ಮಹಿಳೆಯರ ಏಳಿಗೆಗಾಗಿ ಗೃಹಲಕ್ಷ್ಮೀಯಂತಹ ಮಹತ್ತರ ಯೋಜನೆ ಜಾರಿಗೆ ತಂದಿದ್ದು, ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ಹಣ ತಲುಪುತ್ತಿದೆ. ಸಾರ್ವಜನಿಕರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.

ಕುಂದಗೋಳ:

ರಾಜ್ಯ ಕಾಂಗ್ರೆಸ್ ಸರ್ಕಾರವು ಬಡವರ ಹಿತ ಕಾಯಲು ಬದ್ಧವಾಗಿದೆ ಎಂದು ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.

ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಸಾರ್ವಜನಿಕ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಮಹಿಳೆಯರ ಏಳಿಗೆಗಾಗಿ ಗೃಹಲಕ್ಷ್ಮೀಯಂತಹ ಮಹತ್ತರ ಯೋಜನೆ ಜಾರಿಗೆ ತಂದಿದ್ದು, ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ಹಣ ತಲುಪುತ್ತಿದೆ. ಸಾರ್ವಜನಿಕರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಮಾಜಿ ಶಾಸಕ ಎಂ.ಎಸ್. ಅಕ್ಕಿ ಮಾತನಾಡಿ, ಕೇಂದ್ರ ಸರ್ಕಾರವು ಸಕ್ಕರೆ, ಬಂಗಾರ, ಬೆಳ್ಳಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೆಣ್ಣು ಮಕ್ಕಳಿಗೆ ಗೃಹಲಕ್ಷ್ಮೀ ನೀಡುತ್ತಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಜುಟ್ಟಲ್ ಮಾತನಾಡಿ, ಬಡವರ ಏಳಿಗೆಯೇ ಸರ್ಕಾರದ ಮೂಲ ಮಂತ್ರವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬರೂ ಸರಿಯಾಗಿ ಬಳಸಿಕೊಳ್ಳಬೇಕು ಎಂದರು.ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಸತೀಶ ಕೊಬ್ಬಯ್ಯನವರು ಮಾತನಾಡಿದರು. ಇದೇ ವೇಳೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಹಾಗೂ ಶತಾಯುಷಿ ಗದಿಗೆಮ್ಮ ಕರಿಮಲ್ಲಣ್ಣ ಅವರನ್ನು ಸನ್ಮಾನಿಸಲಾಯಿತು.

ಕುಂದಗೋಳ ಕಲ್ಯಾಣಪುರ ಮಠದ ಶ್ರೀಅಭಿನವ ಬಸವಣ್ಣಜ್ಜನವರು ಆಶೀರ್ವಚನ ನೀಡಿದರು. ಈ ವೇಳೆ ತಾಪಂ ಇಒ ಜಗದೀಶ ಕಮ್ಮಾರ, ಗ್ಯಾರಂಟಿ ಸಮಿತಿ ಸದಸ್ಯರಾದ ಅಡಿವೇಪ್ಪ ಹೆಬಸೂರ, ಗೀತಾ ಕೊಟಿಗೌಡ್ರ, ಯಲ್ಲಪ್ಪ ಸಿಂಗಣ್ಣವರ, ವೆಂಕಣ್ಣ ಸಂಶಿ, ಸೋಮಣ್ಣ ಹೊಸಮನಿ, ಗ್ರಾಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮದ ಗುರು-ಹಿರಿಯರು ಉಪಸ್ಥಿತರಿದ್ದರು.