ಸಾರಾಂಶ
ಶಿವಮೊಗ್ಗ: ಸರ್ಕಾರವು ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗಿ 200 ಹೊಸ ವಿದ್ಯಾರ್ಥಿನಿಲಯಗಳನ್ನು ಆರಂಭಿಸಲು ಉದ್ದೇಶಿಸಿದ್ದು, ಶೀಘ್ರದಲ್ಲಿ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು.ಇಲ್ಲಿನ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯಿಂದ ಬುಧವಾರ ಶಿವಮೊಗ್ಗ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ಯೋಜನೆ, ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಸಾಗರ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಅನುದಾನದಿಂದ ನಿರ್ಮಿಸಲಾದ ಹಾಸ್ಟೆಲ್ ಕಟ್ಟಡಕ್ಕೆ ನಿಗದಿತ ಸಂಖ್ಯೆಯ ವಿದ್ಯಾರ್ಥಿಗಳ ಕೊರತೆಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು. ಅನೇಕ ವರ್ಷಗಳಿಂದ ಪಾಳುಬಿದ್ದಿದ್ದ ಕಟ್ಟಡವನ್ನು ಇತರೆ ಹಿಂದುಳಿದ ವರ್ಗಗಳ ಇಲಾಖೆಯು ನಿಯಮಾನುಸಾರ ವಶಕ್ಕೆ ಪಡೆದು, ಅಭಿವೃದ್ಧಿಪಡಿಸಿ, ಅದನ್ನು ಸದುಪಯೋಗಪಡಿಸಿಕೊಳ್ಳಲಾಗುತ್ತಿದೆ. ಈ ಕಟ್ಟಡವನ್ನು ಯಾವ ಉದ್ದೇಶಕ್ಕಾಗಿ ನಿರ್ಮಿಸಲಾಗಿದೆಯೋ ಅದೇ ಉದ್ದೇಶಕ್ಕೆ ಬಿಟ್ಟುಕೊಟ್ಟು, ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.ವಸತಿ ನಿಲಯ ಕಟ್ಟಡಗಳ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೊಳಪಡುವ ಸಾರ್ವಜನಿಕ ಬಳಕೆಯ ನಿವೇಶನಗಳು ನಗರದ ಹೊರವಲಯದಲ್ಲಿದ್ದು, ಹಾಸ್ಟೆಲ್ ನಿರ್ಮಾಣಕ್ಕಾಗಿ ಗುರುತಿಸಿದ್ದಲ್ಲಿ ಅಂತಹ ಸ್ಥಳದಲ್ಲಿ ಹಾಸ್ಟೆಲ್ ನಿರ್ಮಾಣದ ನಂತರ ಅಲ್ಲಿಂದ ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ ಒಡಾಡಲು ಅನುಕೂಲವಾಗುವಂತೆ ಬಸ್ ಸಂಪರ್ಕ ವ್ಯವಸ್ಥೆ ಕಲ್ಪಿಸುವುದು, ವಿದ್ಯಾರ್ಥಿಗಳ ಕೊರತೆಯಿಂದ ಖಾಲಿ ಇರುವ ಹಾಸ್ಟೆಲ್ ಕಟ್ಟಡಗಳನ್ನು ಅಗತ್ಯವಿರುವ ಇಲಾಖೆಯಿಂದ ನಡೆಸಲಾಗುತ್ತಿರುವ ಹಾಸ್ಟೆಲ್‌ಗಳಿಗೆ ಹಸ್ತಾಂತರಿಸುವಂತೆ ಅವರು ಸೂಚಿಸಿದರು.
ಗಂಗಾಕಲ್ಯಾಣ ಯೋಜನೆಯಡಿ ಕೊರೆಯಿಸಲಾಗಿರುವ ಕೊಳವೆಬಾವಿಗಳಿಗೆ ಸಕಾಲದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿ. ವಿವಿಧ ನಿಗಮ-ಮಂಡಳಿಗಳಿಂದ ಹಲವು ಯೋಜನೆಗಳಡಿಯಲ್ಲಿ ಫಲಾನುಭವಿಗಳಿಗೆ ನೀಡಲಾಗಿದ್ದ ಸಾಲಸೌಲಭ್ಯವನ್ನು ಮರುಪಾವತಿ ಮಾಡುವಂತೆ ಪ್ರೇರೇಪಿಸಲು ನಿಗಮದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅನೇಕ ಮಹತ್ವದ ಬದಲಾವಣೆಗಳಾಗಬೇಕಾಗಿದೆ. ವಿದ್ಯಾರ್ಥಿ ನಿಲಯಗಳ ಆರಂಭಕ್ಕೂ ಹೆಚ್ಚಿನ ಬೇಡಿಕೆ ಇದೆ. ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿಯೂ ಶಿಕ್ಷಣದ ಮಹತ್ವದ ಅರಿವಾಗಿದೆ. ಸರ್ಕಾರದ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಇಲಾಖೆ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯ. ಅಧಿಕಾರಿಗಳೂ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು.ಶಾಲಾ-ಕಾಲೇಜುಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಕಾಲಕಾಲಕ್ಕೆ ವಿದ್ಯಾರ್ಥಿಗಳಿಗೆ ಸಮಾಲೋಚನೆ ನಡೆಸಬೇಕು. ಗಾಂಜಾ, ಅಫೀಮು ಬಲೆಗೆ ಬೀಳದಂತೆ ಅವರ ಭವಿಷ್ಯದ ಜೀವನ ಹಾಳಾಗದಂತೆ ಪೊಲೀಸ್ ಇಲಾಖೆ ವಿಶೇಷ ಗಮನಹರಿಸಬೇಕು. ದುಷ್ಟ ವಿದ್ಯಾರ್ಥಿಗಳ ರಕ್ಷಣೆಯಲ್ಲಿ ಜನಪ್ರತಿನಿಧಿಗಳ ಮಧ್ಯಪ್ರವೇಶ ಇರಬಾರದು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಡಾ.ಧನಂಜಯ ಸರ್ಜಿ, ತರೀಕರೆ ಶಾಸಕ ಶ್ರೀನಿವಾಸ್ ಪ್ರಮುಖರಾದ ಗುರುರಾಜ ಗಂಟಿಹೊಳಿ, ಅಬ್ದುಲ್ ಜಬ್ಬಾರ್, ಎಸ್.ಕೆ.ಜಕ್ಕಪ್ಪನವರ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಒ ಎನ್.ಹೇಮಂತ್, ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಹಾಸ್ಟೆಲ್ ಪ್ರವೇಶಕ್ಕೆ ದಿನೇದಿನೇ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಹಾಸ್ಟೆಲ್‌ನಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿರುವಂತೆ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ವಸತಿ ನಿಲಯಗಳಲ್ಲಿ ಇತರೆ ವಿದ್ಯಾರ್ಥಿಗಳ ಪ್ರವೇಶಕ್ಕೂ ಅವಕಾಶ ಒದಗಿಸಬೇಕು. ಸಂಬಂಧಿಸಿದ ಇಲಾಖಾಧಿಕಾರಿಗಳು ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು.
– ಎಸ್.ಎನ್.ಚನ್ನಬಸಪ್ಪ, ಶಾಸಕ.
ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಊಟೋಪಹಾರದಲ್ಲಿ ಗುಣಮಟ್ಟದ ಕೊರತೆ ಇರುವ ಬಗ್ಗೆ ಆಗಾಗ್ಗೆ ದೂರುಗಳ ಕೇಳಿ ಬರುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳಬೇಕು.
– ಬೇಳೂರು ಗೋಪಾಲಕೃಷ್ಣ, ಶಾಸಕ.;Resize=(128,128))
;Resize=(128,128))