ಸಾರಾಂಶ
ಇಲ್ಲಿಯ ನೆಹರು ಕ್ರೀಡಾಂಗಣದಲ್ಲಿ ಮೇ 18ರಿಂದ 20ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿಯ ನೆಹರು ಕ್ರೀಡಾಂಗಣದಲ್ಲಿ ಮೇ 18ರಿಂದ 20ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2017ರಲ್ಲಿ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ನಡೆದಿತ್ತು. ಇದೀಗ ಎಂಟು ವರ್ಷಗಳ ನಂತರ ಮತ್ತೊಮ್ಮೆ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ18ರಂದು ಸಂಜೆ 5 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸುವರು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರೀಡಾ ಜ್ಯೋತಿ ಸ್ವೀಕರಿಸಲಿದ್ದಾರೆ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 15,000 ನೌಕರ ಕ್ರೀಡಾಪಟುಗಳು ಆಗಮಿಸುವ ನಿರೀಕ್ಷೆಯಿದೆ. ಕ್ರೀಡೆಯಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳಿಗೆ ಊಟ, ವಸತಿ ಹಾಗೂ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವೈಯುಕ್ತಿಕವಾಗಿ 97 ಸ್ಪರ್ಧೆಗಳು, 16 ಗುಂಪು ಸ್ಪರ್ಧೆಗಳು ನಡೆಯಲಿವೆ. ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವೈಯಕ್ತಿಕ 15 ಹಾಗೂ 16 ಗುಂಪು ಸ್ಪರ್ಧೆಗಳು ನಡೆಯಲಿವೆ. ಮೇ 18ರಂದು ನಗರದ ಎನ್ಇಎಸ್ ಮೈದಾನದಲ್ಲಿ ನೋಂದಣಿ ನಡೆಯಲಿದೆ. ಪಾಲ್ಗೊಳ್ಳುವ ಎಲ್ಲ ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.ಪೋಟೋ: 13ಎಸ್‌ಎಂಜಿಕೆಪಿ03ಶಿವಮೊಗ್ಗದ ಪತ್ರಿಕಾಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿದರು.