ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ: ನೂರುನ್ನೀಸ

| Published : Jan 11 2024, 01:31 AM IST

ಸಾರಾಂಶ

ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು. ತಿಂಗಳಿಗೆ ಎರಡು ಬಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಹಠಾತ್ ಭೇಟಿ ನೀಡಿ ಹಾಲು, ಮೊಟ್ಟೆ ಸೇರಿದಂತೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆಯೆ ಎಂಬುದನ್ನು ಪರಿಶೀಲಿಸಿ, ಮೇಲಾಧಿಕಾರಿಗಳಿಗೆ ವರದಿ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಆಟದ ಮೈದಾನ ಇರಬೇಕು. ಅಂಗನವಾಡಿ ಪಕ್ಕದಲ್ಲಿ ಖಾಸಗಿ ಶೌಚಾಲಯಗಳನ್ನು ಕಟ್ಟಬಾರದು ಎಂದು ಸೂಚಿಸಿದರು.

ಪೋಷಕರು ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸುವುದು ತಪ್ಪು. ಭಿಕ್ಷಾಟನೆ ತಡೆಯುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿ/ಸಿಬ್ಬಂದಿ ಪ್ರಮುಖ ವೃತ್ತಗಳು, ರೈಲ್ವೇ/ಬಸ್ ನಿಲ್ದಾಣಗಳು, ಮತ್ತಿತರ ಸ್ಥಳಗಳಲ್ಲಿ ಪರಿಶೀಲಿಸಬೇಕು. ಅಲ್ಲದೆ ಬಾಲ್ಯ ವಿವಾಹ ಮಾಡುವವರ ಮೇಲೆ ದೂರು ದಾಖಲಿಸಿ ಅಂತಹವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಮೈತ್ರಿ ಯೋಜನೆ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಮಾತನಾಡಿ, ಬಾಣಂತಿಯರಿಗೆ ಎಲ್ಲಾ ಸೌಲಭ್ಯಗಳು ಸಿಗುತ್ತಿವೆಯೇ ಎಂದು ಅಧಿಕಾರಿಗಳು ಪ್ರತಿ ತಿಂಗಳು ಪರಿಶೀಲಿಸಿ ಅದರ ಮಾಹಿತಿ ನೀಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಬಾರದಂತೆ ನೋಡಿಕೊಳ್ಳಬೇಕು. ಮೈತ್ರಿ ಯೋಜನೆಯ ಬಗ್ಗೆ ಮಾಹಿತಿ ಇಲ್ಲದೆ ಯಾವುದೇ ಉಪಯೋಗವಾಗುತ್ತಿಲ್ಲ. ಆದ್ದರಿಂದ ಈ ಯೋಜನೆಯ ಮಾಹಿತಿ ನೀಡಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 1786 ಲಿಂಗತ್ವ ಸಂಖ್ಯಾತರಿದ್ದಾರೆ ಎಂದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಅಪರಾಧ) ರಾಮಚಂದ್ರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.