ಸಾರಾಂಶ
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಗುಣಮಟ್ಟ ಶಿಕ್ಷಣ ದೊರೆಯುತ್ತಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಗುಣಮಟ್ಟ ಶಿಕ್ಷಣ ದೊರೆಯುತ್ತಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ರಾಜ್ಯ ಸರ್ಕಾರ ಮತ್ತು ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದಲ್ಲಿ ಆರಂಭಿಸಲಾದ ವಾರದ ಆರು ದಿನ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಕೆಲ ಶಾಲೆಗಳಲ್ಲಿ ಮೂಲಸೌಕರ್ಯ ಹಾಗೂ ಕಲಿಕಾ ವಾತಾವರಣದ ಕೊರತೆಯಿಂದಾಗಿ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿರುವುದು ಗಮನಕ್ಕೆ ಬಂದಿದೆ. ಈ ಕುರಿತು ವಿಶೇಷ ಗಮನ ಹರಿಸುವುದು ಅಗತ್ಯ ಎಂದರು.ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ ಕುರಿತು ವಿದ್ಯಾರ್ಥಿಗಳು ಮಾಡಿದ ಮನವಿಗೆ ಸ್ಪಂದಿಸಿದ ಅವರು, ಈ ಬಗ್ಗೆ ಶಿಕ್ಷಣ ಇಲಾಖೆ ಗಮನಕ್ಕೆ ತರಲಾಗುವುದು. ಸಿಎಸ್‌ಆರ್ ನಿಧಿಯಡಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದರ ಜೊತೆಗೆ ಶಾಲಾ ದತ್ತು ಯೋಜನೆ ಜಾರಿಗೊಳಿಸಿ, ಶಿಕ್ಷಕರು ಹಾಗೂ ಮೂಲಸೌಕರ್ಯ ಒದಗಿಸುವ ಬಗ್ಗೆ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಮೊಟ್ಟೆ, ಚಕ್ಕಿ ವಿತರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದಾ ಅನೀಸ್, ನಗರಸಭಾ ಅಧ್ಯಕ್ಷೆ ಸುಮಿತ್ರ ಕೆ. ಆನಂದ್, ನಗರಸಭಾ ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್, ವತ್ಸಲ, ಸಾಸಲು ಗ್ರಾಮ ಪಂಚಾಯತಿ ಸದಸ್ಯ ಗೋವಿಂದರಾಜು, ಉಪಪ್ರಾಂಶುಪಾಲರಾದ ದಾಕ್ಷಾಯಿಣಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಶಿಶೇಖರ್, ಸಿಡಿಪಿಒ ರವಿಕುಮಾರ್ ಉಪಸ್ಥಿತರಿದ್ದರು.