ದಲಿತರ, ಮಹಿಳೆಯರ ರಕ್ಷಣೆಯಲ್ಲಿ ಸರ್ಕಾರ ವಿಫಲ

| Published : Dec 17 2023, 01:45 AM IST

ಸಾರಾಂಶ

ರಾಜ್ಯದಲ್ಲಿ ದಲಿತರ, ಮಹಿಳೆಯರ ಮೇಲಿನ ದೌರ್ಜನ್ಯ, ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದರೂ ಇವುಗಳ ತಡೆಗೆ ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡುತ್ತಿಲ್ಲ. ಬರ ಬಂದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರವಾಗಬೇಕಾದ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದೆ. ಬೆಳಗಾವಿಯ ದಲಿತ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣದ ಬಗ್ಗೆ ಬಿಜೆಪಿ ಶಾಸಕರ ಹೋರಾಟ ಮಾಡುವ ತನಕ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳೆಯ ರಕ್ಷಣೆಗೆ ಬರಲಿಲ್ಲ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಆಪಾದಿಸಿದರು.

ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಆಗ್ರಹಿಸಿ ತುಮಕೂರಿನಲ್ಲಿ ಬಿಜೆಪಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ತುಮಕೂರು

ರಾಜ್ಯದಲ್ಲಿ ದಲಿತರ, ಮಹಿಳೆಯರ ಮೇಲಿನ ದೌರ್ಜನ್ಯ, ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದರೂ ಇವುಗಳ ತಡೆಗೆ ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡುತ್ತಿಲ್ಲ. ಬರ ಬಂದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರವಾಗಬೇಕಾದ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದೆ. ಬೆಳಗಾವಿಯ ದಲಿತ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣದ ಬಗ್ಗೆ ಬಿಜೆಪಿ ಶಾಸಕರ ಹೋರಾಟ ಮಾಡುವ ತನಕ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳೆಯ ರಕ್ಷಣೆಗೆ ಬರಲಿಲ್ಲ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಆಪಾದಿಸಿದರು.

ಜಿಲ್ಲಾ ಬಿಜೆಪಿಯಿಂದ ಶನಿವಾರ ನಗರದ ಬಿಜಿಎಸ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ವಂಟಮುರಿ ಗ್ರಾಮದ ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ ದೌರ್ಜನ್ಯವೆಸಗಿದ ಅಮಾನವೀಯ ಪ್ರಕರಣದಲ್ಲಿ ಮಹಿಳೆಗ ರಕ್ಷಣೆ, ನ್ಯಾಯ ಒದಗಿಸುವ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರು ನಾಟಕೀಯವಾಗಿ ನಡೆದುಕೊಂಡರು. ನಾಗರೀಕ ಸಮಾಜದ ತಲೆತಗ್ಗಿಸುವಂತಹ ಘಟನೆ ನಡೆದಿದ್ದರೂ ಅಧಿವೇಶನದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿಯಾಗಲಿ, ಸಂಬಂಧಿಸಿದ ಸಚಿವರಾಗಲಿ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಪ್ರಯತ್ನ ಮಾಡಲಿಲ್ಲ ಎಂದರು.

ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಮತ್ತೆ ಮರುಕಳಿಸಬಾರದಂತೆ ಹೊಸ ಕಾನೂನು ರೂಪಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮಂಡ್ಯದಲ್ಲಿ ವರದಿಯಾದ ಭ್ರೂಣ ಹತ್ಯೆ ಪ್ರಕರಣಗಳೂ ಅಮಾನವೀಯ. ಈ ಪ್ರಕರಣದಲ್ಲಿ ಕೆಲವರನ್ನು ಮಾತ್ರ ಬಂಧಿಸಲಾಗಿದೆ. ಅದರ ಗಂಭೀರತೆ ಅರಿತು ಸಮಗ್ರ ತನಿಖೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳದೆ, ಕಾಟಚಾರಕ್ಕೆ ನಿಭಾಯಿಸಿ ಕೈಬಿಡಲಾಗುತ್ತದೆ ಎಂದರು.

ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿಗೆ ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಈ ಸ್ಥಿತಿಯಲ್ಲಿ ರೈತರ ಸಹಕಾರ ಸಂಘಗಳಲ್ಲಿ ಪಡೆದ ಸಾಲ ಮರುಪಾವತಿ ಮಾಡುವ ರೈತರ ಬಡ್ಡಿ ಮಾಡುವ ಘೋಷಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ರೈತರಿಗೆ ಮಕ್ಮಲ್ ಟೋಪಿ ಹಾಕಲು ಹೊರಟಿದ್ದಾರೆ. ಭೀಕರ ಬರಪರಿಸ್ಥಿತಿಯಲ್ಲಿ ರೈತರು ಅಸಲು ತೀರಿಸಲಾಗದೆ ಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಶಿವಪ್ರಸಾದ್ ಒತ್ತಾಯಿಸಿದರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ನೀಡುವ ಹಣದ ಜೊತೆ ರಾಜ್ಯ ಸರ್ಕಾರ ನಾಲ್ಕು ಸಾವಿರ ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುವ ಯೋಜನೆಯನ್ನು ಸಿದ್ದರಾಮಯ್ಯ ಸರ್ಕಾರ ಸ್ಥಗಿತಗೊಳಿಸಿದೆ. ಈಗ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಹೇಳುವ ಮೂಲಕ ಸಂಕಷ್ಟದಲ್ಲಿರುವ ರೈತರಿಂದ ಸಾಲ ವಸೂಲಿ ಮಾಡುವ ಪ್ರಯತ್ನ ಮಾಡುತ್ತಿದೆಯೇ ಎಂದು ಪ್ರಶ್ನಿಸಿದರು. ಕೂಡಲೇ ರೈತರ ಎಲ್ಲಾ ಸಾಲ ಮನ್ನಾ ಮಾಡಬೇಕು. ಬೆಳೆ ನಷ್ಟಕ್ಕೀಡಾದ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್ ಮಾತನಾಡಿ, ಬೆಳಗಾವಿ ಜಿಲ್ಲೆಯ ದಲಿತ ಮಹಿಳೆಯ ವಿವಸ್ತ್ರ ಪ್ರಕರಣ ಅಮಾನವೀಯ, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಮಹಿಳೆಯರ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಬೇಕು. ಬರಗಾಲದ ಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಿ ಅವರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಟಿ. ಭೈರಪ್ಪ, ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ಗಂಗರಾಜು, ಮುಖಂಡರಾದ ಟಿ.ಆರ್. ಸದಾಶಿವಯ್ಯ, ಸತ್ಯಮಂಗಲ ಜಗದೀಶ್, ಚಂದ್ರಶೇಖರ್, ಡಿ.ಆರ್. ಬಸವರಾಜು, ರುದ್ರೇಶ್, ಬಂಬೂ ಮೋಹನ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಫೋಟೊರಾಜ್ಯದಲ್ಲಿ ದಲಿತರ, ಮಹಿಳೆಯರ ಮೇಲಿನ ದೌರ್ಜನ್ಯ, ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಳ ಖಂಡಿಸಿ ತುಮಕೂರು ಜಿಲ್ಲಾ ಬಿಜೆಪಿಯಿಂದ ನಗರದ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.