ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ವಿಶ್ವ ಗೀತಾ ಪರ್ಯಾಯಕ್ಕೆ ಶಿಖರಪ್ರಾಯವಾಗಿ ದೆಹಲಿಯ ಕೃಷ್ಣ ಭಕ್ತರೊಬ್ಬರು ಸುಮಾರು ₹2 ಕೋಟಿ ವೆಚ್ಚದಲ್ಲಿ ಸಿದ್ಧಪಡಿಸಿರುವ ‘ಸುವರ್ಣ ಭಗವದ್ಗೀತೆ’, ಜ.8ರಂದು ಸಂಜೆ 5 ಗಂಟೆಗೆ ಶ್ರೀಕೃಷ್ಣ ಸನ್ನಿಧಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ

 ಉಡುಪಿ : ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ವಿಶ್ವ ಗೀತಾ ಪರ್ಯಾಯಕ್ಕೆ ಶಿಖರಪ್ರಾಯವಾಗಿ ದೆಹಲಿಯ ಕೃಷ್ಣ ಭಕ್ತರೊಬ್ಬರು ಸುಮಾರು ₹2 ಕೋಟಿ ವೆಚ್ಚದಲ್ಲಿ ಸಿದ್ಧಪಡಿಸಿರುವ ‘ಸುವರ್ಣ ಭಗವದ್ಗೀತೆ’, ಜ.8ರಂದು ಸಂಜೆ 5 ಗಂಟೆಗೆ ಶ್ರೀಕೃಷ್ಣ ಸನ್ನಿಧಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಹೊತ್ತಗೆಯಲ್ಲಿ ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಚಿನ್ನದ ಹಾಳೆಯಲ್ಲಿ ಅಂದವಾಗಿ ಮುದ್ರಿಸಲಾಗಿದೆ.

ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ

ಸಂಜೆ 5 ಗಂಟೆಗೆ ಹೊನ್ನಿನ ಭಗವದ್ಗೀತಾ ಹೊತ್ತಗೆಯನ್ನು ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮೂಲಕ ಕೃಷ್ಣ ಸನ್ನಿಧಿಗೆ ತರಲಾಗುವುದು. ಬಳಿಕ, ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಲಾಗುವುದು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಮುಖರು

ಈ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಮುಖರು ಹಾಗೂ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಟ್ರಸ್ಟ್ ವಿಶ್ವಸ್ಥ ಡಾ.ಅನಿಲ್ ಮಿಶ್ರಾ, ಪಂಢರಾಪುರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಗಹನೀನಾಥ ಜ್ಞಾನೇಶ್ವರ ಮಹಾರಾಜ್ ಔಶೇಕರ್ ಹಾಗೂ ಆಳಂದ ಜ್ಞಾನೇಶ್ವರ ಮಹಾರಾಜ್ ಪೀಠದ ಪ್ರಧಾನ ಅರ್ಚಕ ಗಿರೀಶ್ ತುಕ್ರಿ ಅಭ್ಯಾಗತರಾಗಿ ಆಗಮಿಸುವರು ಎಂದು ಪರ್ಯಾಯ ಮಠದ ದಿವಾನ ನಾಗರಾಜ ಆಚಾರ್ಯ ಮತ್ತು ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.