ಜಿಪಂ, ತಾಪಂ ಚುನಾವಣೆಯಲ್ಲಿ ಗೆಲ್ಲುವ ಗುರಿ: ಡಾ.ಎನ್.ಎಸ್.ಇಂದ್ರೇಶ್

| Published : Mar 14 2025, 12:31 AM IST

ಜಿಪಂ, ತಾಪಂ ಚುನಾವಣೆಯಲ್ಲಿ ಗೆಲ್ಲುವ ಗುರಿ: ಡಾ.ಎನ್.ಎಸ್.ಇಂದ್ರೇಶ್
Share this Article
  • FB
  • TW
  • Linkdin
  • Email

ಸಾರಾಂಶ

ನಾನು ಅಧ್ಯಕ್ಷನಾದ ಬಳಿಕ ಲೋಕಸಭೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಮಂಡ್ಯ ನಗರಸಭೆ ಉಪಾಧ್ಯಕ್ಷ ಸ್ಥಾನ, ಮಳವಳ್ಳಿ ಪುರಸಭೆ ಅಧ್ಯಕ್ಷ, ಪಾಂಡವಪುರ ಪುರಸಭೆ ಉಪಾಧ್ಯಕ್ಷ ಸ್ಥಾನ, ಮನ್‌ಮುಲ್ ನಿರ್ದೇಶಕ ಸ್ಥಾನಗಳು ಪಕ್ಷಕ್ಕೆ ಒಲಿದುಬಂದಿವೆ. ಜಿಲ್ಲೆಯೊಳಗೆ ಮೈತ್ರಿಧರ್ಮ ಪಾಲನೆಯ ಜೊತೆಯಲ್ಲೇ ಪಕ್ಷಕ್ಕೂ ಶಕ್ತಿಯನ್ನು ತುಂಬಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮುಂಬರುವ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ನನ್ನ ಮುಂದಿರುವ ಪ್ರಮುಖ ಗುರಿಯಾಗಿದೆ ಎಂದು ಬಿಜೆಪಿ ಅಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಹೇಳಿದರು.

ಜಿಲ್ಲಾಧ್ಯಕ್ಷರಾಗಿ ಅಧಿಕೃತ ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ಕಾರ್ಯಕರ್ತರಿಗೆ ರಾಜಕೀಯ ಅಧಿಕಾರ ಸಿಗಬೇಕು ಎನ್ನುವುದು ನನ್ನ ಆಸೆ. ಅದರಂತೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ದಿಸೆಯಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ ಎಂದರು.

ನಾನು ಅಧ್ಯಕ್ಷನಾದ ಬಳಿಕ ಲೋಕಸಭೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಮಂಡ್ಯ ನಗರಸಭೆ ಉಪಾಧ್ಯಕ್ಷ ಸ್ಥಾನ, ಮಳವಳ್ಳಿ ಪುರಸಭೆ ಅಧ್ಯಕ್ಷ, ಪಾಂಡವಪುರ ಪುರಸಭೆ ಉಪಾಧ್ಯಕ್ಷ ಸ್ಥಾನ, ಮನ್‌ಮುಲ್ ನಿರ್ದೇಶಕ ಸ್ಥಾನಗಳು ಪಕ್ಷಕ್ಕೆ ಒಲಿದುಬಂದಿವೆ. ಜಿಲ್ಲೆಯೊಳಗೆ ಮೈತ್ರಿಧರ್ಮ ಪಾಲನೆಯ ಜೊತೆಯಲ್ಲೇ ಪಕ್ಷಕ್ಕೂ ಶಕ್ತಿಯನ್ನು ತುಂಬಲಾಗುತ್ತಿದೆ ಎಂದು ನುಡಿದರು.

ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ಜಿಲ್ಲಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿದೆ. ಈ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸ ನನ್ನಲ್ಲಿದೆ. ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ, ಕಾರ್ಯಕರ್ತರನ್ನು ಜೊತೆಗೂಡಿಸಿಕೊಂಡು ೨೦೨೮ರ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವಷ್ಟರ ಮಟ್ಟಿಗೆ ಸದೃಢಗೊಳಿಸುತ್ತೇನೆ. ೨೦೧೯ ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಕೆ.ಸಿ.ನಾರಾಯಣಗೌಡರಿಂದ ಜಿಲ್ಲೆಯೊಳಗೆ ಬಿಜೆಪಿ ಖಾತೆ ತೆರೆದಿದೆ. ಹಿಂದೆಂದಿಗಿಂತಲೂ ಬಿಜೆಪಿ ಜಿಲ್ಲೆಯೊಳಗೆ ಪ್ರವರ್ಧಮಾನಕ್ಕೆ ಬಂದಿದೆ. ಮಂಡ್ಯ ಜಿಲ್ಲೆಯನ್ನು ಬಿಜೆಪಿ ಭದ್ರಕೋಟೆ ಮಾಡಬೇಕೆಂಬ ಛಲದೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗುವುದಾಗಿ ಹೇಳಿದರು.