ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ: ಪುಷ್ಪಾ ಅಮರನಾಥ್‌

| Published : Aug 27 2024, 01:41 AM IST

ಸಾರಾಂಶ

ಮುಖ್ಯಮಂತ್ರಿ ಬದಲಾವಣೆಯಾಗಲ್ಲ. ದೆಹಲಿಗೆ ಹೋದವರೆಲ್ಲಾ ಲಾಭಿ ಮಾಡುತ್ತಾರೆ ಎಂಬುದೆಲ್ಲಾ ಸುಳ್ಳು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾಗಲ್ಲ. ಈ ರೀತಿಯ ಚರ್ಚೆ ಮಾಡಿರುವುದು ವಿರೋಧ ಪಕ್ಷಗಳು. ಆದರೆ, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ರಾಷ್ಟ್ರೀಯ ನಾಯಕರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರುಎಂಡಿಎ ಹಗರಣದ ಮೂಲಕ ಸರ್ಕಾರ ಬೀಳಿಸಲು ವಿರೋಧಪಕ್ಷಗಳು ಯತ್ನಿಸುತ್ತಿವೆ. ಆದರೆ, ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಲೆದಂಡ ಶುದ್ಧ ಸುಳ್ಳು. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದರು.ಮುಖ್ಯಮಂತ್ರಿ ಬದಲಾವಣೆಯಾಗಲ್ಲ. ದೆಹಲಿಗೆ ಹೋದವರೆಲ್ಲಾ ಲಾಭಿ ಮಾಡುತ್ತಾರೆ ಎಂಬುದೆಲ್ಲಾ ಸುಳ್ಳು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾಗಲ್ಲ. ಈ ರೀತಿಯ ಚರ್ಚೆ ಮಾಡಿರುವುದು ವಿರೋಧ ಪಕ್ಷಗಳು. ಆದರೆ, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ರಾಷ್ಟ್ರೀಯ ನಾಯಕರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ತರಾತುರಿಯಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಪ್ರಕರಣದಲ್ಲಿ ಅನುಮತಿ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ವಿರೋಧ ಪಕ್ಷಗಳು ಸರ್ಕಾರ ಅಲುಗಾಡಿಸಲು ಷಡ್ಯಂತ್ರ ರೂಪಿಸಿವೆ ಎಂದು ಅವರು ಆರೋಪಿಸಿದರು.ದೇಶದಲ್ಲಿ ಗ್ಯಾರಂಟಿ ಯೋಜನೆಗಳು ಮನೆ ಮಾತಾಗಿವೆ. ಆದರೆ ವಿರೋಧ ಪಕ್ಷದವರು ಗ್ಯಾರಂಟಿಗಳನ್ನು ನಿಲ್ಲಿಸುತ್ತಾರೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರೇ ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಯಾರೂ ಸಂಶಯಪಡುವ ಅಗತ್ಯವಿಲ್ಲ ಎಂದರು.ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ನಂಜನಗೂಡು ತಾಲೂಕು ಅಧ್ಯಕ್ಷ ಕೆ. ಮಾರುತಿ, ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ಮಾಜಿ ಉಪ ಮೇಯರ್ ಆರ್. ಪುಷ್ಪವಲ್ಲಿ ಇದ್ದರು.