ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಪರಿಹಾರ, ನಿರುದ್ಯೋಗ ನಿವಾರಣೆ ಹಾಗೂ ಪದವೀಧರರ ಹಿತ ಕಾಯಲು ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಮೂರನೇ ಬಾರಿಯೂ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು.
ಪಶ್ಚಿಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಕನೂರ ಪರ ಮತಯಾಚಿಸಿದ ಕೆಎಲ್ಇ ಸಂಸ್ಥೆಯ ನಿಕಟಪೂರ್ವ ಕಾರ್ಯಾಧ್ಯಕ್ಷ
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಪರಿಹಾರ, ನಿರುದ್ಯೋಗ ನಿವಾರಣೆ ಹಾಗೂ ಪದವೀಧರರ ಹಿತ ಕಾಯಲು ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಮೂರನೇ ಬಾರಿಯೂ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಕೆಎಲ್ಇ ಸಂಸ್ಥೆಯ ನಿಕಟಪೂರ್ವ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಮನವಿ ಮಾಡಿದರು.ಅವರು ಇಲ್ಲಿನ ಲಿಂಗರಾಜ ನಗರದ ಸಮುದಾಯ ಭವನದಲ್ಲಿ ಭಾನುವಾರ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಸಂಕನೂರ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ. ಸ್ವಚ್ಛ ಆಡಳಿತ ಹಾಗೂ ಮೃದು ಸ್ವಭಾವ ಹೊಂದಿರುವ ಅವರು, ಪದವೀಧರ ಕ್ಷೇತ್ರವನ್ನು ಸಮರ್ಥವಾಗಿ ಪ್ರತಿನಿಧಿಸಿದ್ದಾರೆ. ಸುಶಿಕ್ಷಿತರ ಕ್ಷೇತ್ರದ ಚುನಾವಣೆಯಲ್ಲಿ ಕಳೆದ ಬಾರಿ 8 ಸಾವಿರಕ್ಕೂ ಹೆಚ್ಚು ಮತಗಳು ಅಸಿಂಧುವಾಗಿರುವುದು ದುರದೃಷ್ಟಕರ. ಈ ಬಾರಿ ಮತದಾರರು ಎಚ್ಚರಿಕೆಯಿಂದ ಮತ ಚಲಾಯಿಸಿ ಸಂಕನೂರ ಅವರಿಗೆ ಬೆಂಬಲ ನೀಡಬೇಕು ಎಂದು ಹೇಳಿದರು.ಅಭ್ಯರ್ಥಿ ಎಸ್.ವಿ. ಸಂಕನೂರ ಮಾತನಾಡಿ, ರಾಜ್ಯದ ವಿವಿಧ ಇಲಾಖೆ, ನಿಗಮ-ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ 4 ಲಕ್ಷ ಹುದ್ದೆಗಳು ಖಾಲಿಯಿದ್ದು, ನೇಮಕಾತಿಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕಳೆದ 12 ವರ್ಷಗಳಿಂದ ಶಿಕ್ಷಕರು, ಸರ್ಕಾರಿ ನೌಕರರು ಹಾಗೂ ನಿರುದ್ಯೋಗಿ ಪದವೀಧರರ ಸಮಸ್ಯೆಗಳಿಗೆ ವಿಧಾನ ಪರಿಷತ್ನಲ್ಲಿ ಧ್ವನಿಯಾಗಿದ್ದೇನೆ. ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿದ ಪರಿಣಾಮ ಸರ್ಕಾರ 72 ಸಾವಿರ ಹುದ್ದೆ ಭರ್ತಿಗೆ ಮುಂದಾಗಿದೆ ಎಂದರು.
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ಹುದ್ದೆ ಭರ್ತಿ, ನಿವೃತ್ತ ಶಿಕ್ಷಕರಿಗೆ ಪಿಂಚಣಿ ಹಾಗೂ ಎನ್ಪಿಎಸ್ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗಾಗಿ ಹೋರಾಟ ಮುಂದುವರಿಸಲಾಗುವುದು. ಉದ್ಯೋಗಾಕಾಂಕ್ಷಿಗಳ ವಯೋಮಿತಿ ಐದು ವರ್ಷ ಸಡಿಲಿಕೆಗೂ ಪ್ರಯತ್ನಿಸಿದ್ದೇನೆ ಎಂದು ತಿಳಿಸಿದರು.ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಶಿಕ್ಷಕರಿಗೆ ಅನ್ಯಾಯವಾಗುತ್ತಿದ್ದು, ಶಿಕ್ಷಣ ಇಲಾಖೆಯಲ್ಲಿ ಸಮಸ್ಯೆಗಳು ಹನುಮಂತನ ಬಾಲದಂತೆ ಬೆಳೆಯುತ್ತಿವೆ. ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟದ ಅಗತ್ಯವಿದೆ. ನ. 17ರಂದು ಮೆರವಣಿಗೆ ಹಾಗೂ ನ. 18ರಂದು ಶಾಲಾ-ಕಾಲೇಜು ಬಂದ್ ಮಾಡುವ ಮೂಲಕ ದೊಡ್ಡ ಪ್ರಮಾಣದ ಹೋರಾಟ ನಡೆಸಲಾಗುವುದು. ಶಿಕ್ಷಕರ ಸಂಘಟನೆಗೆ ಬೆನ್ನೆಲುಬಾಗಿ ನಿಂತು, ಶಿಕ್ಷಕರು ನೆಮ್ಮದಿಯ ಜೀವನ ನಡೆಸಲು ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯಸಭಾ ಸದಸ್ಯ ಮಾ. ನಾಗರಾಜ ಮಾತನಾಡಿ, ಸಂಕನೂರ ಸಜ್ಜನಿಕೆಯ ರಾಜಕಾರಣಿಯಾಗಿದ್ದು, ಅವರ ಸೇವೆಯನ್ನು ಪರಿಗಣಿಸಿ ಮತದಾರರು ಬೆಂಬಲಿಸಬೇಕು ಎಂದರು.ಶಾಸಕ ಮಹೇಶ ಟೆಂಗಿನಕಾಯಿ, ಕೆಎಲ್ಇ ಸಂಸ್ಥೆಯ ಮಾಜಿ ನಿರ್ದೇಶಕ ಶಂಕರಣ್ಣ ಮುನವಳ್ಳಿ ಮಾತನಾಡಿದರು. ಕೆಎಲ್ಇ ನಿರ್ದೇಶಕ ಮಂಜುನಾಥ ಮುನವಳ್ಳಿ, ರಘು ಅಕಮಂಚಿ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ತಿಪ್ಪಣ್ಣ ಮಜ್ಜಗಿ, ವಸಂತ ನಾಡಜೋಶಿ, ಸಂದೀಪ ಬೂದಿಹಾಳ ಸೇರಿದಂತೆ ಹಲವರಿದ್ದರು. ಉಮೇಶ ಕೌಜಗೇರಿ ನಿರೂಪಿಸಿದರು.