ಸರ್ಕಾರಿ ನೌಕರರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕನ್ನಡಪ್ರಭ ವಾರ್ತೆ ಕಾರವಾರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಜಿಲ್ಲೆಯ ಎಲ್ಲ ಸಾರ್ವಜನಿಕರು ಮತ್ತು ರಾಜಕೀಯ ಪಕ್ಷಗಳು ಉತ್ತಮ ಸಹಕಾರ ನೀಡುತ್ತಿದ್ದು, ನಿಗದಿಪಡಿಸಿದ ಅವಧಿಗಿಂತಲೂ ಮೊದಲೇ ಜಿಲ್ಲೆಯಲ್ಲಿ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಈಗಾಗಲೇ ಶೇ. 100ರಷ್ಟು ಎಮ್ಯುನರೇಷನ್ ಫಾರಂಗಳನ್ನು ಮತದಾರರಿಗೆ ವಿತರಿಸಲಾಗಿದೆ. ಫಾರಂಗಳ ಡಿಜಿಟಲೈಸೇಷನ್ ಪ್ರಕ್ರಿಯೆಯಲ್ಲಿ ಶೇ. 64ರಷ್ಟು ಪ್ರಗತಿ ಸಾಧಿಸಲಾಗಿದೆ. ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ, ಒಂದು ಕುಟುಂಬದ ಮತದಾರರು ಬೇರೆ ಮತದಾನ ಕೇಂದ್ರಗಳಲ್ಲಿ ಹಂಚಿಕೆಯಾಗುವುದನ್ನು ತಪ್ಪಿಸಲಾಗುವುದು ಎಂದರು.

ಸರ್ಕಾರಿ ನೌಕರರಿಗೆ ದಿನನಿತ್ಯದ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಮುಕ್ತಾಯಗೊಳಿಸುವ ಒತ್ತಡಗಳಿರುವುದರಿಂದ ತಮ್ಮ ಆರೋಗ್ಯದ ಕಡೆ ಕಾಳಜಿ ವಹಿಸುವುದು ಅತ್ಯಗತ್ಯವಾಗಿದ್ದು, ಆರೋಗ್ಯದಲ್ಲಿ ಯಾವುದಾದರೂ ಸಮಸ್ಯೆ ಕಂಡುಬಂದಲ್ಲಿ ಯಾವುದೋ ಒಂದು ಮಾತ್ರೆ ಸೇವಿಸಿ ತಾವೇ ವೈದ್ಯರಾಗದೇ, ವೈದ್ಯರಲ್ಲಿ ಪರೀಕ್ಷಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಪ್ರತಿಯೊಬ್ಬ ಅಧಿಕಾರಿ ನೌಕರರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಂಡು ಆರೋಗ್ಯವಂತವಾಗಿರಬೇಕು ಎಂದರು.


ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಲೈಫ್‌ಸ್ಟೈಲ್ ಕಾಯಿಲೆಗಳು ಈಗ ಸಾಮಾನ್ಯವಾಗಿವೆ. ಇವುಗಳನ್ನು ನಿರ್ಲಕ್ಷಿಸದೇ ಸೂಕ್ತ ಸಮಯದಲ್ಲಿ ಪರೀಕ್ಷಿಸಿಕೊಂಡು ಅಗತ್ಯ ಚಿಕಿತ್ಸೆ ಪಡೆಯಬೇಕು ಎಂದರು.

ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಎಸ್‌ಐಆರ್‌ ಪ್ರಕಿಯೆಗಳು ನಡೆಯುತ್ತಿರುವ ಈ ಅವಧಿಯಲ್ಲಿ ಒಟಿಪಿ ಮೂಲಕ ಮತದಾರರನ್ನು ವಂಚಿಸುವ ಕುರಿತಂತೆ ಎಚ್ಚರ ವಹಿಸುವಂತೆ ಸಾರ್ವಜನಿಕರಿಗೆ ಪೊಲೀಸ್ ಇಲಾಖೆಯಿಂದ ಅರಿವು ಮೂಡಿಸುತ್ತಿರುವುದಾಗಿ ಹೇಳಿದರು.

ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಜಯ್ ದೊಡ್ಡಮನಿ ಇದ್ದರು.

ಆರೋಗ್ಯ ಶಿಬಿರದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ಸೇರಿದಂತೆ ಹಲವು ಕೊಠಡಿಗಳಲ್ಲಿ ನೌಕರರ ಸಂಪೂರ್ಣ ಆರೋಗ್ಯದ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದ್ದು, ರಕ್ತದೊತ್ತಡ, ಮಧುಮೇಹ, ಇಸಿಜಿ, ಎಕ್ಸ್‌-ರೇ, ಕಣ್ಣು, ದಂತ, ಚರ್ಮ, ಮೂಳೆ ಮತ್ತು ಎಲುಬು, ಕಿವಿ ಮೂಗು ಗಂಟಲು ಸೇರಿದಂತೆ ಎಲ್ಲ ವಿಧದ ರೋಗಗಳ ಪರೀಕ್ಷೆ ನಡೆಸಲಾಯಿತು. ಜಿಲ್ಲಾಧಿಕಾರಿ ಕೂಡಾ ತಮ್ಮ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆಯನ್ನು ಮಾಡಿಸಿಕೊಂಡರು. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಾರ್ವಜನಿಕರಿಗೂ ಆರೋಗ್ಯ ಶಿಬಿರದಲ್ಲಿ ತಪಾಸಣೆ ನಡೆಸಲಾಯಿತು.