ಪೋಷಕರು ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಬೇಕು ಎಂದು ತಾಲೂಕು ಪಿ.ಎಲ್.ಡಿ. ಬ್ಯಾಂಕ್ ನಿರ್ದೇಶಕ ಪ್ರದೀಪ್‌ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಸೊರಬ

ಪೋಷಕರು ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಬೇಕು ಎಂದು ತಾಲೂಕು ಪಿ.ಎಲ್.ಡಿ. ಬ್ಯಾಂಕ್ ನಿರ್ದೇಶಕ ಪ್ರದೀಪ್‌ಗೌಡ ಹೇಳಿದರು.

ತಾಲೂಕಿನ ಬಾಡದಬೈಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಚಂದ್ರಗುತ್ತಿ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ತಮ್ಮ ಬುದ್ಧಿವಂತಿಕೆಯನ್ನು ಚುರುಕಾಗಿಸಿಕೊಂಡರೆ ಮಾತ್ರ ಯಶಸ್ಸು ಸಾಧ್ಯ. ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ಶಾಲೆಗೆ ಅಗತ್ಯವಿರುವ ಸೌಲಭ್ಯಗಳನ್ನು ಪಡೆದು, ಸರ್ಕಾರಿ ಶಾಲೆಗಳನ್ನು ಸುಸಜ್ಜಿತವಾಗಿ ಅಭಿವೃದ್ಧಿಪಡಿಸೋಣ ಎಂದರು.

ಗ್ರಾಮೀಣ ಸೊಬಗನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಶಾಲೆಯಲ್ಲಿ ಪ್ರದರ್ಶಿಸಲಾದ ಬಂಡಿ, ಭತ್ತ, ಕಬ್ಬು ಹಾಗೂ ಕುಂಭಗಳ ಮಹತ್ವದ ಕುರಿತು ಮಕ್ಕಳಿಗೆ ತಿಳಿಸುತ್ತಿರುವುದು ಶ್ಲಾಘನೀಯ ಎಂದರು.

ಗ್ರಾಪಂ ಉಪಾಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್ ಮಾತನಾಡಿ, ಮಕ್ಕಳಲ್ಲಿ ಕಲಿಯುವ ಆಸಕ್ತಿ ಮೂಡಿಸಲು ಮತ್ತು ಅವರ ಸೃಜನಶೀಲ ಪ್ರತಿಭೆಯನ್ನು ಪ್ರೋತ್ಸಾಹಿಸಲು ಕಲಿಕಾ ಹಬ್ಬ ಕಾರ್ಯಕ್ರಮವು ಮಾದರಿಯಾಗಿವೆ ಎಂದ ಅವರು, ಶಿಕ್ಷಣ ಎನ್ನುವುದು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತವಾಗಬಾರದು. ಅದು ಮನುಷ್ಯನ ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಪ್ರಕ್ರಿಯೆಯಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದಿದೆ. ಶಾಲೆಯ ಪ್ರತಿಯೊಂದು ವಿಷಯವು ವಿದ್ಯಾರ್ಥಿಯ ಬದುಕಿಗೆ ದಾರಿದೀಪವಾಗಬೇಕು ಎಂದರು.

ಕಲಿಕಾ ಹಬ್ಬ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ ಉದ್ಘಾಟಿಸಿ ಚಾಲನೆ ನೀಡಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯರಾದ ತಿರುಪತಿ, ಎಂ.ಪಿ. ರತ್ನಾಕರ್, ಗ್ರಾಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುಗೌಡ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪಾರ್ವತಿ, ಸಿ.ಆರ್.ಪಿ. ರಾಘವೇಂದ್ರ, ಶಾಲಾ ಮುಖ್ಯ ಶಿಕ್ಷಕಿ ಆಶಾ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರು, ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಬಾಡದಬೈಲು ಗ್ರಾಮದ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.