ಚಿಕ್ಕ ಸಂಸಾರಕ್ಕೆ ಆದ್ಯತೆ ನೀಡಿ: ಡಾ. ಯಲ್ಲಾ ರಮೇಶ್ ಬಾಬು

| Published : Jul 11 2025, 11:48 PM IST

ಸಾರಾಂಶ

ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಬಳ್ಳಾರಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಜನ ಜಾಗೃತಿ ಜಾಥಾಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಚಾಲನೆ ನೀಡಿದರು.

ಬಳ್ಳಾರಿ: ಜನಸಂಖ್ಯೆ ನಿಯಂತ್ರಣಕ್ಕಾಗಿ ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಪುರುಷ ಮತ್ತು ಮಹಿಳೆಯರಿಗೆ ಶಾಶ್ವತ ಶಸ್ತ್ರಚಿಕಿತ್ಸಾ ವಿಧಾನಗಳು ಲಭ್ಯವಿದ್ದು, ಪ್ರತಿಯೊಬ್ಬರೂ ಚಿಕ್ಕ ಸಂಸಾರಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಹೇಳಿದರು.

ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಟುಂಬ ಕಲ್ಯಾಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಹೆಚ್ಚುತ್ತಿರುವ ಜನಸಂಖ್ಯೆಯು ದೇಶದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯಲ್ಲಿ ಅನೇಕ ತೊಂದರೆಗಳನ್ನು ಉಂಟುಮಾಡುತ್ತದೆ. ಹಾಗಾಗಿ ದಂಪತಿ ಚಿಕ್ಕ ಸಂಸಾರಕ್ಕೆ ಆದ್ಯತೆ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಲ್ಯಾಪ್ರೊಸ್ಕೋಪಿಕ್ ಮತ್ತು ಟ್ಯುಬೆಕ್ಟಮಿ ಶಸ್ತ್ರಚಿಕಿತ್ಸೆ ಮೂಲಕ ಇಲ್ಲಿಯವರೆಗೆ 10,528 ಮಹಿಳಾ ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಗಾಯವಿಲ್ಲದ, ಹೊಲಿಗೆ ಇಲ್ಲದ ನೋ ಸ್ಕಾಲ್‌ಪೇಲ್ ವೆಸಕ್ಟಮಿ ಶಸ್ತ್ರಚಿಕಿತ್ಸೆಯ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ನೀಡಲಾಗುತ್ತಿದ್ದು, ಕುಟುಂಬದಲ್ಲಿ ಆಪ್ತ ಸಮಾಲೋಚನೆ ಮೂಲಕ ಶಸ್ತ್ರಚಿಕಿತ್ಸೆ ಪರಿಚಯಿಸಲಾಗುತ್ತಿದೆ ಎಂದು ತಿಳಿಸಿದರು.

ಡಾ. ಹನುಮಂತಪ್ಪ ಮಾತನಾಡಿ, ಮದುವೆ ನಂತರ ಕನಿಷ್ಠ ಮೂರು ವರ್ಷಗಳ ವರೆಗೆ ಮಕ್ಕಳಾಗುವುದನ್ನು ತಡೆಗಟ್ಟುವುದು, ಎರಡು ಮಕ್ಕಳಿಗೆ ಸಂತಾನ ನಿಯಂತ್ರಿಸುವುದು, ಒಂದು ಮಗುವಿನ ನಂತರ ಕನಿಷ್ಠ ಮೂರು ವರ್ಷ ಅಂತರವಿಡುವುದು. ಕುಟುಂಬ ಕಲ್ಯಾಣ ಪದ್ಧತಿ ಅಳವಡಿಸಿಕೊಳ್ಳುವಂತೆ ಸೂಚಿಸಲಾಗುತ್ತಿದ್ದು, ಎಲ್ಲ ರೀತಿಯಿಂದ ಜನಸಂಖ್ಯೆ ಸ್ಥಿರತೆ ಕಾಪಾಡಿ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಪಾಲುದಾರರಾಗೋಣ ಎಂದು ಹೇಳಿದರು.

ಜಾಥಾ ಜಿಲ್ಲಾ ಆಸ್ಪತ್ರೆಯ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಸಂಗಂ ವೃತ್ತದ ವರೆಗೆ ಬಂದು ಮರಳಿ ಜಿಲ್ಲಾ ಆಸ್ಪತ್ರೆಯ ಆವರಣಕ್ಕೆ ಕೊನೆಗೊಂಡಿತು. ಜಾಥಾದಲ್ಲಿ ಜಾಗೃತಿ ಫಲಕಗಳಿಂದ ಮತ್ತು ಭಿತ್ತಿಚಿತ್ರಗಳಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಇದೇ ವೇಳೆ ಕುಟುಂಬ ಕಲ್ಯಾಣ ವಿಧಾನಗಳ ಕುರಿತು ಭಿತ್ತಿಪತ್ರ ಅನಾವರಣಗೊಳಿಸಲಾಯಿತು. ಬಳಿಕ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಇಂದ್ರಾಣಿ ವಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್. ದಾಸಪ್ಪನವರ, ಡಾ. ದೊಡ್ಡನಗೌಡ, ಡಾ. ಸುರೇಶ ಕುಮಾರ, ಡಾ. ಪ್ರಿಯಾಂಕಾ, ಮಹಾದೇವಿ, ಗೋಪಾಲ್ ಕೆ.ಎಚ್., ಬಿಎಚ್‌ಇಒ ಶಾಂತಮ್ಮ, ಹಿರಿಯ ಆರೋಗ್ಯ ಸಂರಕ್ಷಣಾಧಿಕಾರಿ ಗಂಗಮ್ಮ, ಸೈನಿಕ ಕಲ್ಯಾಣ ಸಂಘದ ಪ್ರಹ್ಲಾದ ರೆಡ್ಡಿ ಭಾಗವಹಿಸಿದ್ದರು.