ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಲು ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಆದರೆ, ಹಲವು ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಲು ತೊಂದರೆಯಾಗುತ್ತಿದೆ ಎಂದು ಮುಖಂಡ ಬಸವರಾಜ ಹಳ್ಳೂರ ಹೇಳಿದರು.

ಹನುಮಸಾಗರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಲು ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಆದರೆ, ಹಲವು ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಲು ತೊಂದರೆಯಾಗುತ್ತಿದೆ. ಸರ್ಕಾರ ಕೂಡಲೇ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮುಖಂಡ ಬಸವರಾಜ ಹಳ್ಳೂರ ಹೇಳಿದರು.

ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ಬುಧವಾರ ಕುರುಬಗೇರಾ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಆಯೋಜಿಸಿದ್ದ ಹನುಮಸಾಗರ ಹಾಗೂ ಹೂಲಗೇರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳಿಗೆ ಅಗತ್ಯ ಪ್ರಮಾಣದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಲ್ಲ. ಇದರಿಂದಾಗಿ ಇತರ ವಿಷಯಗಳ ಶಿಕ್ಷಕರೇ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ನಾಯಕತ್ವ ಗುಣ ಹಾಗೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಲು ಸಾಧ್ಯ. ಆದ್ದರಿಂದ ಶಾಲಾ ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಗೆಲುವೊಂದನ್ನೇ ಗುರಿಯಾಗಿಸಿಕೊಳ್ಳದೆ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು. ಕ್ರೀಡಾ ಸ್ಪರ್ಧೆಗಳ ಸಂದರ್ಭದಲ್ಲಿ ನಿರ್ಣಾಯಕರ ತೀರ್ಪಿಗೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕ್ರೀಡಾಭಿಮಾನಿಗಳು ಗೌರವ ನೀಡಿ ಸಹಕರಿಸಬೇಕು. ಕ್ರೀಡಾಕೂಟಗಳು ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಹೆಚ್ಚಿನ ತರಬೇತಿ ಹಾಗೂ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಕೆಪಿಎಸ್ ಎಸ್‌ಡಿಎಂಸಿ ಉಪಾಧ್ಯಕ್ಷ ಬಸವರಾಜ ದ್ಯಾವಣ್ಣನವರ, ಎಸ್‌ಡಿಎಂಸಿ ಅಧ್ಯಕ್ಷ ಶಿವನಗೌಡ ಪೊಲೀಸ್‌ ಪಾಟೀಲ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಾಗಪ್ಪ ಬಿಳಿಯಪ್ಪನವರ, ಸಿಆರ್‌ಪಿಗಳಾದ ಲೆಂಕಪ್ಪ ವಾಲೀಕಾರ, ವಿಶ್ವನಾಥ ಅಮಲಿಕೊಪ್ಪಮಠ, ಗ್ರಾಪಂ ಮಾಜಿ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ, ಶರಣಪ್ಪ ಬೋದುರ, ಮುಖ್ಯಶಿಕ್ಷಕರಾದ ರಾಜಕುಮಾರ ನಾಯಕ, ಚಂದಪ್ಪ ಹಕ್ಕಿ, ವಸಂತಕುಮಾರ ರಾಜೂರ, ಶರಣಪ್ಪ ಗುಳೇದ, ಹುಸೇನಸಾಬ ಕಳಕಾಪುರ, ಕೆ.ಎಸ್. ಅಥಣಿ, ನಾಗರಾಜ, ಯಮನಪ್ಪ ಲಮಾಣಿ, ಮೈಬೂಬ ಕಂದಗಲ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಅಬ್ದುಲ್ ಕರೀಂ ವಂಟೆಳಿ, ಚಂದಾಲಿಂಗಪ್ಪ ಬಾಲಾಪುರ, ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಮಹಾಂತೇಶ ಬಳಿಗಾರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ತಿಪ್ಪಣ್ಣ ಪಾಲಕಾರ, ಶಿವಪ್ಪ ಕಮ್ಮಾರ, ವೀರೇಶ ಕೊಪ್ಪಳ, ವಿರೂಪಾಕ್ಷಗೌಡ ಪಾಟೀಲ್, ಶಿವಲೀಲಾ ಗುಣಕಿ, ಈರಣ್ಣ ಅಂಗಡಿ, ಭರಮಪ್ಪ ಕಂಡೇಕಾರ, ಗೌರಮ್ಮ ತಳವಾರ ಸೇರಿದಂತೆ ಶಿಕ್ಷಕರು ಇತರರು ಇದ್ದರು.