ಸಾರಾಂಶ
ಕನ್ನಡಪ್ರಭ ವಾರ್ತೆ ಹಾವೇರಿ
ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಮಕ್ಕಳಿಗೆ ಬಾಲ್ಯದಲ್ಲೇ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಲಾದ ಬಾಲ್ಯ ವಿವಾಹ ಮತ್ತು ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಮಕ್ಕಳು ದೈಹಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಗಾಗುತ್ತಿದ್ದಾರೆ. ೧೪ ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ ೧೮ ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸುವುದು ಅಪಾರಧವಾಗಿದೆ ಎಂದು ಹೇಳಿದರು.ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧವಾಗಿದೆ, ಹೆಣ್ಣು ಮಕ್ಕಳಿಗೆ ೧೮ ವರ್ಷ ಹಾಗೂ ಗಂಡು ಮಕ್ಕಳಿಗೆ ೨೧ ವರ್ಷ ಪೂರೈಸಿದ ನಂತರ ವಿವಾಹ ಮಾಡಬೇಕು. ಮಕ್ಕಳು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಶಿಕ್ಷಕರ ಮಾರ್ಗದರ್ಶನ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಮಕ್ಕಳ ರಕ್ಷಣೆ ಕಾನೂನುಗಳನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲ ಆರ್.ಐ. ಚನ್ನಪಟ್ಟಣ ಪೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳ ಕುರಿತು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ನೆರವು ಅಭಿರಕ್ಷಕ ಎನ್.ಎನ್. ಡಿಳ್ಳೆಪ್ಪನವರ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ, ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕುರಹಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವಿಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ ಉಪಸ್ಥಿತರಿದ್ದರು.