ರೈತರಿಗೆ ರಸಗೊಬ್ಬರ ಪೂರೈಸಲು ಸರ್ಕಾರ ವಿಫಲ

| Published : Jul 24 2025, 12:45 AM IST

ರೈತರಿಗೆ ರಸಗೊಬ್ಬರ ಪೂರೈಸಲು ಸರ್ಕಾರ ವಿಫಲ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಅಂಚಿಗೆ ತಳ್ಳಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದೆ. ತೆರಿಗೆ ವಸೂಲಿಗಿಳಿದು ಸಣ್ಣ ವ್ಯಾಪಾರಿಗಳನ್ನು ಶೋಷಣೆ ಮಾಡಲು ಆರಂಭಿಸಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಆರೋಪಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಅಂಚಿಗೆ ತಳ್ಳಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದೆ. ತೆರಿಗೆ ವಸೂಲಿಗಿಳಿದು ಸಣ್ಣ ವ್ಯಾಪಾರಿಗಳನ್ನು ಶೋಷಣೆ ಮಾಡಲು ಆರಂಭಿಸಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಆರೋಪಿಸಿದರು.

ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಗಳ ಜನ್ಮದಿನದ ಪ್ರಯುಕ್ತ ಬುಧವಾರ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದಿಗೆಗೆ ಪೂಜೆ ಸಲ್ಲಿಸಿ, ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಮಾತನಾಡಿದ ರೇಣುಕಾಚಾರ್ಯ, ಮುಖ್ಯಮಂತ್ರಿ, ಕೃಷಿ ಮಂತ್ರಿಗಳು ಅಧಿಕಾರಿಗಳ ಸಭೆ ನಡೆಸಿ ರಾಜ್ಯದಲ್ಲಿ ಬೇಡಿಕೆ ಇರುವ ಯೂರಿಯವನ್ನು ಪೂರೈಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವ ಆಸಕ್ತಿ ವಹಿಸಿಲ್ಲ, ಸರ್ಕಾರದಲ್ಲಿ ಹಣವಿಲ್ಲ. ಹಣಕ್ಕಾಗಿ ಜನರನ್ನು ವಿವಿಧ ರೂಪದಲ್ಲಿ ಶೋಷಣೆ ಮಾಡುತ್ತಿದ್ದಾರೆ. ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.

ಧರ್ಮಸ್ಥಳದ ನಿಗೂಢ ಸಾವಿನ ಪ್ರಕರಣಗಳ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ವಹಿಸಿದೆ. ನಿಸ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗ ಪಡಿಸಬೇಕು. ಕೆಲವು ವ್ಯಕ್ತಿಗಳು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ ವರ್ಚಸ್ಸು ಹಾಳು ಮಾಡುವ ಷಡ್ಯಂತರ ಮಾಡುತ್ತಿದ್ದಾರೆ. ತನಿಖೆ ನಂತರ ಸತ್ಯಾಂಶ ಹೊರಬರುತ್ತದೆ ಎಂದರು.

ರಾಜ್ಯ ಬಿಜೆಪಿ ಅಧ್ಯಕ್ಷರು ಸಮರ್ಥವಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ವಿಜಯೇಂದ್ರ ಅವರ ನೇತೃತ್ವದಲ್ಲೇ ನಡೆದು ಬಿಜೆಪಿ ಅಧಿಕಾರ ಹಿಡಿಯುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ರೇಣುಕಾಚಾರ್ಯ, ಅಧ್ಯಕ್ಷರ ಕುರ್ಚಿ ಅಲುಗಾಡುತ್ತಿದೆ ಎಂಬುದು ಭ್ರಮೆ. ಯಡಿಯೂರಪ್ಪ ಹಾಗೂ ವಿಜಯೇಂದ್ರರ ವಿರುದ್ಧ ನಿತ್ಯಾ ಮಾತನಾಡುತ್ತಿದ್ದವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಅವರ ಬಗ್ಗೆ ಮಾತನಾಡುವುದಿಲ್ಲ. ವೀರಶೈಲ ಲಿಂಗಾಯತರು ಒಳಪಂಗಡಗಳ ಬೇಧ ಬಿಟ್ಟು ಒಗ್ಗಟ್ಟಾಗಬೇಕು ಎಂದು ಹೇಳಿದರು.

ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಜಿಲ್ಲಾ ಯುವ ಅಧ್ಯಕ್ಷ ಡಾ.ದರ್ಶನ್ ಕೆ.ಎಲ್, ಮುಖಂಡರಾದ ಚಂಗಾವಿ ರವಿ, ಮರಿತಿಮ್ಮಯ್ಯ, ಅರುಣ್ ಮೊದಲಾದವರು ಈ ವೇಳೆ ಹಾಜರಿದ್ದರು.