ಸಾರಾಂಶ
ಬಳ್ಳಾರಿ: ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಸಮರ್ಪಕ ಕ್ಲೋರಿನೇಷನ್‍ನೊಂದಿಗೆ ಶುದ್ಧೀಕರಿಸಿದ ನೀರು ಪೂರೈಕೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ ಎಲ್ಲ ತಾಲೂಕಿನ ತಾಪಂ ಇಒಗಳಿಗೆ ಸೂಚಿಸಿದರು.
ನಗರದ ಜಿಪಂನ ನಜೀರ್‌ಸಾಸಾಬ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ (20 ಅಂಶ ಸೇರಿದಂತೆ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನೀರಿನ ಮೂಲಗಳ ಪರಿಶೀಲನೆ ನಡೆಸಿ:
ಮುಂಗಾರು ಪೂರ್ವ ಮಳೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಕುಡಿಯುವ ನೀರನ್ನು ಕುದಿಸಿ ಆರಿಸಿ ಕುಡಿಯುವಂತೆ ಅರಿವು ಮೂಡಿಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗಬಾರದು. ಇದರ ಬಗ್ಗೆ ಎಚ್ಚರ ವಹಿಸಬೇಕು. ನಿರಂತರವಾಗಿ ನೀರಿನ ಮೂಲಗಳನ್ನು ಪರಿಶೀಲನೆ ನಡೆಸುತ್ತಿರಬೇಕು. ನೀರಿನ ಸಂಗ್ರಹಾಗಾರಗಳನ್ನು ಶುಚಿಗೊಳಿಸುತ್ತಿರಬೇಕು. ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ ನಂತರವೇ ಸರಬರಾಜು ಮಾಡಬೇಕು ಎಂದು ನಿರ್ದೇಶನ ನೀಡಿದರು.ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಿರಲಿ;
ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆ ಉತ್ತಮವಾಗಿದೆ. ಕೃಷಿ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ. ಜಿಲ್ಲೆಯ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬಿತ್ತನೆ ಬೀಜ ಪೂರೈಕೆಯಾಗದಂತೆ ನಿಗಾ ವಹಿಸಬೇಕು. ತಪ್ಪದೇ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ತಿಳಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಭತ್ತ, ಜೋಳ, ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ, ತೊಗರಿ, ರಾಗಿ ಸೇರಿ ಒಟ್ಟು 16,223 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ವಿತರಣೆ ಕಾರ್ಯ ಪ್ರಾರಂಭವಾಗಿದ್ದು, 921 ಕ್ವಿಂಟಲ್ ಬಿತ್ತನೆ ಬೀಜ ವಿತರಣೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ಸಭೆಗೆ ತಿಳಿಸಿದರು.
ಪ್ರಸ್ತಕ ಸಾಲಿಗೆ ಶೈಕ್ಷಣಿಕ ತರಗತಿಗಳು ಆರಂಭಗೊಂಡಿದ್ದು, ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಈಗಾಗಲೇ ಒದಗಿಸಿದ ಸ್ಮಾರ್ಟ್‍ಕ್ಲಾಸ್‍ಗಳು ಉಪಯೋಗವಾಗುತ್ತಿವೆಯೇ? ಎಂದು ವಿಚಾರಿಸಿದ ಅವರು, ಜಿಲ್ಲೆಯಲ್ಲಿ ಕಲಿಕೆಯ ಬೆಳವಣಿಗೆಯಾಗಬೇಕು. ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗಬೇಕು ಎಂದು ತಿಳಿಸಿದರು.ಸರ್ಕಾರಿ ಸಂಬಂಧಿತ ಕೆಲಸಗಳಿಗೆ ಸಾರ್ವಜನಿಕರನ್ನು ಅಲೆದಾಡಿಸುವಂತಿಲ್ಲ. ನಿಗದಿತ ಕಾಲಾವಧಿಯೊಳಗೆ ಕೆಲಸ ಮಾಡಿಕೊಡಬೇಕು ಎಂದು ಎಲ್ಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಸತಿನಿಲಯಗಳಿಗೆ ಪೂರೈಸಿದ ಸಾಮಗ್ರಿಗಳು, ವಿದ್ಯಾರ್ಥಿಗಳಿಗೆ ಪೂರೈಸಿದ ಹಾಸಿಗೆ ಹಾಗೂ ಇತರೆ ವಸ್ತುಗಳ ಮಾಹಿತಿ ನೀಡಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಮಾತನಾಡಿ, ವಸತಿನಿಲಯಗಳಲ್ಲಿ ಸ್ವಚ್ಛತೆ ಮತ್ತು ಊಟದ ವ್ಯವಸ್ಥೆ ಕುರಿತು ದೂರು ಕೇಳಿ ಬರುತ್ತಿದ್ದು, ಅಧಿಕಾರಿಗಳು ವಸತಿನಿಲಯಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಪ್ರಗತಿ ಆ್ಯಪ್‌ನಲ್ಲಿ ಮಾಹಿತಿ ನಮೂದಿಸಿ:ಜಿಲ್ಲೆಯಲ್ಲಿ ವಿವಿಧ ವಸತಿ ಶಾಲೆಗಳಿಗೆ ಭೇಟಿ ನೀಡಲು ವೇಳಾಪಟ್ಟಿ ಮತ್ತು ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದ ವಿವರ ನಮೂದಿಸಲು, ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿಶೇಷವಾಗಿ ಜಿಪಂನಿಂದ ಪ್ರಗತಿ ಆ್ಯಪ್ ರಚಿಸಿದೆ. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳಿಗೆ ತಮ್ಮ ಇಲಾಖೆಗಳಿಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಹಾಗೂ ವೇಳಾಪಟ್ಟಿಯಂತೆ ಕ್ಷೇತ್ರ ಭೇಟಿ, ಪರಿಶೀಲನೆ ನಡೆಸಲು ಮತ್ತು ಪರಿಶೀಲನೆ ನಡೆಸಿದ ಎಲ್ಲ ವಿವರಗಳನ್ನು ಅದರಲ್ಲಿ ನಮೂದಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಉಪವಿಭಾಗಾಧಿಕಾರಿ ಹೇಮಂತ್ ಎನ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಪಂ ಇಒಗಳು ಹಾಗೂ ಇತರರು ಉಪಸ್ಥಿತರಿದ್ದರು.