ಈ ಸರ್ಕಾರವನ್ನು ಅಧಿಕಾರಕ್ಕೆ ತಂದಿರುವ ಜನ ಪಶ್ಚಾತಾಪ ಪಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿದರೂ, ಡಿ.ಕೆ.ಶಿವಕುಮಾರ್ ಅಥವಾ ದಲಿತ ಮುಖ್ಯಮಂತ್ರಿಯಾದರೂ ಈ ಸರ್ಕಾರದಲ್ಲಿ ಏನೂ ಬದಲಾಗಲ್ಲ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ್ಮ ಯುವಜನತೆಯ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.

ನಗರ ಹೊರವಲಯದ ಆಗಲಗುರ್ಕಿ ಗ್ರಾಮದಲ್ಲಿ ಭಾನುವಾರ ಗ್ರಾಮಸ್ಥರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಿಸಿದ ನಂತರ ಸುದ್ದಿಗಾರರು ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಪತ್ತೆ ಕಾರ್ಯಾಚರಣೆ ವರದಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಬೆಳಗಾವಿ ಅಧಿವೇಶನದಲ್ಲಿ ಈ ಪ್ರಕರಣ ಬಗ್ಗೆ ನಮ್ಮ ಪಕ್ಷದ ನಾಯಕರು ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ ಡಾ.ಪರಮೇಶ್ವರ್ ಅವರು ಉಡಾಫೆ ಉತ್ತರ ಕೊಟ್ಟಿದ್ದರು. ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಹಚ್ಚಿ, ಸುಮಾರು 390 ಕೋಟಿ ರು. ಮೌಲ್ಯದ 192 ಕೆಜಿ ಮೆಫೆಡೋನ್ ಡ್ರಗ್ಸ್ ವಶಪಡಿಸಿಕೊಂಡಿದ್ದ ಮಹಾರಾಷ್ಟ್ರ ಪೊಲೀಸರು, ಇದೀಗ ಬೆಂಗಳೂರಿನ 3 ಡ್ರಗ್ಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ 56 ಕೋಟಿ ರು. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್‌ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಮಟ್ಟಹಾಕಲು ಮಹಾರಾಷ್ಟ್ರ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್‌ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ? ಯುವ ಜನಾಂಗದ ಭವಿಷ್ಯಕ್ಕೆ ಮಾರಕವಾಗಿರುವ ಡ್ರಗ್ಸ್ ಮತ್ತು ಗಾಂಜಾ ದಂಧೆಯು ರಾಜ್ಯದ ಉದ್ದಗಲಕ್ಕೂ ಹರಡಿದ್ದು, ಗ್ರಾಮಾಂತರದ ಭಾಗಗಳಲ್ಲಿ ಅತಿಯಾಗಿದೆ. ಈ ದಂಧೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕ ಪೊಲೀಸರಿಗೆ ತಿಳಿಯದೆ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಮಾದಕ ದ್ರವ್ಯ ಕಾರ್ಖಾನೆಗಳನ್ನು ಹೇಗೆ ಪತ್ತೆಹಚ್ಚಬಹುದು ಎಂಉ ಪ್ರಶ್ನಿಸಿ, ಮುಖ್ಯಮಂತ್ರಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕುರ್ಚಿ ಕಿತ್ತಾಟದಲ್ಲಿ ಜನರು ಮತ್ತು ರಾಜ್ಯವನ್ನು ಮರೆತಿದ್ದಾರೆ. ಈ ಸರ್ಕಾರವನ್ನು ಅಧಿಕಾರಕ್ಕೆ ತಂದಿರುವ ಜನ ಪಶ್ಚಾತಾಪ ಪಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿದರೂ, ಡಿ.ಕೆ.ಶಿವಕುಮಾರ್ ಅಥವಾ ದಲಿತ ಮುಖ್ಯಮಂತ್ರಿಯಾದರೂ ಈ ಸರ್ಕಾರದಲ್ಲಿ ಏನೂ ಬದಲಾಗಲ್ಲ. ಮುಖ್ಯಮಂತ್ರಿಯ ಅಧಿಕಾರಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣಿಸಿ ಬರುತ್ತಿದ್ದರೆ, ಉಳಿದ ಸಚಿವರು ತಮ್ಮ ಕುರ್ಚಿ ಭದ್ರಕ್ಕಾಗಿ, ಶಾಸಕರು ತಾವು ಸಚಿವರಾಗಬೇಕೇಂದು ದೆಹಲಿಗೆ ಎಡತಾಕುವಲ್ಲಿ ಕಾರ್ಯನಿರತರಾಗಿದ್ದಾರೆ ಎಂದು ಹೇಳಿದರು. ಅಧಿಕಾರಿಗಳು ಸಹ ತಮ್ಮ ಸ್ವಂತ ಕೆಲಸ ಕಾರ್ಯಗಳು ಮತ್ತು ರಿಯಲ್ ಎಸ್ಟೇಟ್ ದಂಧೆಗಳಲ್ಲಿ ತೊಡಗಿ ಕೊಂಡಿರುವುದರಿಂದ ರಾಜ್ಯದ ಅಭಿವೃದ್ದಿ ಶೂನ್ಯವಾಗಿದೆ.ಪೊಲೀಸ್ ಅಧಿಕಾರಿಗಳ ಮೇಲೆ ಸರ್ಕಾರಕ್ಕೆ ಯಾವುದೇ ಹತೋಟಿ ಇಲ್ಲ. ಹಣ ಕೊಟ್ಟು ವರ್ಗಾವಣೆಯಾಗಿ ಬಂದಿರುವ ಅಧಿಕಾರಿಗಳಿಗೆ ಶಾಸಕರು, ಸಚಿವರ ಬಗ್ಗೆ ಗೌರವ ಇರುವುದಿಲ್ಲ. ಮೊನ್ನೆ ರಾತ್ರಿ ಚರ್ಚ್‌ನಲ್ಲಿ ಕ್ರಿಸ್‌ಮಸ್ ಸಂಭ್ರಮ ಮುಗಿಸಿ ಬೈಕಿನಲ್ಲಿ ಗ್ರಾಮಕ್ಕೆ ಮರಳುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಕೂಲಿ ಕಾರ್ಮಿಕ ಯುವಕರು ಮೃತಪಟ್ಟಿರುವುದೇ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಹೃದಯಾಘಾತಗಳ ಸಂಖ್ಯೆ ಹೆಚ್ಚಾಗಿದೆ. ಎಲ್ಲ ಇಲಾಖೆಯಲ್ಲಿ ಅವ್ಯವಸ್ಥೆ ಇದ್ದರೂ ಸರ್ಕಾರ ಇದ್ದೂ ಸತ್ತಂತೆ, ನಮ್ಮ ಸರ್ಕಾರವನ್ನು 40 ಪರ್ಸೆಂಟ್ ಸರ್ಕಾರ ಎನ್ನುತ್ತಿದ್ದರು. ಈಗ ಇವರದು ಎಷ್ಟು ಪರ್ಸೆಂಟ್ ಸರ್ಕಾರ ಎಂದು ಪ್ರಶ್ನಿಸಿದರು.