ಶಾಲಾ ಪ್ರಾರಂಭೋತ್ಸವದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪ್ರಶ್ನೆ । ಮಕ್ಕಳ ಸರ್ಕಾರಿ ಶಾಲೆಗೆ ಸೇರಿಸಲು ಮನವಿ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರಿರುತ್ತಾರೆ, ಶಿಕ್ಷಣವೂ ಉಚಿತ, ಮೂಲ ಸೌಕರ್ಯದ ವಿಚಾರದಲ್ಲಿ ಯಾವುದಕ್ಕೂ ಕೊರತೆಯಿಲ್ಲ. ಸರ್ಕಾರಿ ಶಾಲೆಯಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಖಾಸಗಿ ಶಾಲೆಯಲ್ಲಿ ಸಿಗುತ್ತಾ.ಹೀಗೆಂದು ಪ್ರಶ್ನಿಸಿದವರು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ.ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರಿಗೆ ಕೊರತೆಯಿಲ್ಲ. ಆದರೂ ಸರ್ಕಾರಿ ಶಾಲೆಗಳ ಬಗ್ಗೆ ಫೋಷಕರಲ್ಲಿ ಇಂದಿಗೂ ಪೂರ್ವಾಗ್ರಹ ಪೀಡಿತ ಮನೋಭಾವವಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಕೂಡ ಪ್ರಾಥಮಿಕ ಶಾಲಾ ಶಿಕ್ಷಕನಾಗಿ ವೃತ್ತಿ ಜೀವನ ಆರಂಭಿಸಿದವನು. ಇಂದು ಕೆಎಎಸ್ ಮುಗಿಸಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರೆ ಅದಕ್ಕೆ ನನ್ನ ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ನನ್ನ ಡಯಟ್‍ನ ಗುರುಗಳು ಕಲಿಸಿದ ಶಿಕ್ಷಣ ಹಾಗೂ ಮೌಲ್ಯಗಳೇ ಕಾರಣ. ಉದ್ಯೋಗಕ್ಕೆ ಬಂದ ಮೇಲೆ ಹೊಸ ಕೌಶಲಗಳನ್ನು ಶಿಕ್ಷಕರು ನಿರಂತರವಾಗಿ ಕಲಿಯಬೇಕು. ಆಧುನಿಕ ಯುಗಕ್ಕೆ ತಕ್ಕಂತೆ ಮಕ್ಕಳನ್ನು ಸ್ಪರ್ಧಾತ್ಮಕ ಲೋಕಕ್ಕೆ ಸಿದ್ಧಪಡಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.ಪ್ರತಿಯೊಂದು ಮಗುವಿನಲ್ಲೂ ತನ್ನದೇ ಆದ ವಿಶಿಷ್ಟ ಕೌಶಲ ಇರುತ್ತದೆ. ವಿಶೇಷ ಚೇತನ ಮಕ್ಕಳಲ್ಲೂ ಯಾವುದಾದರೂ ಒಂದು ಅಂಗದ ಕೊರತೆ ಇದ್ದರೆ, ಅವರಲ್ಲಿ ಮತ್ತೊಂದು ಕೌಶಲ ತೀಕ್ಷ್ಣವಾಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಶಿಕ್ಷಕರು ಮಾಡಬೇಕು ಎಂದು ಕರೆ ನೀಡಿದರು.
ಓದಿದ ತಕ್ಷಣ ಸರ್ಕಾರಿ ನೌಕರಿಯೇ ಸಿಗಬೇಕು ಎಂಬ ಮನಸ್ಥಿತಿಯಿಂದ ಪೋಷಕರು ಹೊರಬರಬೇಕು. ಸರ್ಕಾರಿ ನೌಕರಿ ಇಲ್ಲದವರೂ ಉತ್ತಮ ಕೃಷಿಕರಾಗಿ, ಉದ್ಯಮಿಗಳಾಗಿ ಸಾಧನೆ ಮಾಡಿದ್ದಾರೆ. ಅಂತಹ ಜೀವನ ಕೌಶಲಗಳನ್ನು ಪಠ್ಯದ ಜೊತೆಗೆ ಶಾಲೆಗಳಲ್ಲಿ ಕಲಿಸಿಕೊಡಬೇಕು. ಆಗ ಮಾತ್ರ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ ಎಂದು ಬಿ.ಟಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.ಡಯಟ್ ಉಪ ಪ್ರಾಂಶುಪಾಲ ನಾಗಭೂಷಣ್ ಮಾತನಾಡಿ, ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಆರಂಭಿಸುವುದು ಈ ಬಾರಿಯ ಪ್ರಾರಂಭೋತ್ಸವದ ಮುಖ್ಯ ಉದ್ದೇಶ. ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಸಕ್ತ ಸಾಲಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇಂದಿನಿಂದಲೇ ರಾಜ್ಯದಲ್ಲಿ 1,000 ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದರು.
ಗುಣಮಟ್ಟದ ಶಿಕ್ಷಣ ನೀಡುವ ದೃಷ್ಠಿಕೋನದಿಂದ ಜಿಲ್ಲೆಯ ನಾಲ್ಕು ತಾಲ್ಲೂಕುಗಳಾದ ಹೊಸದುರ್ಗ, ಹೊಳಲ್ಕೆರೆ, ಚಿತ್ರದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳನ್ನು ಏಕಕಾಲದಲ್ಲಿ ಒಳಗೊಂಡ ದ್ವಿಭಾಷಾ ಮಾಧ್ಯಮವನ್ನು ಇಂದಿನಿಂದ ಜಾರಿಗೆ ತರಲಾಗುತ್ತಿದೆ. ಉಳಿದಂತೆ ಚಳ್ಳಕೆರೆ ಮತ್ತು ಹಿರಿಯೂರು ತಾಲ್ಲೂಕುಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ, ಪಿಎಂಶ್ರಿ ಶಾಲೆ, ಆಯ್ದ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಪ್ರಾರಂಭವಾಗಲಿದೆ ಎಂದರು.ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಪಠ್ಯ ಪುಸ್ತಕ ವಿತರಿಸಲಾಯಿತು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಡಯಟ್ ಪ್ರಾಂಶುಪಾಲ ನಾಸಿರುದ್ದೀನ್, ಎಸ್‍ಡಿಎಂಸಿ ಅಧ್ಯಕ್ಷ ವೆಂಕಟೇಶ್, ಜಲತಜ್ಞ ದೇವರಾಜ ರೆಡ್ಡಿ, ಹಳೆ ವಿದ್ಯಾರ್ಥಿಗಳ ಸಂಘದ ಶಿವಮೂರ್ತಿ, ರೈತ ಮುಖಂಡರಾದ ಮಲ್ಲಿಕಾರ್ಜುನ್, ಜ್ಞಾನೇಶ್, ಬಿಆರ್‍ಸಿ ಸಂಪತ್ ಕುಮಾರ್, ವಿಷಯ ಪರಿವೀಕ್ಷಕರಾದ ನಿತ್ಯಾನಂದ, ಪ್ರಶಾಂತ್, ರಂಗನಾಯ್ಕ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಶಿಕ್ಷಕರ ಸಂಘದ ಪ್ರತಿನಿಧಿಗಳಾದ ಲೋಲಾಕ್ಷಮ್ಮ, ಕೃಷ್ಣಪ್ಪ ಇದ್ದರು.