ಜರುಗಿದ ಬ್ಯಾನರ್ ಗಲಭೆ ಪ್ರಕರಣದಲ್ಲಿ ನಾವು ನಿರೀಕ್ಷಿಸಿದಂತೆ ತನಿಖೆ ನಡೆಯುತ್ತಿಲ್ಲ. ಗಲಭೆಯ ಬಳಿಕದ ಬೆಳವಣಿಗೆ ಗಮನಿಸಿದರೆ ಸರ್ಕಾರ ಕೈಕಟ್ಟಿ ಕುಳಿತಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದರು.

ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ನಿವಾಸದ ಎದುರು ಜನವರಿ 1ರಂದು ಜರುಗಿದ ಬ್ಯಾನರ್ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಈ ವರೆಗೆ ಯಾವುದೇ ನೋಟಿಸ್ ನೀಡಿಲ್ಲ. ವೀಡಿಯೋಗಳನ್ನು ಸಹ ಕೇಳಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾನರ್ ಗಲಭೆ ಪ್ರಕರಣ ಇಡೀ ರಾಜ್ಯದ ಗಮನ ಸೆಳೆಯಿತು. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿದೆ. ಸೂಕ್ತ ರೀತಿಯ ತನಿಖೆ ನಡೆಯಲಿದೆ ಎಂದು ಭಾವಿಸಿದ್ದೆವು. ಆದರೆ, ನಾವು ನಿರೀಕ್ಷಿಸಿದಂತೆ ತನಿಖೆ ನಡೆಯುತ್ತಿಲ್ಲ. ಗಲಭೆಯ ಬಳಿಕದ ಬೆಳವಣಿಗೆ ಗಮನಿಸಿದರೆ ಸರ್ಕಾರ ಕೈಕಟ್ಟಿ ಕುಳಿತಿರುವುದು ಸ್ಪಷ್ಟವಾಗಿದೆ. ನಾವು ಸುಮ್ಮನೆ ಬಿಡುವುದಿಲ್ಲ. ಹೋರಾಟವನ್ನು ಮುಂದುವರಿಸುತ್ತೇವೆ. ಪಕ್ಷದ ಹಿರಿಯ ಮುಖಂಡರ ಜೊತೆ ಚರ್ಚಿಸಿ ಪಾದಯಾತ್ರೆ ನಡೆಸುತ್ತೇವೆ ಎಂದು ತಿಳಿಸಿದರು.

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಬರುವ ಪಂಚ ಪಾಲಿಕೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರವೇ ಭ್ರಷ್ಟಾಚಾರಕ್ಕೆ ಇಂಬು ನೀಡುತ್ತಿದೆ. ಭ್ರಷ್ಟಾಚಾರ ನಿರ್ದಿಷ್ಟ ಇಲಾಖೆಗೆ ಸೀಮಿತವಾಗಿಸದೆ, ಎಲ್ಲ ಇಲಾಖೆಗಳಿಗೂ ವಿಸ್ತರಿಸಲಾಗಿದೆ ಎಂದು ದೂರಿದರಲ್ಲದೆ, ಅಬಕಾರಿ ಸಚಿವ ಆರ್‌.ವಿ. ತಿಮ್ಮಾಪುರ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.

ವಾಲ್ಮೀಕಿ ನಿಗಮದ ಹಣದಲ್ಲಿ ಲೋಕಸಭಾ ಚುನಾವಣೆ ನಡೆಸಿದ ಕಾಂಗ್ರೆಸ್‌ ಸರಕಾರ, ಈಗ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿ ಬೆಂಗಳೂರು ಪಾಲಿಕೆ ಚುನಾವಣೆ ನಡೆಸಲು ಮುಂದಾಗಿದೆ. ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಯಾರು ಹೇಳುವವರು, ಕೇಳುವವರು ಇಲ್ಲದಂತಾಗಿದೆ. ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದಲ್ಲಿ ಭಾಗಿಯಾದ ಸಚಿವ ಆರ್‌.ಬಿ. ತಿಮ್ಮಾಪುರ ಅವರನ್ನು ಅಧಿವೇಶನ ಆರಂಭಕ್ಕೂ ಮುನ್ನ ಮಂತ್ರಿಮಂಡಲದಿಂದ ಕೈಬಿಡಬೇಕು. ಇಲ್ಲವಾದಲ್ಲಿ ಬಿಜೆಪಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಮಾಜಿ ಸಂಸದ ಸಣ್ಣ ಫಕ್ಕೀರಪ್ಪ, ಮುಖಂಡರಾದ ಪಿ. ಪಾಲನ್ನ, ತಿಲಕ್‌ ಕುಮಾರ್‌, ಓಬಳೇಶ್‌, ಹನುಮಂತಪ್ಪ, ತಿಮ್ಮಪ್ಪ ಸುದ್ದಿಗೋಷ್ಠಿಯಲ್ಲಿದ್ದರು.