ಆರೋಗ್ಯ ಮತ್ತು ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು

| Published : Feb 01 2025, 12:00 AM IST

ಸಾರಾಂಶ

ಆರೋಗ್ಯ ಮತ್ತು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಿರಲಿ ಎಂದು ಬಿಸಿಯೂಟ ಯೋಜನೆ, ಉಚಿತ ಪಠ್ಯಪುಸ್ತಕ, ಶುಲ್ಕ ರಹಿತ ಶಿಕ್ಷಣ ನೀಡುತ್ತಿದ್ದು, ಪೋಷಕರು ಸ್ಥಳೀಯ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ಆರೋಗ್ಯ ಮತ್ತು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಿರಲಿ ಎಂದು ಬಿಸಿಯೂಟ ಯೋಜನೆ, ಉಚಿತ ಪಠ್ಯಪುಸ್ತಕ, ಶುಲ್ಕ ರಹಿತ ಶಿಕ್ಷಣ ನೀಡುತ್ತಿದ್ದು, ಪೋಷಕರು ಸ್ಥಳೀಯ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.

ತಾಲೂಕಿನ ಕರಡಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ, ನೂತನ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿ, ಕರಡಾಳು ಪ್ರಾಥಮಿಕ ಶಾಲೆ ತಾಲೂಕಿನಲ್ಲಿ ಉತ್ತಮ ವಿದ್ಯಾರ್ಥಿ ಸಂಖ್ಯಾಬಲದೊಂದಿಗೆ ಗುಣಮಟ್ಟದ ಶಿಕ್ಷಣ ನೀಡಿ ತಾಲೂಕಿನ ಇತರ ಶಾಲೆಗಳಿಗೆ ಮಾದರಿ ಶಾಲೆಯಾಗಿದೆ. ಈ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿದ್ದು ಸುತ್ತಮುತ್ತಲು ಗ್ರಾಮದ ಪರಿಸ್ಥಿತಿ ತಿಳಿದು ಶಿಕ್ಷಕರು ಗುಣಮಟ್ಟದ ಬೋಧನೆ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ವಿಶೇಷವಾಗಿ ದೇಶದ ಮಹನೀಯರು, ಸೈನಿಕರು ಮರಣವನ್ನಪ್ಪಿದರೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಕ್ಕಳಿಗೆ ವಿಚಾರ ತಿಳಿಸಿ ನುಡಿ ನಮನ ಅರ್ಪಿಸುತ್ತಿದ್ದು ಇದರಿಂದ ಮಕ್ಕಳಲ್ಲಿ ದೇಶಾಭಿಮಾನ ಹೆಚ್ಚಲಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಮಾತನಾಡಿ, ಇಂತಹ ಕಾರ್ಯಕ್ರಮಗಳು ತಾಲೂಕಿನ ಎಲ್ಲಾ ಶಾಲೆಗಳಲ್ಲಿಯೂ ನಡೆದರೆ ಸರ್ಕಾರಿ ಶಾಲೆ ಮುಚ್ಚುವ ಪ್ರಮೆಯವೇ ಇರುವುದಿಲ್ಲ. ಈ ಶಾಲೆಯಲ್ಲಿ ಉತ್ತಮ ಆಟದ ಮೈದಾನ, ಹಸಿರು ವಾತಾವರಣ, ಉತ್ತಮ ಬೋಧನೆ, ಶುಚಿತ್ವದ ಬಿಸಿಯೂಟ, ಪೋಷಕರ ನಂಬಿಕೆಗೆ ಅರ್ಹವಾದ ಶಿಕ್ಷಣ ದೊರೆಯುತ್ತಿದೆ ಎಂದರು. ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಶಾಲೆಯ ವತಿಯಿಂದ ಗ್ರಾಮಸ್ಥರಿಗೆ ಶ್ರದ್ಧಾ ಐ ಕೇರ್ ಬೆಂಗಳೂರು ಇವರ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ಆಯೋಜಿಸಿ ೩೦೦ಕ್ಕೂ ಹೆಚ್ಚು ಜನರು ನೇತ್ರ ತಪಾಸಣೆ ಮಾಡಿಸಿದರು. ತಿಪಟೂರಿನ ಸರ್ಕಾರಿ ಆಸ್ಪತ್ರೆಯ ನೇತ್ರ ವೈದ್ಯ ವಿಶ್ವನಾಥ್ ಉಚಿತ ನೂರು ಕನ್ನಡಕಗಳನ್ನು ವಿತರಿಸಿದರು. ಇದೆ ಸಂದರ್ಭದಲ್ಲಿ ದೇಶದ ಖ್ಯಾತ ಉದ್ಯಮಿ ರತನ್ ಟಾಟಾ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಐಎಎಸ್ ಅಧಿಕಾರಿ ಶಿವರಾಂ ವೀರ ಮರಣವನ್ನಪ್ಪಿದ ಸೈನಿಕರಿಗೆ ನುಡಿ ನಮನ ಹಾಗೂ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಇದ್ದರು. ---------------------------------------

ಫೋಟೋ 31-ಟಿಪಿಟಿ2ರಲ್ಲಿ ಕಳುಹಿಸಲಾಗಿದೆ. ಶೀರ್ಷಿಕೆ : ತಿಪಟೂರಿನ ಕರಡಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿದ ಶಾಸಕ ಕೆ. ಷಡಕ್ಷರಿ.