ಮಕ್ಕಳ ಪೋಷಣೆ, ರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಆರ್.ಐಶ್ವರ್ಯ

| Published : Apr 05 2025, 12:48 AM IST

ಮಕ್ಕಳ ಪೋಷಣೆ, ರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಆರ್.ಐಶ್ವರ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಕ್ಕಳ ಪೋಷಣೆ ಮತ್ತು ರಕ್ಷಣೆ (ಬಾಲ ನ್ಯಾಯ ಕಾಯ್ದೆ) ಸಂಬಂಧಿಸಿದಂತೆ ಮಾಹಿತಿ ಶಿಕ್ಷಣ, ಮಾರ್ಗದರ್ಶನದ ಮೂಲಕ ಹೆಚ್ಚಿನ ಜಾಗೃತಿ ಮೂಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ನಿರ್ದೇಶನ ನೀಡಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ಹಾಡಿಗಳಲ್ಲಿ, ಲೈನ್ ಮನೆಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಹೆಚ್ಚಿನ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಬೇಕು ಎಂದು ಸೂಚಿಸಿದರು.ಮಕ್ಕಳ ರಕ್ಷಣೆ ಮತ್ತು ಪೋಷಣೆಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಎಲ್ಲೆಡೆ ವಿಶೇಷ ಅಭಿಯಾನ ಹಮ್ಮಿಕೊಳ್ಳಬೇಕು. ಬಾಲನ್ಯಾಯ ಕಾಯ್ದೆಯ ವಿಶೇಷ ಪಾಲನೆಯಡಿ 18 ವರ್ಷದೊಳಗಿನ ಮಕ್ಕಳ ವಿಶೇಷ ಪಾಲನೆ ಯೋಜನೆ ಜಾರಿಗೆ ಬಂದಿದ್ದು, ತಂದೆ ತಾಯಂದಿರು ಎಚ್‌ಐವಿ ರೋಗಕ್ಕೆ ತುತ್ತಾಗಿ ಮರಣ ಹೊಂದಿದ್ದಲ್ಲಿ ಅಥವಾ ಮಕ್ಕಳನ್ನು ನೋಡಿಕೊಳ್ಳಲು ಅಶಕ್ತರಾಗಿದ್ದರೆ ಅಂತಹ ಮಕ್ಕಳ ಪಾಲನೆ ಮತ್ತು ಪೋಷಣೆ ಸಂಬಂಧ ಅಗತ್ಯ ಗಮನಹರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಈರಸ್ವಾಮಿ, ವಿಶೇಷ ಪಾಲನೆ ಯೋಜನೆಯಡಿ ಕಳೆದ ಮೂರು ತಿಂಗಳಲ್ಲಿ 137 ಮಕ್ಕಳ ಪೋಷಕರಿಗೆ 8.16 ಲಕ್ಷ ರು. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಪ್ರಾಯೋಜಕತ್ವ ಕಾರ್ಯಕ್ರಮದಲ್ಲಿ ವರ್ಷದೊಳಗೆ ಅನಾಥ ಹಾಗೂ ಏಕಪೋಷಕ ಮಕ್ಕಳಿಗೆ ಹಾಗೂ ಸಜಾ ಖೈದಿಗಳ ಮಕ್ಕಳಿಗೆ ಮಾಸಿಕ 4 ಸಾವಿರ ರು.ನಂತೆ ಫಲಾನುಭವಿಯ ಖಾತೆಗೆ ಅನುದಾನವನ್ನು ಡಿಬಿಟಿ ಮೂಲಕ ಜಮೆ ಮಾಡಲಾಗುತ್ತಿದ್ದು, ಕಳೆದ ಮೂರು ತಿಂಗಳಲ್ಲಿ 204 ಫಲಾನುಭವಿಗಳಿಗೆ 24.44 ಲಕ್ಷ ರು. ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಾಯೋಜಕತ್ವ ಯೋಜನೆಯಡಿ 2024-25ನೇ ಸಾಲಿನಲ್ಲಿ ಒಟ್ಟು 144 ಫಲಾನುಭವಿ ಮಕ್ಕಳಿಗೆ ಮಾಹೆಯಾನ 4000 ರು.ಗಳಂತೆ ಒಟ್ಟು 33,08,000 ರೂ.ಗಳನ್ನು ಡಿಬಿಟಿ ಮೂಲಕ ಬಿಡುಗಡೆಗೊಳಿಸಲಾಗಿದೆ. ದತ್ತು ಕಾರ್ಯಕ್ರಮದಡಿ ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ 6 ಮಕ್ಕಳು ದಾಖಲಾಗಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ್ ಮಾತನಾಡಿ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ವಿಶೇಷ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜೊತೆ ಸೇರಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು ಮಾತನಾಡಿದರು.

ಜಿ.ಪಂ. ಉಪ ಕಾರ್ಯದರ್ಶಿ ಅಬ್ದುಲ್ ನಬಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಪಿ.ಕವಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿ.ಟಿ.ವಿಷ್ಮಯಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ರೇಖಾ, ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಶಿರಾಜ್ ಇತರರು ಇದ್ದರು.