ಸಾರಾಂಶ
ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶ್ರೀಮತಿ ಪ್ರೇಮಾ ಕೃಷ್ಣ ಅವರಿಗೆ ಸಾಂತ್ವನ ಹೇಳಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶ್ರೀಮತಿ ಪ್ರೇಮಾ ಕೃಷ್ಣ ಅವರಿಗೆ ಸಾಂತ್ವನ ಹೇಳಿದ್ದಾರೆ.
ಈ ಸಂಬಂಧ ಪತ್ರ ಬರೆದಿರುವ ಅವರು, ಮುತ್ಸದ್ದಿ ರಾಜಕಾರಣಿಯಾಗಿದ್ದ ಎಸ್.ಎಂ.ಕೃಷ್ಣ ಅಜಾತಶತ್ರುಗಳಾಗಿದ್ದರು. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಸಲ್ಲಿಸಿದ ಸೇವೆ ಅನುಕರಣೀಯವಾದುದು. ಅದರಲ್ಲೂ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೆಂಗಳೂರನ್ನು ಮಾಹಿತಿ ತಂತ್ರಜ್ಞಾನದ ಕೇಂದ್ರವನ್ನಾಗಿ ಬೆಳೆಸುವಲ್ಲಿ ನೀಡಿದ ಕೊಡುಗೆ ಅಪಾರ ಮತ್ತು ಸ್ಮರಣೀಯ ಎಂದಿದ್ದಾರೆ.ಅವರ ಅಗಲಿಕೆಯಿಂದ ತಮ್ಮ ಹಾಗೂ ತಮ್ಮ ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದೇನೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ತಮಗೆ ದಯಪಾಲಿಸಲಿ. ಕೃಷ್ಣ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.