ಸುಗಂಧದ್ರವ್ಯದ ಗೋದಾಮಿನಲ್ಲಿ ಬೆಂಕಿ ಅವಘಡ; ಲಕ್ಷಾಂತರ ಹಾನಿ

| Published : Apr 22 2024, 02:03 AM IST

ಸಾರಾಂಶ

ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪ ಘಟನೆ ನಡೆದು ಭಾರೀ ಪ್ರಮಾಣದ ಹಾನಿಯುಂಟಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದ ಸುಗಂಧದ್ರವ್ಯ ಹಾಗೂ ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರು. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮೆಟ್ರೋ ನಿಲ್ದಾಣ ಹಿಂಭಾಗದ ರಸ್ತೆಯಲ್ಲಿರುವ ಮೂರು ಮಹಡಿ ಕಟ್ಟಡದಲ್ಲಿ ಸುಗಂಧದ್ರವ್ಯ ಹಾಗೂ ಪ್ಲಾಸ್ಟಿಕ್ ವಸ್ತುಗಳ ಗೋದಾಮಿದೆ. ಭಾನುವಾರ ಮುಂಜಾನೆ 2.15ರ ಸುಮಾರಿಗೆ ಗೋದಾಮಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅಗ್ನಿಶಾಮಕ ಸಿಬ್ಬಂದಿ ಮೂರು ವಾಹನಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಸುಮಾರು ಆರು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಇನ್ನೂ ಯಾವುದೇ ದೂರು ದಾಖಲಾಗಿಲ್ಲ. ಹೀಗಾಗಿ ಬೆಂಕಿ ಅವಘಡದ ನಷ್ಟದ ನಿಖರ ಮಾಹಿತಿ ಇಲ್ಲ. ಗೋದಾಮಿನ ಮಾಲೀಕರು ದೂರು ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.