ಹೋಗಲಾಡಿಸಿ, ಹೊಸ ಪ್ರಕರಣ ಹಾಗೂ ಸಾವುಗಳನ್ನು ಸೊನ್ನೆಗೆ ತರಲು ಜಾಗೃತಿ ಮೂಲಕ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೈ. ರಮೇಶ್ ಬಾಬು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, 1980ರಲ್ಲಿ ಮೊದಲ ಬಾರಿಗೆ ಡಿ. 1ರಂದು ಎಚ್.ಐ.ವಿ. ಸೋಂಕಿನ ತಡೆಗಾಗಿ ಜಾಗತಿಕ ಒಗಟ್ಟು ಹಾಗೂ ಜವಾಬ್ದಾರಿ ಹಂಚಿಕೆ ಎಂಬ ಘೋಷ ವಾಕ್ಯದೊಂದಿಗೆ ಜಾಗೃತಿ ಕಾರ್ಯಕ್ರಮ ಆರಂಭಿಸಲಾಯಿತು. ಸಮುದಾಯದ ಪ್ರತಿಯೊಬ್ಬರಿಗೂ ಸೋಂಕು ಹರಡುವ ವಿಧಾನ ಹಾಗೂ ಮುಂಜಾಗ್ರತೆಗಳ ಕುರಿತು ವ್ಯಾಪಕ ಪ್ರಚಾರ ಕಾರ್ಯವನ್ನು ಕೈಗೊಳ್ಳುವ ಮೂಲಕ ಪ್ರಸ್ತುತ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣವನ್ನು ಗಣನೀಯವಾಗಿ ಕಡಿಮೆಗೊಳಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕದ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಇಂದ್ರಾಣಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ವೀರೇಂದ್ರ ಕುಮಾರ್, ನಿತ್ಯಜೀವನ ಸಂಸ್ಥೆಯ ಅಧ್ಯಕ್ಷರಾದ ಹೇಮಲತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಡ್ಯಾಪ್ಕೋ ಮೇಲ್ವಿಚಾರಕ ಗಿರೀಶ್, ಎಆರ್‌ಟಿ ಆಪ್ತಸಮಾಲೋಚಕ ಗಣೇಶ್ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಜಾಗೃತಿ ಜಾಥಾಕ್ಕೆ ಚಾಲನೆ

ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್. ಹೊಸಮನೆ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಆವರಣದಿಂದ ಶುರುಗೊಂಡ ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಎಚ್‌ಐವಿ ಸೋಂಕು ಕುರಿತಾಗಿ ಜಾಗೃತಿ ಮೂಡಿಸಿತು.