ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಸಮಸ್ಯೆಗಳ ಅರ್ಜಿ ಹಿಡಿದುಕೊಂಡು ಸರ್ಕಾರಿ ಕಚೇರಿಗಳಿಗೆ ಯಾರೂ ಅಲೆಯಬಾರದು. ನಿಮ್ಮ ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸಬೇಕು ಎಂಬ ಧ್ಯೇಯದೊಂದಿಗೆ ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದೇನೆ ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.ಮಂಡ್ಯ ವಿಧಾನಸಭಾ ಕ್ಷೇತ್ರದ ಮುತ್ತೇಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂರನೇ ಬಾರಿ ಜನತಾ ದರ್ಶನ ಉದ್ಘಾಟಿಸಿ ಮಾತನಾಡಿ, ನಿಷ್ಪಕ್ಷಪಾತವಾಗಿ ಎಲ್ಲರೂ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳಬೇಕು. ನಿಮ್ಮ ಸೇವೆಗೆ ನಾನು ಸದಾ ಸಿದ್ಧವಾಗಿದ್ದೇನೆ. ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನು ಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿತವಾಗಿದೆ ಎಂದು ನುಡಿದರು.
ನೀವು ಕೊಡುವ ಅರ್ಜಿಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ನಿಗದಿತ ದಿನದಲ್ಲಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ನಾವು ಕಾರ್ಯನಿರ್ವಹಿಸುತ್ತೇವೆ ಎಂದು ಭರವಸೆ ನೀಡಿದರು.ಮುತ್ತೆಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈವರೆಗೂ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ಕೆರೆ ಅಚ್ಚುಕಟ್ಟು ಸೇರಿದಂತೆ 70 ಕೋಟಿ ರು. ಅನುದಾನವನ್ನು ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ , ವಿದ್ಯುತ್ ಇಲಾಖೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಆಹಾರ ಇಲಾಖೆಗಳು ಭಾಗವಹಿಸಿ ಇಲಾಖೆಯ ಯೋಜನೆಗಳನ್ನು ಜನರಿಗೆ ತಿಳಿಸಿಕೊಟ್ಟರು.ಈ ದಿನದ ಕಾರ್ಯಕ್ರಮದಲ್ಲಿ ವಿಶೇಷವಾಗಿ ಆರೋಗ್ಯ ಇಲಾಖೆ ವತಿಯಿಂದ ಬಾಣಂತಿಯರಿಗೆ ಮಡಿಲು ತುಂಬುವ ಕಾರ್ಯಕ್ರಮ ನಡೆಸಲಾಯಿತು. ಸ್ಥಳದಲ್ಲಿ 10 ಅರ್ಜಿಗಳಿಗೆ ಪರಿಹಾರ ಸೂಚಿಸಲಾಯಿತು. ಉಳಿದಂತೆ ಕಂದಾಯ ಇಲಾಖೆ- 43,ಗ್ರಾಮ ಪಂಚಾಯಿತಿ- 30, ಆಹಾರ ಇಲಾಖೆ- 5, ವಿದ್ಯುತ್ ಇಲಾಖೆ- 06, ಅರಣ್ಯ ಇಲಾಖೆ- 05, ಇತರೆ ಇಲಾಖೆಗಳಿಂದ- 15, ಪೌತಿಖಾತೆ ಅರ್ಜಿಗಳು- 16 ಸೇರಿ 120 ಅರ್ಜಿಗಳನ್ನು ಸ್ವೀಕಾರ ಮಾಡಲಾಯಿತು.
ಈ ದಿನ ವಿಶೇಷವಾಗಿ ಆರೋಗ್ಯ ತಪಾಸಣೆ ಹಾಗೂ ಕಣ್ಣು ತಪಾಸಣೆ ಕಾರ್ಯಕ್ರಮದಲ್ಲಿ 350ಕ್ಕೂ ಹೆಚ್ಚು ಮಂದಿ ಆರೋಗ್ಯ ಸೇವೆ ಪಡೆದರು. ಪ್ರಮುಖವಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಯೋಜನೆ ಸವಲತ್ತುಗಳಿಂದ ವಂಚಿತರಾಗಿರುವ ಮತ್ತು ಜನರಿಗೆ ಸೇವೆಯನ್ನು ಒದಗಿಸಲಾಯಿತು.ಕಾರ್ಯಕ್ರಮದಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಬಿ.ಶಿವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಬಿರಾದರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಾಜಿ ಗೌಡ, ಯೂತ್ ಕಾಂಗ್ರೆಸ್ ಅಧ್ಯಕ್ಷ ಶೈಲೇಂದ್ರ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ, ಯತಿರಾಜ್, ಕೆಂಚನಹಳ್ಳಿ ರಾಜು ಹಾಗೂ ಇತರರಿದ್ದರು.