ಸಾರಾಂಶ
ಶಿರಸಿ: ವಕ್ಫ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶ ಹೊರಡಿಸುವುದರ ಜತೆ ಇದಕ್ಕೆ ಸಂಬಂಧಿಸಿದ ಗೆಜೆಟ್ ನೋಟಿಫಿಕೇಶನ್ ಹಿಂಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ನಗರದ ಆಡಳಿತ ಸೌಧದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮ್ಮದ್ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಮಾತನಾಡಿ, ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ. ಅದರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ತನ್ನ ಕರಾಳ ಕೈಚಳಕವನ್ನು ಮಾಡುವ ಮೂಲಕ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ಟ ನಿಡಗೋಡ ಮಾತನಾಡಿ, ಹಿಂದೂ ವಿರೋಧಿ ರಾಜ್ಯ ಸರ್ಕಾರವು ವಕ್ಫ್ ಮಂಡಳಿಯ ಪರವಾಗಿ ನಿಂತಿದೆ. ಜಮೀರ್ ಅಹಮ್ಮದ್ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ಇಳಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು. ಕೇಂದ್ರ ಸರ್ಕಾರವು ಜಾರಿಗೊಳಿಸುತ್ತಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರವು ಮುಂದಿನ ಅಧಿವೇಶನದಲ್ಲಿ ಒಮ್ಮತದಿಂದ ನಿರ್ಣಯ ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿದರು.ಶಿರಸಿ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಮಾತನಾಡಿದರು. ತಹಸೀಲ್ದಾರ್ ಶ್ರೀಧರ ಮುಂದಲಮನಿ ಅವರು ಮನವಿ ಸ್ವೀಕರಿಸಿದರು.ಪ್ರತಿಭಟನೆಯಲ್ಲಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ, ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ನಗರ ಮಂಡಲಾಧ್ಯಕ್ಷ ಆನಂದ ಸಾಲೇರ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ, ಸ್ವರ್ಣವಲ್ಲಿ ಮಠದ ಅಧ್ಯಕ್ಷ ವಿ.ಎನ್. ಹೆಗಡೆ ಬೊಮ್ನಳ್ಳಿ, ಪ್ರಮುಖರಾದ ಆರ್.ಡಿ. ಹೆಗಡೆ ಜಾನ್ಮನೆ, ನಾಗರಾಜ ನಾಯ್ಕ, ರವಿಚಂದ್ರ ಶೆಟ್ಟಿ, ಆರ್.ವಿ. ಹೆಗಡೆ ಚಿಪಗಿ, ಶ್ರೀರಾಮ ನಾಯ್ಕ, ನಾಗರಾಜ ಶೆಟ್ಟಿ, ಗಣಪತಿ ನಾಯ್ಕ, ನಂದನ ಸಾಗರ, ನವೀನ ಶೆಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.ಸಾಮರಸ್ಯ ಹದಗೆಡಲು ಕಾಂಗ್ರೆಸ್ ಕಾರಣ
ಹಳಿಯಾಳ: ರೈತರ ಜಮೀನುಗಳನ್ನು ವಕ್ಫ್ ಆಸ್ತಿಯೆಂದು ಪರಿಗಣಿಸಿ ನೋಟಿಸ್ ನೀಡಿರುವ ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪಟ್ಟಣದಲ್ಲಿ ಸೋಮವಾರ ಬಿಜೆಪಿ ಘಟಕದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ರವಾನಿಸಲಾಯಿತು.ಪಟ್ಟಣದ ಗಣೇಶ ಕಲ್ಯಾಣಮಂಟಪದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯು ಮುಖ್ಯ ಮಾರ್ಗಗಳಲ್ಲಿ ಸಂಚರಿಸಿ ಶಿವಾಜಿ ವೃತ್ತದಲ್ಲಿ ಬಂದು ಕೊನೆಗೊಂಡು ಪ್ರತಿಭಟನಾ ಸಭೆಯಾಗಿ ಪರಿವರ್ತನೆಗೊಂಡಿತು.ಪ್ರತಿಭಟನೆಯ ಮುಂದಾಳತ್ವವನ್ನು ವಹಿಸಿದ್ದ ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ರಾಜ್ಯ ಸರ್ಕಾರ ಹಾಗೂ ವಕ್ಫ್ ಮಂಡಳಿಯವರು ವಿವೇಚನೆಯಿಲ್ಲದೇ ಕೈಗೊಳ್ಳುತ್ತಿರುವ ನಿಲುವುಗಳಿಂದ ರಾಜ್ಯದಲ್ಲಿ ಸಾಮರಸ್ಯತೆಯು ಹದಗೆಡಲು ಕಾರಣವಾಗಿದೆ. ರಾಜ್ಯದಲ್ಲಿ ಮುಂದಾಗುವ ಅನಾಹುತಗಳಿಗೆ ನೇರವಾಗಿ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದರು.
ಬಿಜೆಪಿ ಜಿಲ್ಲಾ ಮುಖಂಡ ಮಂಗೇಶ ದೇಶಪಾಂಡೆ ಮಾತನಾಡಿ. ಪ್ರಧಾನಿಯವರು ದೇಶದ ಹಿತದೃಷ್ಟಿಯಿಂದ ವಕ್ಫ್ ಕಾಯ್ದೆಗೆ ತಿದ್ದುಪಡಿ ಕೈಗೊಳ್ಳಲು ಮುಂದಾಗಿರುವುದನ್ನು ಕಂಡು ಅರಗಿಸಿಕೊಳ್ಳಲಾಗದೇ ವಕ್ಫ್ ಮಂಡಳಿಯು ತನ್ನ ಕರಾಳ ಕೈಚಳಕವನ್ನು ಆರಂಭಿಸಿದೆ ಎಂದರು.ಪ್ರತಿಭಟನಾ ಸಭೆಯ ನಂತರ ತಾಲೂಕಾಡಳಿತ ಸೌಧಕ್ಕೆ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ ಅವರಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಅಧ್ಯಕ್ಷ ವಿಠ್ಠಲ ಸಿದ್ದನ್ನವರ, ಪ್ರಧಾನ ಕಾರ್ಯದರ್ಶಿ ಸಂತೋಷ ಘಟಕಾಂಬ್ಳೆ, ಪ್ರಮುಖರಾದ ಆಕಾಶ ಉಪ್ಪಿನ, ಬಸಣ್ಣ ಕುರುಬಗಟ್ಟಿ, ಸಂಗೀತಾ ಜಾವಳೇಕರ, ಸೋಮೇಶ ಹುಂಡೆಕರ, ಉಮೇಶ ದೇಶಪಾಂಡೆ, ಪ್ರದೀಪ ಹಿರೇಕರ, ಸಂತಾನ ಸಾವಂತ, ಮೋಹನ ಬೆಳಗಾಂವಕರ ಹಾಗೂ ಪುರಸಭೆಯ ಸದಸ್ಯರು ಇದ್ದರು.