ಸಾರಾಂಶ
ತೊಗರಿಹಂಕಲ್ ಮತ್ತು ದಾಸರಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಸಂತೆ ಮಾರ್ಕೆಟ್, ಗುಡ್ಡೇನಹಳ್ಳಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಶೋಷಿತ ವರ್ಗದವರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದಿಂದ ಸರ್ಕಾರ ಅಂಬೇಡ್ಕರ್, ಬುದ್ಧ, ಬಸವ, ಕನಕದಾಸರ ವಿಚಾರ ಧಾರೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಅಭಿವೃದ್ಧಿಗೆ ಸಂಕಲ್ಪ ಮಾಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಶನಿವಾರ ತೊಗರಿಹಂಕಲ್ ಮತ್ತು ದಾಸರಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 20 ಲಕ್ಷ ರು.ವೆಚ್ಚದಲ್ಲಿ ಸಂತೆ ಮಾರ್ಕೆಟ್, ಗುಡ್ಡೇನಹಳ್ಳಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಚಿಕ್ಕಮಗಳೂರು ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಬಿಜೆಪಿಯವರು ಆರೋಪಿಸುತ್ತಿದ್ದರು. ಅವರಿಗೆ ಕಳೆದ ಆರು ತಿಂಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಮೂಲಕ ಉತ್ತರ ನೀಡಿದ್ದೇನೆ ಎಂದರು.
₹ 5 ಕೋಟಿ ವೆಚ್ಚದಲ್ಲಿ ಸಿಆರ್‌ಎಫ್ ಯೋಜನೆಯಡಿ ಮಲ್ಲೇನಹಳ್ಳಿಯಿಂದ ಸಂತವೇರಿವರೆಗೆ ಹೊಸದಾಗಿ ಡಾಂಬರೀಕರಣ ಮಾಡಲು ಉದ್ದೇಶಿಸಿದ್ದು, ಮಳೆಗಾಲ ಮುಗಿದ ಬಳಿಕ ಕಾಮಗಾರಿ ಆರಂಭವಾಗಲಿದೆ ಎಂದ ಅವರು, ಚಿಕ್ಕಮಗಳೂರು ನಗರದಲ್ಲಿ ಅಲ್ಪಸಂಖ್ಯಾತರು ವಾಸ ವಾಗಿರುವ ಬಡಾವಣೆಯಲ್ಲಿ ಸುಮಾರು ₹5 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ನಡೆಯುತ್ತಿದೆ ಎಂದು ಹೇಳಿದರು.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ಬಡವರಿಗೆ ಬದುಕು ಕಟ್ಟಿಕೊಟ್ಟಿದೆ. ಇದಕ್ಕಾಗಿ ₹59 ಸಾವಿರ ಕೋಟಿ ವ್ಯಯ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಕ್ಕೆ ಉತ್ತರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಪ್ರಿಯಾಂಕ ಖರ್ಗೆ ನೇತೃತ್ವದಲ್ಲಿ ಚಿಕ್ಕಮಗಳೂರು ಕ್ಷೇತ್ರಕ್ಕೆ ₹25 ಕೋಟಿ ಅನುದಾನವನ್ನು ಆಡಳಿತಾತ್ಮಕ ಮಂಜೂರಾತಿ ನೀಡಿದ್ದು, ಈಗ ಹಣ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಲು ಆದೇಶ ನೀಡಿದ್ದಾರೆಂದರು.
ಚಿಕ್ಕಮಗಳೂರು ಕ್ಷೇತ್ರದ 34 ಗ್ರಾ.ಪಂ ವ್ಯಾಪ್ತಿಯ ಅಭಿವೃದ್ಧಿಗೆ ₹15 ಕೋಟಿ ವೆಚ್ಚದಲ್ಲಿ ಗ್ರಾಮೀಣಾಭಿವೃದ್ಧಿ ರಸ್ತೆಗಳಿಗೆ ಖರ್ಚು ಮಾಡಲಾಗುವುದು. ₹7 ಕೋಟಿ .ಅನುದಾನದಲ್ಲಿ ₹4 ಕೋಟಿ ದೇವಾಲಯಗಳಿಗೆ, ₹3 ಕೋಟಿ ಸಮುದಾಯ ಭವನಗಳ ನಿರ್ಮಾಣಕ್ಕೆ ಮೀಸಲಿಡಲಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಜಿಪಂ ಮಾಜಿ ಅಧ್ಯಕ್ಷ ಕೆ. ಮಹಮದ್, ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟಗೆರೆ ಪ್ರವೀಣ್, ಗ್ರಾ.ಪಂ ಸದಸ್ಯ ಸುರೇಶ್, ಲೋಕೇಶ್, ಪನ್ನೀರ್, ಸ್ವಾಮಿಗೌಡ. ದಾಸರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೀಪಕ್, ಎಪಿಎಂಸಿ ಮಾಜಿ ಅಧ್ಯಕ್ಷ ಶಿವೇಗೌಡ, ಉಪಾಧ್ಯಕ್ಷೆ ಮಾಲಾಶ್ರೀ, ಗ್ರಾಪಂ ಸದಸ್ಯರಾದ ಮಂಜು, ವಿನೋದ, ಲಲಿತಾ, ಚಂದ್ರಶೇಖರ್ ಉಪಸ್ಥಿತರಿದ್ದರು.19 ಕೆಸಿಕೆಎಂ 4ಚಿಕ್ಕಮಗಳೂರು ತಾಲೂಕಿನ ತೊಗರಿಹಂಕಲ್ ಮತ್ತು ದಾಸರಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ₹20 ಲಕ್ಷ ವೆಚ್ಚದಲ್ಲಿ ಸಂತೆ ಮಾರ್ಕೆಟ್, ಗುಡ್ಡೇನಹಳ್ಳಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕ ಎಚ್.ಡಿ. ತಮ್ಮಯ್ಯ ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.