ಸಾರಾಂಶ
ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಪುತ್ತಿಲ ಪರಿವಾರ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು. ಇದರಅಂಗವಾಗಿ ಸನಾತನ ಸಮಾಗಮ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭವಾರ್ತೆ ಪುತ್ತೂರುಮನುಷ್ಯ ತನ್ನ ಸಂಪತ್ತನ್ನು ಸಮಾಜಕ್ಕಾಗಿ ವಿನಿಯೋಗ ಮಾಡಿದಾಗ ಮಾತ್ರ ದೇವರ ಕೃಪೆ ದೊರೆಯಲು ಸಾಧ್ಯ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಭಾನುವಾರ ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಪುತ್ತಿಲ ಪರಿವಾರ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಅಂಗವಾಗಿ ನಡೆದ ಸನಾತನ ಸಮಾಗಮ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.ಚಿತ್ರಾಪುರ ಮಠದ ವಿದ್ಯೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ನಮ್ಮಲ್ಲಿ ಸಾತ್ವಿಕ ಶಕ್ತಿ ಬಲಗೊಳ್ಳಬೇಕಾದರೆ ದೇವರಿಗೆ ನಮ್ಮನ್ನು ಅರ್ಪಿಸಿಕೊಳ್ಳುವ ಚಿಂತನೆ ಹುಟ್ಟಬೇಕು ಎಂದರು.
ಕಣಿಯೂರು ಚಾಮುಂಡೇಶ್ವರಿ ಕ್ಷೇತ್ರದ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ, ಸನಾತನ ಧರ್ಮಕ್ಕೆ ವಿನಾಶವಿಲ್ಲ ಎಂದರು.ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿ, ಸಮಾಜದ ವ್ಯವಸ್ಥೆಯನ್ನು ಹಾಳು ಮಾಡುವ ಕಾರ್ಯಗಳು ನಡೆಯುತ್ತಿವೆ. ಈ ಬಗ್ಗೆ ಜಾಗೃತರಾಗುವ ಅಗತ್ಯವಿದೆ ಎಂದರು.
ವಿಟ್ಲ ಯೋಗೀಶ್ವರ ಮಠದ ಶ್ರದ್ಧಾನಾಥ ಜೀ ಸಾನ್ನಿಧ್ಯ ವಹಿಸಿದ್ದರು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಶಶಾಂಕ್ ಕೋಟೆಚಾ, ಸ್ವಾಗತ ಸಮಿತಿಯ ಸಂಚಾಲಕ ಪ್ರಸನ್ನಕುಮಾರ್ ಮಾರ್ತ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್ ಬನ್ನೂರು ಮತ್ತಿತರರು ಇದ್ದರು.ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು ಸ್ವಾಗತಿಸಿದರು. ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಪ್ರಾಸ್ತಾವಿಕ ಮಾತನಾಡಿದರು. ಬಾಲಕೃಷ್ಣ ಪೊರ್ದಾಳ್ ನಿರೂಪಿಸಿದರು.
ಉಪ್ಪಿನಂಗಡಿಯಿಂದ ಆಗಮಿಸಿದ ದೇವರಿಗೆ ಬೊಳುವಾರಿನಲ್ಲಿ ಪೂರ್ಣಕುಂಭ ಸ್ವಾಗತಿಸಲಾಯಿತು. ತೆರೆದ ವಾಹನದಲ್ಲಿ ಶ್ರೀನಿವಾಸ ದೇವರ ಮೂರ್ತಿಯನ್ನಿಟ್ಟು ಬೊಳುವಾರಿನಿಂದ ಮಹಾಲಿಂಗೇಶ್ವರ ದೇವಳದ ಗದ್ದೆ ವರೆಗೆ ಭವ್ಯ ಶೋಭಾಯಾತ್ರೆ ನಡೆಯಿತು.