ರಾಷ್ಟ್ರದ ಅಭಿವೃದ್ಧಿಗೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕರೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ರಾಷ್ಟ್ರದ ಅಭಿವೃದ್ಧಿಗೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕರೆ ನೀಡಿದ್ದಾರೆ.ಕೊಡಗು ಜಿಲ್ಲೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪುರಸ್ಕೃತವಾದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ(ಎಂಎಸ್‍ಎಂಇ) ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವ ಸಂಬಂಧ ಜಿಲ್ಲಾ ಕೈಗಾರಿಕಾ ಅಭಿವೃದ್ಧಿಗೆ ಪಾಲುದಾರರಾದ ವಿವಿಧ ಇಲಾಖಾ ಅಧಿಕಾರಿಗಳಿಗೆ ಹಾಗೂ ಕೈಗಾರಿಕಾ ಸಂಘ-ಸಂಸ್ಥೆಗಳಿಗೆ ಮಂಗಳವಾರ ಏರ್ಪಡಿಸಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯುರೋಪ್‍ನ ಹಲವು ದೇಶಗಳು, ಚೀನಾ ಮತ್ತು ಜಪಾನ್ ರಾಷ್ಟ್ರಗಳು ಕೃಷಿ ಜೊತೆಗೆ ಸಣ್ಣ ಮತ್ತು ಬೃಹತ್ ಕೈಗಾರಿಕಾ ಯೋಜನೆಗಳಿಗೆ ಹೆಚ್ಚಿನ ಕೊಡುಗೆ ನೀಡಿವೆ ಎಂದರು.ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಹನುಮಂತರಾಯ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಕ್ಕೆ ಹೆಚ್ಚಿನ ಹೊಡೆತ ಬಿದ್ದಿದ್ದು, ಇದನ್ನು ತಿಳಿದ ಸರ್ಕಾರವು ಸಣ್ಣ ಮತ್ತು ಮಧ್ಯಮ ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವಲ್ಲಿ ನಿರ್ಧರಿಸಿದ್ದು, ಅದರಂತೆ ಸಾಲ ಸೌಲಭ್ಯ ಸೇರಿದಂತೆ ಹೆಚ್ಚಿನ ಪ್ರೋತ್ಸಾಹ ನೀಡಲು ಮುಂದಾಗಿದೆ, ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್ ಅವರು ಮಾತನಾಡಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಮೂಲಕ ಕೃಷಿ, ಕೈಗಾರಿಕೆ, ವಾಣಿಜ್ಯ, ವ್ಯಾಪಾರ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಪ್ರೋತ್ಸಾಹ ಹೀಗೆ ಹಲವು ಕಾರ್ಯಕ್ರಮಗಳಿಗೆ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಪ್ರಗತಿಯತ್ತ ಹೆಜ್ಜೆ ಇಡಲಾಗಿದೆ ಎಂದು ಹೇಳಿದರು.ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಬ್ಯಾಂಕ್‍ಗಳು ಸಕಾಲದಲ್ಲಿ ಕೃಷಿಕರಿಗೆ ಸಾಲ ಸೌಲಭ್ಯ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಬಾರ್ಡ್‍ನ ಉಪ ಮಹಾ ಪ್ರಬಂಧಕ ರಮೇಶ್ ಬಾಬು ಮಾತನಾಡಿ ರಾಷ್ಟ್ರದಲ್ಲಿ ಶೇ.30 ರಷ್ಟು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಕಾಣಬಹುದಾಗಿದೆ. ಆದರೆ ಮುಂದುವರೆದ ರಾಷ್ಟ್ರಗಳಲ್ಲಿ ಶೇ. 60 ಕ್ಕಿಂತ ಹೆಚ್ಚು ಒತ್ತು ನೀಡಿರುವುದು ಕಾಣಬಹುದಾಗಿದೆ ಎಂದರು.ಮುಂದಿನ ಹತ್ತು ವರ್ಷದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ ಕ್ಷೇತ್ರಕ್ಕೆ ಉತ್ತಮ ಅವಕಾಶವಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್‍ನ ಉಪಾಧ್ಯಕ್ಷರಾದ ನವೀನ್ ಅಂಬೆಕಲ್ಲು ಅವರು ಮಾತನಾಡಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಬೆಳವಣಿಗೆಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತಾಗಬೇಕು. ವರ್ತಕರು ಸೇರಿದಂತೆ ಪ್ರತಿಯೊಬ್ಬರಿಗೂ ಮಾಹಿತಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಬೃಹತ್ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಸಲಹೆ ಮಾಡಿದರು.ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎಚ್.ಕೆ.ರವಿ , ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಿ.ದೇವೇಂದ್ರನ್ ಮಾತನಾಡಿದರು. ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಸಿ.ಎನ್.ರಘು, ನಂದ ಕಿಶೋರ್, ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು, ಇಲಾಖೆಯ ಅಧಿಕಾರಿಗಳು ಇತರರು ಇದ್ದರು.
