- ಸರ್ಕಾರದ ಮೇಲೆ ಒತ್ತಡ ತರುವಂತೆ ನೌಕರರ ಆಗ್ರಹ
- - -ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲ ವೃಂದ ಸಂಘಗಳ ನೌಕರರು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಶಾಸಕರನ್ನು ಭೇಟಿಯಾದ ನೌಕರರು, ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಸಕಾಲಕ್ಕೆ ಇಲಾಖೆಯಿಂದ ಸಮರ್ಪಕ ಔಷಧಗಳನ್ನು ಪೂರೈಕೆ ಮಾಡದಿರುವುದು, ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 3 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಲು ಸರ್ಕಾರದ ಆದೇಶವಿದ್ದರೂ ಉಲ್ಲಂಘಿಸಿ, 1973 ರಿಂದ ಈವರೆಗೂ ವೃಂದ ಮತ್ತು ನೇಮಕಾತಿ ಪ್ರಕ್ರಿಯೆ ನಡೆಸಿಲ್ಲ, ಇಲಾಖೆಯ ಎಲ್ಲ ವೃಂದಗಳ ಜೇಷ್ಠತಾ ಪಟ್ಟಿ ಈವರೆಗೂ ಪ್ರಕಟಿಸಿಲ್ಲ, ಇಲಾಖೆಯ ಎಲ್ಲ ವೃಂದದ ಅಧಿಕಾರಿ, ನೌಕರರನ್ನು ಕಳೆದ ಐದು ವರ್ಷಗಳಿಂದ ಮುಂಬಡ್ತಿ ನೀಡಿಲ್ಲ. ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕಿ ನಮ್ಮ ಬೇಡಿಕೆ ಈಡೇರಿಸಬೇಕೆಂದು ಮನವಿ ಮಾಡಿದರು.ಅಲ್ಲದೇ, ನಿಯಮಗಳಲ್ಲಿ ಅವಕಾಶವಿದ್ದರೂ ಸೇವಾನಿರತ ವೈದ್ಯರು, ಅಧಿಕಾರಿ, ನೌಕರರ ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ನೀಡುತ್ತಿಲ್ಲ. ಇಲಾಖೆಯ ವರ್ಗಾವಣೆ ಕಾಯ್ದೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸದೇ ಅವೈಜ್ಞಾನಿಕವಾಗಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವುದನ್ನು ತಪ್ಪಿಸಲು ಒತ್ತಾಯಿಸಿದರು.
ನೌಕರರ ಮನವಿ ಸ್ವೀಕರಿಸಿದ ಶಾಸಕ ಕೆ.ಎಸ್.ಬಸವಂತಪ್ಪ ಅವರು, ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರು ಹಾಗೂ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭ ಆರೋಗ್ಯ ಇಲಾಖೆಯ ಎಲ್ಲ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಆರೋಗ್ಯ ಇಲಾಖೆ ಸಮಸ್ತ ಅಧಿಕಾರಿಗಳು, ನೌಕರರು ಪಾಲ್ಗೊಂಡಿದ್ದರು.
- - --27ಕೆಡಿವಿಜಿ40, 41: