ಸಾರಾಂಶ
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಕರಪತ್ರವನ್ನು ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್ ಬಿಡುಗಡೆಗೊಳಿಸಿದರು. ಪ್ರಧಾನ ವ್ಯವಸ್ಥಾಪಕ ಡಾ.ಎಚ್.ಕೆ.ಶಿವಕುಮಾರ್, ಸಹಾಯಕ ಕೃಷಿ ನಿರ್ದೇಶಕ ಚಂದ್ರಕುಮಾರ್ ಇದ್ದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್‌ಎಂಇ) ಯೋಜನೆಯಡಿ ಅರ್ಜಿ ಸಲ್ಲಿಕೆಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ(ಕೆಪೆಕ್) ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್ ಸಂತಸ ವ್ಯಕ್ತಪಡಿಸಿದರು.ಕೆಪೆಕ್ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಿಎಂಎಫ್‌ಎಂಇ ಯೋಜನೆಯಡಿ 2026 ರ ಮಾ.31ರೊಳಗೆ 5 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವ ಗುರಿಯನ್ನು ರಾಜ್ಯ ಸರ್ಕಾರ ನೀಡಿದೆ. ಈಗಾಗಲೇ 4074 ಅರ್ಜಿ ಸ್ವೀಕರಿಸಲಾಗಿದೆ. ಇದಲ್ಲದೆ, 141 ಅರ್ಜಿ ಜಿಲ್ಲಾ ಸಮಿತಿಗಳ ಬಳಿ ಹಾಗೂ 438 ಅರ್ಜಿಗಳನ್ನು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು ಸ್ವೀಕರಿಸಿದ್ದಾರೆ. ಇವುಗಳ ಪೈಕಿ 2073 ಅರ್ಜಿಗಳನ್ನು ಬ್ಯಾಂಕ್‌ಗಳು ಪರಿಶೀಲಿಸುತ್ತಿವೆ ಎಂದು ಮಾಹಿತಿ ನೀಡಿದರು.
ಪಿಎಂಎಫ್‌ಎಂಇಯು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 5 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವ ಗುರಿಯನ್ನು ಘೋಷಿಸಿದ್ದಾರೆ. ಇದಕ್ಕಾಗಿ ಬಜೆಟ್‌ನಲ್ಲಿ 206 ಕೋಟಿ ರು. ಅನುದಾನ ಒದಗಿಸಲಾಗಿದೆ ಎಂದು ವಿವರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಕೆಪೆಕ್ ಪ್ರಧಾನ ವ್ಯವಸ್ಥಾಪಕ ಡಾ.ಎಚ್.ಕೆ.ಶಿವಕುಮಾರ್, ಸಹಾಯಕ ಕೃಷಿ ನಿರ್ದೇಶಕ ಚಂದ್ರಕುಮಾರ್ ಉಪಸ್ಥಿತರಿದ್ದರು.
ಅ.9ಕ್ಕೆ ರೈತ ಉತ್ಪಾದಕಸಂಸ್ಥೆಗಳ ಸಮ್ಮೇಳನ
ಪಿಎಂಎಫ್‌ಎಂಇ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಅನುಕೂಲವಾಗುವಂತೆ ಅ.9 ರಂದು ನಗರದ ಟೌನ್‌ಹಾಲ್‌ನಲ್ಲಿ ‘ರೈತ ಉತ್ಪಾದಕ ಸಂಸ್ಥೆಗಳ ಸಮ್ಮೇಳನ’ ಆಯೋಜಿಸಲಾಗಿದ್ದು, ಬೆಳಗ್ಗೆ 10 ಗಂಟೆಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಪಿಎಂಎಫ್‌ಎಂಇ ಯೋಜನೆಯ ಕುರಿತು ತಜ್ಞರು ಸಮಗ್ರ ಮಾಹಿತಿ ನೀಡಲಿದ್ದು, ಪ್ರಶ್ನೋತ್ತರ-ಸಂವಾದ ನಡೆಯಲಿದೆ ಎಂದು ಸಿ.ಎನ್.ಶಿವಪ್ರಕಾಶ್ ತಿಳಿಸಿದರು.