ಪೌಷ್ಟಿಕಾಂಶಯುಕ್ತ ಆಹಾರ, ಹಸಿರು ತರಕಾರಿ, ಹಣ್ಣು ಹಾಗೂ ಕ್ಯಾಲ್ಸಿಯಂಯುಕ್ತ ಆಹಾರ ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು

ಕಾರಟಗಿ: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಇಲ್ಲಿನ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಮಾತನಾಡಿದ ಆರ್ ಬಿಎಸ್ ಕೆ ವೈದ್ಯಾಧಿಕಾರಿ ಡಾ.ಸಂತೋಷ್ ಕುಮಾರ, ಉತ್ತಮ ಆರೋಗ್ಯವೇ ಉತ್ತಮ ಭವಿಷ್ಯದ ಅಡಿಪಾಯ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಜಂಕ್ ಫುಡ್ ಸೇವನೆಯಿಂದ ದೂರವಿದ್ದು, ಪೌಷ್ಟಿಕಾಂಶಯುಕ್ತ ಆಹಾರ, ಹಸಿರು ತರಕಾರಿ, ಹಣ್ಣು ಹಾಗೂ ಕ್ಯಾಲ್ಸಿಯಂಯುಕ್ತ ಆಹಾರ ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದರು.

ದಿನಕ್ಕೆ ಎರಡು ಬಾರಿ ಹಲ್ಲುಗಳನ್ನು ಭ್ರಷ್ ಮಾಡುವ ಮೂಲಕ ದಂತ ಆರೋಗ್ಯ ಕಾಪಾಡಿಕೊಳ್ಳಬೇಕು ಹಾಗೂ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.ಆರ್‌ಬಿಎಸ್‌ಕೆ ಯೋಜನೆಯ ವಿಶೇಷತೆ ಕುರಿತು ಮಾಹಿತಿ ನೀಡಿದ ಅವರು, ಗಂಭೀರ ಹೃದಯ ಕಾಯಿಲೆ ಸೇರಿದಂತೆ ಇತರ ಆರೋಗ್ಯ ಸಮಸ್ಯೆ ಕಂಡುಬಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಈ ಹಿಂದೆ ಬೆಂಗಳೂರಿಗೆ ತಪಾಸಣೆಗಾಗಿ ಕಳುಹಿಸಲಾಗುತ್ತಿತ್ತು. ಆದರೆ ಈ ವರ್ಷದಿಂದಲೇ ಕೊಪ್ಪಳದಲ್ಲಿಯೇ ಪ್ರಾಥಮಿಕ ತಪಾಸಣೆ ನಡೆಸಿ ಗಂಭೀರ ಆರೋಗ್ಯ ಸಮಸ್ಯೆ ದೃಢಪಟ್ಟಲ್ಲಿ ಬೆಂಗಳೂರು ಹಾಗೂ ಹೈದರಾಬಾದ್‌ನ ವಿಶೇಷ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ವ್ಯವಸ್ಥೆ ಸರ್ಕಾರ ಕಲ್ಪಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಅಮರೇಶ್ ಮೈಲಾಪುರ, Prevention is Better Than Cure ಎಂಬ ಆಂಗ್ಲ ಗಾಧೆಮಾತನ್ನು ಉಲ್ಲೇಖಿಸಿ, ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಮುಂಚಿತವಾಗಿಯೇ ಆರೋಗ್ಯದ ಬಗ್ಗೆ ಜಾಗೃತಿ ವಹಿಸುವುದು ಅತ್ಯಂತ ಮುಖ್ಯ ಎಂದು ಹೇಳಿದರು.

ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆ ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ದೊರಕುವಂತೆ ನೋಡಿಕೊಳ್ಳುವುದು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸರ್ಕಾರದ ಇಂತಹ ಜನಪರ ಆರೋಗ್ಯ ಯೋಜನೆಗಳ ಸದುಪಯೋಗ ಪ್ರತಿಯೊಬ್ಬ ವಿದ್ಯಾರ್ಥಿಯೂ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶುಶ್ರೂಷಕಿ ನಾಗರತ್ನ, ನೇತ್ರಾಧಿಕಾರಿ ವಿಜಯಕುಮಾರ್, ಶಿಕ್ಷಕ ರಾಮಪ್ಪ ಹಳ್ಳಿಕೇರಿ, ಅತಿಥಿ ಶಿಕ್ಷಕರಾದ ಯಶೋಧ ಹಾಗೂ ಶ್ರಾವಣಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಆಯೋಜಿಸಲಾದ ಆರೋಗ್ಯ ತಪಾಸಣಾ ಶಿಬಿರ ಮಕ್ಕಳಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದರ ಜತೆಗೆ ಗಂಭೀರ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಉಚಿತ ಚಿಕಿತ್ಸೆ ದೊರಕುವಂತೆ ಮಾಡುವ ಮಹತ್ವದ ಸೇತುವೆಯಾಗಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪರಿಣಾಮಕಾರಿ ಹೆಜ್ಜೆಯಾಗಿದೆ ಎಂದರು.