ಸರ್ಕಾರದ ನಿರ್ಲಕ್ಷ್ಯ ಹಾಗೂ ದೀರ್ಘಕಾಲದಿಂದ ಬಗೆಹರಿಯದ ಸಮಸ್ಯೆಗಳಿಂದಾಗಿ ಅನೇಕ ಶಿಕ್ಷಣ ಸಂಸ್ಥೆಗಳು ಅಸ್ತಿತ್ವದ ಸಂಕಷ್ಟ ಎದುರಿಸುತ್ತಿವೆ.
ಹೊನ್ನಾವರ: ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರ ಹಾಗೂ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ತಾಲೂಕು ಘಟಕದ ಅಧ್ಯಕ್ಷ ಸಂತೋಷಕುಮಾರ ಅವರ ನೇತೃತ್ವದಲ್ಲಿ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ನೇತೃತ್ವದಲ್ಲಿ, ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಅಂಗವಾಗಿ ಇಲ್ಲಿ ಹೋರಾಟ ನಡೆಸಲಾಯಿತು.ಅನುದಾನಿತ ಶಾಲಾ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ, ಖಾಲಿ ಹುದ್ದೆಗಳ ಭರ್ತಿಗೆ ಅನುಮತಿ, ಅನುದಾನಿತ ಶಾಲೆಗಳಿಗೂ ದ್ವಿಭಾಷಾ ಪದ್ಧತಿ ವಿಸ್ತರಣೆ, ಋತುಚಕ್ರ ರಜೆ, ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ, ನೌಕರರಿಗೆ ಸೇವಾ ಭದ್ರತೆ ಹಾಗೂ ಆರೋಗ್ಯ ಸೌಲಭ್ಯ ಸೇರಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಅಸ್ತಿತ್ವ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದ ಒಟ್ಟು 17 ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಪದಾಧಿಕಾರಿಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು ದಶಕಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಆದರೆ ಸರ್ಕಾರದ ನಿರ್ಲಕ್ಷ್ಯ ಹಾಗೂ ದೀರ್ಘಕಾಲದಿಂದ ಬಗೆಹರಿಯದ ಸಮಸ್ಯೆಗಳಿಂದಾಗಿ ಅನೇಕ ಶಿಕ್ಷಣ ಸಂಸ್ಥೆಗಳು ಅಸ್ತಿತ್ವದ ಸಂಕಷ್ಟ ಎದುರಿಸುತ್ತಿವೆ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವುದು ಕೇವಲ ನೌಕರರ ಹಿತದೃಷ್ಟಿಯಿಂದ ಮಾತ್ರವಲ್ಲದೆ, ಶಿಕ್ಷಣ ಸಂಸ್ಥೆಗಳ ಉಳಿವು ಮತ್ತು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದಲೂ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.ಶಿಕ್ಷಕರ ಹಾಗೂ ಆಡಳಿತ ಮಂಡಳಿಗಳ ಬೆಂಬಲದಿಂದ ಮೂರನೇ ದಿನಕ್ಕೆ ಮುಂದುವರಿದ ಮುಷ್ಕರದಿಂದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಶೈಕ್ಷಣಿಕ ಅನನುಕೂಲವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಮೂಲಕ ಶಾಲಾ-ಕಾಲೇಜುಗಳ ಶೈಕ್ಷಣಿಕ ಚಟುವಟಿಕೆ ಸಹಜ ಸ್ಥಿತಿಗೆ ಮರಳಲು ಸರ್ಕಾರ ಬೇಡಿಕೆ ಈಡೇರಿಕೆಗೆ ಸಭೆ ನಡೆಸಿ ಅನುವು ಮಾಡಿಕೊಡಬೇಕೆಂದು ಆಗ್ರಹಿಸಲಾಯಿತು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಕಾರ್ಯದರ್ಶಿ ಎಲ್.ಎಂ. ಹೆಗಡೆ, ಕೇಂದ್ರ ಸಮಿತಿಯ ಸಂಚಾಲಕ ಎಂ.ಟಿ. ಗೌಡ, ಹೊನ್ನಾವರ ತಾಲೂಕು ಘಟಕದ ಕಾರ್ಯದರ್ಶಿ ಸಿ.ಆರ್. ಹೆಗಡೆ ಉಪಸ್ಥಿತರಿದ್ದರು.