ಮಲೆನಾಡಿನ ಜನರ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ವಿಫಲ: ತೀ, ನಾ. ಶ್ರೀನಿವಾಸ್‌

| Published : May 18 2025, 01:20 AM IST

ಮಲೆನಾಡಿನ ಜನರ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ವಿಫಲ: ತೀ, ನಾ. ಶ್ರೀನಿವಾಸ್‌
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಿದ್ದಾರೆ. ಆದರೆ ಮಲೆನಾಡಿನ ಜನರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೊಟ್ಟ ಆಶ್ವಾಸನೆ, ಭರವಸೆ ಎರಡು ವರ್ಷವಾದರೂ ಈಡೇರಿಲ್ಲ. ಅವರು ನುಡಿದಂತೆ ನಡೆಯುವವರೆ ಆಗಿದ್ದರೆ ಮುಳುಗಡೆ ಸಂತ್ರಸ್ಥರ ಭೂಮಿ ಹಕ್ಕು ಸಮಸ್ಯೆ ಸೇರಿದಂತೆ ಮಲೆನಾಡಿನ ಜ್ವಲಂತ ಸಮಸ್ಯೆಗಳನ್ನು ಈಗಲಾದರೂ ಬಗೆಹರಿಸಲಿ ಎಂದು ಮಲೆನಾಡು ರೈತ ಹೋರಾಟ ಸಮಿತಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್ ಸವಾಲು ಹಾಕಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಮಲೆನಾಡು ರೈತರ ಸಮಸ್ಯೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ. ನುಡಿದಂತೆ ನಡೆದ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಮಲೆನಾಡಿನ ರೈತರ ಸಮಸ್ಯೆ ಬಗೆಹರಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿಲ್ಲ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಶರಾವತಿ ಮುಳುಗಡೆ ಸಂತ್ರಸ್ಥರ ಹಾಗೂ ಮಲೆನಾಡು ರೈತರ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ೨೦೨೨ ರ ನವೆಂಬರ್ ೨೮ ರಂದು ಈಗಿನ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಆಯನೂರಿನಿಂದ ಶಿವಮೊಗ್ಗದವರೆಗೂ ಪಾದಯಾತ್ರೆ ನಡೆಸಿದ್ದರು. ಅದೇ ದಿನ ಸಂಜೆ ಎನ್ ಇಎಸ್ ಮೈದಾನದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿ, ತಮ್ಮ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಮಲೆನಾಡು ರೈತರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಈಗ ಅವರು ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಈ ಭರವಸೆ, ಆಶ್ವಾಸನೆ ಯಾಕೆ ಈಡೇರಿಲ್ಲ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆನಾಡು ರೈತರ ಸಮಸ್ಯೆಯನ್ನು ಬಗೆಹರಿಸಲು ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ. ಮಲೆನಾಡಿನ ಸಮಸ್ಯೆ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಹೇಳುತ್ತಾರೆ. ವಾಸ್ತವದಲ್ಲಿ ತಮ್ಮದೇ ಕ್ಷೇತ್ರದಲ್ಲಿನ ಭೂಮಿ ಹಕ್ಕು ಸಮಸ್ಯೆಯನ್ನು ಸಚಿವರಿಂದ ಈಗಲೂ ಬಗೆಹರಿಸಲು ಆಗಿಲ್ಲ. ಇಂತಹದರಲ್ಲಿ ಜಿಲ್ಲೆಯ ಮಲೆನಾಡಿನ ರೈತರ ಸಮಸ್ಯೆಯನ್ನು ಸಚಿವರು ಬಗೆಹರಿಸಲು ಹೇಗೆ ಸಾಧ್ಯ? ಮುಖ್ಯಮಂತ್ರಿಗಳು ಈ ರೀತಿಯ ನಿರ್ಲಕ್ಷ್ಯ ಧೋರಣೆಯನ್ನು ಕೈಬಿಟ್ಟು, ನಿಜವಾದ ಕಾಳಜಿ ತೋರಿಸಲಿ ಎಂದು ಆಗ್ರಹಿಸಿದರು.

ಶರಾವತಿ, ವರಾಹಿ, ತುಂಗಾ ಮತ್ತು ಭದ್ರಾ ಸೇರಿದಂತೆ ಮುಳುಗಡೆ ಸಂತ್ರಸ್ಥರ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕು, 1978 ರ ಹಿಂದೆ ಅರಣ್ಯ ಭೂಮಿ ಸಾಗುವಳಿ ಮಾಡಿದವರು ಕೈ ಬರಹದ ಪಹಣಿ, ಟಿಡಿ ಹೊಂದಿದವರಿಗೆ ಭೂಮಿ ಹಕ್ಕು ಕೊಡಬೇಕು, ಮಲೆನಾಡಿನ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ನಾಳೆ ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವ ಸಂದರ್ಭದಲ್ಲಿ ಗಂಭೀರವಾಗಿ ಪರಿಗಣಿಸುವಂತೆ ಆಗ್ರಹಿಸಿದರು. ಗೋಷ್ಠಿಯಲ್ಲಿ ರೈತ ಮುಖಂಡರಾದ ಹರೀಶ್, ಸುರೇಶ್ ಹಾಗೂ ಶ್ರೀನಿವಾಸ್ ಇದ್ದರು.