ಸಾರಾಂಶ
ಪಠ್ಯಕ್ರಮದಲ್ಲಿ ಈ ಕೋರ್ಸ್‌ಗಳನ್ನು ಅಳವಡಿಸಿಕೊಳ್ಳಬೇಕು.
ಕಾರವಾರ: ಜಿಲ್ಲೆಯ ಯುವ ಜನತೆಗೆ ಸ್ಥಳೀಯವಾಗಿ ಉದ್ಯೋಗ ದೊರೆಯಲು ಅಗತ್ಯವಿರುವ ಕೋರ್ಸ್‌ಗಳ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಹಾಗೂ ಪಠ್ಯಕ್ರಮದಲ್ಲಿ ಈ ಕೋರ್ಸ್‌ಗಳನ್ನು ಅಳವಡಿಸಿಕೊಳ್ಳುವಂತೆ ಕೌಶಲ್ಯಾಭಿವವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದರು.
ಇಲ್ಲಿನ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೌಶಲ್ಯಾಭಿವವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿರುವ ಸೀಬರ್ಡ್ ನೌಕಾನೆಲೆ, ಕೈಗಾ ಸೇರಿದಂತೆ ಪ್ರಮುಖ ಉದ್ಯಮಗಳಲ್ಲಿ ಉದ್ಯೋಗ ಪಡೆಯಲು ಅಗತ್ಯವಿರುವ ಕೋರ್ಸ್‌ಗಳ ಬಗ್ಗೆ ಇಲ್ಲಿನ ಯುವ ಜನತೆಗೆ ತರಬೇತಿ ನೀಡುವುದರ ಮೂಲಕ ಅವರು ಸ್ಥಳೀಯವಾಗಿ ಉದ್ಯೋಗ ಪಡೆಯಲು ಅನುಕೂಲ ಮಾಡಿಕೊಡಬೇಕು ಎಂದು ಐಟಿಐ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಿದ ಸಚಿವರು, ಕಾಲೇಜುಗಳಲ್ಲಿ ಸಮಸ್ಯೆಗಳಿದ್ದರೆ ಗಮನಕ್ಕೆ ತನ್ನಿ ಎಂದರು.ಜಿಲ್ಲೆಯಲ್ಲಿ ಎನ್.ಆರ್.ಎಲ್.ಎಂ ಕಾರ್ಯಕ್ರಮಗಳ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿದ ಅವರು, ಡಮಾಮಿ ಸಿದ್ದಿ ಟೂರಿಸಂ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಎನ್.ಆರ್.ಎಲ್.ಎಂ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸೂಚಿಸಿದರು.
ಮೈಕ್ರೋ ಫೈನಾನ್ಸ್ ಹಾವಳಿ ತಡೆಯುವ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಫೈನಾನ್ಸ್‌ಗಳು ಆರ್‌ಬಿಐ ಮಾರ್ಗಸೂಚಿಗಳ ಉಲ್ಲಂಘನೆ ಮಾಡಿದಲ್ಲಿ ನಿಯಮಾನುಸಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಪಂ ಸಿಇಒ ಈಶ್ವರಕುಮಾರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ ಮೊದಲಾದವರು ಇದ್ದರು.