ಇದೇ ವೇಳೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.. ಕಳೆದ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಬಡ ವಿದ್ಯಾರ್ಥಿನಿ ಹೊನ್ನಮ್ಮಳಿಗೆ ಶಾಸಕರು ₹10 ಸಾವಿರ ಧನ ಸಹಾಯ ಮಾಡಿದರು.
ಕನ್ನಡಪ್ರಭ ವಾರ್ತೆ ತುರುವೇಕೆರೆ
ಸರ್ಕಾರಿ ಶಾಲೆಗಳ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು. ತಾಲೂಕಿನ ದಂಡಿನಶಿವರ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರ ಹೊಸದಾಗಿ ಕೆಪಿಎಸ್ ಶಾಲೆಗಳನ್ನು ತೆರೆಯುತ್ತಿರುವುದು ಸಂತಸದ ವಿಷಯ. ಆದರೆ ಅದಕ್ಕೆ ಅನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಪೋಷಕರು ಮತ್ತು ಗ್ರಾಮಸ್ಥರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಹೆಚ್ಚು ದಾಖಲಾತಿ ಮಾಡುವ ಮೂಲಕ ಕನ್ನಡ ಶಾಲೆಗಳನ್ನು ಉಳಿಸಲು ಸಂಕಲ್ಪ ಮಾಡಬೇಕು. ಮಕ್ಕಳು ಮಾತೃಭಾಷೆಯಲ್ಲಿಯೇ ಶಿಕ್ಷಣ ಪಡೆದರೆ ಅವರ ವ್ಯಕ್ತಿತ್ವ ವಿಕಸನವಾಗುವುದರ ಜೊತೆಗೆ ಬೌದ್ಧಿಕ ಜ್ಞಾನ ವಿಕಾಸವೂ ತಾನಾಗಿಯೇ ವೃದ್ಧಿಸುತ್ತದೆ. ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರ ಹೊಸದಾಗಿ ಶಿಕ್ಷಕರ ನೇಮಕಾತಿ ಮಾಡುವಲ್ಲಿ ನಿರ್ಲಕ್ಷ್ಯ ತಾಳಿದೆ. ಹಾಗಾಗಿ ಮಕ್ಕಳ ಶೈಕ್ಷಣಿಕ ಗುಣಮಟ್ಟಕ್ಕೆ ದೊಡ್ಡ ಪೆಟ್ಟು ಬೀಳುತ್ತಿದೆ. ಇದರಿಂದ ವರ್ಷದಿಂದ ವರ್ಷಕ್ಕೆ ಮಕ್ಕಳ ದಾಖಲಾತಿಯೂ ಕುಸಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದೇ ವೇಳೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.. ಕಳೆದ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಬಡ ವಿದ್ಯಾರ್ಥಿನಿ ಹೊನ್ನಮ್ಮಳಿಗೆ ಶಾಸಕರು ₹10 ಸಾವಿರ ಧನ ಸಹಾಯ ಮಾಡಿದರು.ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್, ಇಸಿಒ ಸಿದ್ದಪ್ಪ, ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಾಪಣ್ಣ, ಗುಡಿಗೌಡರಾದ ಸಿದ್ದೇಗೌಡ, ಮುಖ್ಯ ಶಿಕ್ಷಕರಾದ ನಂರಾಜು ಮುನಿಯೂರು, ಧರ್ಮದರ್ಶಿ ವೆಂಕಟೇಶ್, ಮುಖಂಡರಾದ ಮಧು, ಶಂಕರೇಗೌಡ, ರಾಜ್ ಕುಮಾರ್, ಶ್ರೀನಿವಾಸ್, ಇಮ್ರಾನ್, ಮಂಗಳಮ್ಮ, ಆರತಿ, ಸಿ.ಯೋಗಾನಂದ್ ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು, ಪೋಷಕರು, ಗ್ರಾಮಸ್ಥರು ಭಾಗವಹಿಸಿದ್ದರು.