ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾ ಅಧಿಕಾರಿಗಳಾದ ಚಂದ್ರಕಾಂತ ಕುಂಬಾರ ಅಧ್ಯಕ್ಷತೆಯಲ್ಲಿ ದೇವರಹಿಪ್ಪರಗಿ ಪಟ್ಟಣದ ತಾಲೂಕು ಪಂಚಾಯತಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ವಸತಿ ಯೋಜನೆಗಳ ಪ್ರಗತಿ ಕುರಿತು ಪರಿಶೀಲನೆ ನಡೆಸಿ, ಪ್ರತಿ ಮನೆ ಮಂಜೂರಾತಿಗೆ ಸಂಬಂಧಿಸಿದ ಕಡತಗಳನ್ನು ತ್ವರಿತವಾಗಿ ಪರಿಶೀಲಿಸಿ ಅನುಮೋದನೆ ನೀಡುವಂತೆ ಸೂಚಿಸಲಾಯಿತು. ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ, ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಪ್ರತಿ ಸೋಮವಾರ ವಸತಿ ಯೋಜನೆಗಳಿಗೆ ಸಂಬಂಧಿಸಿದ ವಿಶೇಷ ಅಭಿಯಾನ ನಡೆಸಬೇಕು. ಪ್ರಧಾನಮಂತ್ರಿ ಆವಾಸ್ ಯೋಜನೆ (PMAY), ಬಸವ ಆವಾಸ ಯೋಜನೆ ಹಾಗೂ ಅಂಬೇಡ್ಕರ್ ಆವಾಸ ಯೋಜನೆಯ ಫಲಾನುಭವಿಗಳ ಮನೆ ನಿರ್ಮಾಣಕ್ಕೆ ಎದುರಾಗುವ ತೊಡಕು ನಿವಾರಿಸಿ, ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಯಿತು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಶಿಥಿಲಾವಸ್ಥೆಯ ಸರ್ಕಾರಿ ಹಾಗೂ ಖಾಸಗಿ ಕಟ್ಟಡಗಳ ಸಮಗ್ರ ಸಮೀಕ್ಷೆ ನಡೆಸಿ, ಜಿಲ್ಲಾ ಪಂಚಾಯತಿಗೆ ತ್ವರಿತವಾಗಿ ವರದಿ ಸಲ್ಲಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಹಾನಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.


ಮನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆ, ಕಾರ್ಮಿಕರ ತೊಡಗಿಸಿಕೊಳ್ಳುವಿಕೆ (Labour Engage), ಇ-ಕೆವೈಸಿ ಪ್ರಗತಿ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ತಿಳಿಸಲಾಯಿತು. ಜೊತೆಗೆ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ, ನೀರಿನ ಟ್ಯಾಂಕರ್‌ಗಳ ಸ್ವಚ್ಛತೆ ಹಾಗೂ ವಿವಿಧ ತರಬೇತಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚಲುವಯ್ಯ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಶಿವಾನಂದ ಮೂಲಿಮನಿ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ, ತಾಲೂಕು ಸಹಾಯಕ ಯೋಜನಾಧಿಕಾರಿ ಶ್ರೀನಿವಾಸ ಪವಾರ, ಎಸ್‌ಬಿಎಂ ವಿಷಯ ನಿರ್ವಾಹಕ ಆನಂದ ಮುದೋಡಗಿ, ತಾಲೂಕು ಪಂಚಾಯಿತಿ ವಿಷಯ ನಿರ್ವಾಹಕ ಗೊಲ್ಲಾಳ ರೋಡಗಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್‌ಗಳು ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.