ಸಾರಾಂಶ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 87 ಕೋಟಿ ರು. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅಂಗೀಕಾರ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಆತ್ಮಹತ್ಯೆಗೆ ಶರಣಾದ ವಾಲ್ಮಿಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಡೆತ್ನೋಟ್ನಲ್ಲಿ ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಅಕ್ರಮ ಹಣ ವರ್ಗಾವಣೆ ನಡೆದಿದೆ. ಸಚಿವರ ಮೌಖಿಕ ಸೂಚನೆ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿದೆ ಎಂದು ಬರೆದಿದ್ದರು. ಈ ಪ್ರಕರಣ ಸಂಬಂಧ ಸರ್ಕಾರ ರಚಿಸಿರುವ ಎಸ್ಐಟಿ ಹಾಗೂ ಬ್ಯಾಂಕ್ ದೂರಿನ ಮೇರೆಗೆ ಸಿಬಿಐ ಎರಡೂ ತನಿಖೆ ನಡೆಸುತ್ತಿದ್ದು, ಎಫ್‌ಐಆರ್ ದಾಖಲಿಸಿವೆ.
ಈ ಹಿನ್ನೆಲೆಯಲ್ಲಿ ಜೂ.6ರಂದು ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದಾಗಿ ಭೇಟಿ ಮಾಡಿದ್ದ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಪತ್ರ ಬರೆದು ನಾಗೇಂದ್ರ ಅವರ ರಾಜೀನಾಮೆ ಅಂಗೀಕರಿಸುವಂತೆ ಶಿಫಾರಸು ಮಾಡಿದ್ದರು. ಬೆನ್ನಲ್ಲೇ ಗುರುವಾರ ರಾತ್ರಿಯೇ ರಾಜ್ಯಪಾಲರು ನಾಗೇಂದ್ರ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ.