ಸಿಎಂ ವಿರುದ್ಧ ತನಿಖೆಗೆ ಆದೇಶ

| Published : Aug 18 2024, 01:53 AM IST

ಸಾರಾಂಶ

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಹಾಗೂ ಅಭಿಯೋಜನೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರು ಅನುಮತಿ ನೀಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಹಾಗೂ ಅಭಿಯೋಜನೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರು ಅನುಮತಿ ನೀಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಖಾಸಗಿ ವ್ಯಕ್ತಿಗಳ ದೂರು ಆಧರಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17- ಎ ಅನ್ವಯ ತನಿಖೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ- 2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಆರೋಪದ ತನಿಖೆಗಾಗಿ ಅಭಿಯೋಜನೆಗೆ ಅನುಮತಿ ನೀಡಿ ಶನಿವಾರ ಬೆಳಗ್ಗೆ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳಿಗೆ ಪತ್ರ ಬರೆದು ರಾಜ್ಯಪಾಲರ ಆದೇಶವನ್ನು ರವಾನಿಸಿದ್ದಾರೆ.

ರಾಜ್ಯಪಾಲರ ಈ ನಿರ್ಧಾರವು ರಾಜ್ಯದ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರದ ‘ದ್ವೇಷದ ಅಸ್ತ್ರ’ ಎಂದು ರಾಷ್ಟ್ರಮಟ್ಟದಲ್ಲಿ ಬಿಂಬಿಸಲು ಹಾಗೂ ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸಲು ಕಾಂಗ್ರೆಸ್‌ ನಿರ್ಧಾರ ಮಾಡಿದೆ.

ಅಲ್ಲದೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಬಾರದು. ಯಾವುದೇ ಪರಿಸ್ಥಿತಿ ಉಂಟಾದರೂ ಎಲ್ಲರೂ ಒಗ್ಗಟ್ಟಾಗಿ ಅವರ ಬೆನ್ನಿಗೆ ನಿಲ್ಲಬೇಕು ಎಂದು ಹೈಕಮಾಂಡ್‌ ಸಂದೇಶ ರವಾನಿಸಿದೆ.

ಮತ್ತೊಂದೆಡೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸುತ್ತಿದ್ದು, ರಾಜಕೀಯ ಆರೋಪ-ಪ್ರತ್ಯಾರೋಪಗಳು ಜೋರು ಪಡೆದಿವೆ.

ಇದೇ ವೇಳೆ ಸಿದ್ದರಾಮಯ್ಯ ಪರ ರಾಜ್ಯಾದ್ಯಂತ ಪ್ರತಿಭಟನೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನಗಳು ಶುರುವಾಗಿವೆ.

ಬೆನ್ನಲ್ಲೇ ಶನಿವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಚಿವ ಸಂಪುಟ ಸಭೆ ನಡೆಸಿದ್ದು, ಸಚಿವ ಸಂಪುಟ ಸಲಹೆ ಧಿಕ್ಕರಿಸಿ ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ರಾಜ್ಯಪಾಲರ ನಡೆಗೆ ಧಿಕ್ಕಾರ ಸೂಚಿಸಲು ಹಾಗೂ ಕೇಂದ್ರ ಸರ್ಕಾರದ ಎಸ್‌ಒಪಿ ಉಲ್ಲಂಘಿಸಲಾಗಿದೆ ಎಂದು ಖಂಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಜತೆಗೆ ಸಚಿವ ಸಂಪುಟ ಸದಸ್ಯರೆಲ್ಲರೂ ಮುಖ್ಯಮಂತ್ರಿಗಳ ಪರವಾಗಿ ಗಟ್ಟಿಯಾಗಿ ನಿಲ್ಲಬೇಕು ಎಂದು ಒಗ್ಗಟ್ಟು ಪ್ರದರ್ಶಿಸಲು ನಿರ್ಧರಿಸಲಾಗಿದೆ.

ಇದಕ್ಕೂ ಮೊದಲು ಕಾನೂನು ತಜ್ಞರೊಂದಿಗೂ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದು, ಈ ಬಗ್ಗೆ ಕಾನೂನು ಹೋರಾಟ ಮುಂದುವರೆಸಲು ತೀರ್ಮಾನಿಸಿದ್ದಾರೆ. ಸೋಮವಾರ ಈ ಬಗ್ಗೆ ಹೈಕೋರ್ಟ್‌ ಮೊರೆ ಹೋಗುವ ಸಾಧ್ಯತೆಯಿದೆ ಎನ್ನಲಾಗಿದೆ.ತನಿಖೆ ಅಗತ್ಯವಿದೆ- ರಾಜ್ಯಪಾಲ:

ಆರ್‌ಟಿಐ ಕಾರ್ಯಕರ್ತರಾದ ಟಿ.ಜೆ. ಅಬ್ರಹಾಂ ಸೇರಿ ಮೂರು ಮಂದಿ ಅರ್ಜಿಗಳ ಪರಿಶೀಲನೆ ನಡೆಸಿ ಜು.26 ರಂದು ಮುಖ್ಯಮಂತ್ರಿಗಳಿಗೆ ಶೋಕಾಸ್‌ ನೋಟಿಸ್‌ ನೀಡಿದ್ದ ರಾಜ್ಯಪಾಲರು, ಸಚಿವ ಸಂಪುಟದ ನಿರ್ಣಯ ಹಾಗೂ ಮುಖ್ಯಮಂತ್ರಿಗಳ ಉತ್ತರವನ್ನು ಪರಿಶೀಲಿಸಿದ ಬಳಿಕವೂ ತನಿಖೆ ಅಗತ್ಯವಿದೆ ಎಂದು ಪ್ರತಿಪಾದಿಸಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ.

ಪ್ರಕರಣದಲ್ಲಿ ವಸ್ತುನಿಷ್ಠ, ನಿಷ್ಪಕ್ಷಪಾತ ತನಿಖೆ ನಡೆಸುವ ಅಗತ್ಯವಿದೆ. ಸಚಿವ ಸಂಪುಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ರಚನೆಯಾಗಿದೆ. ಹೀಗಾಗಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಾರದು ಎಂಬ ಸಚಿವ ಸಂಪುಟ ಸಲಹೆಯನ್ನು ಪರಿಗಣಿಸಲು ಸಾಧ್ಯವಿಲ್ಲ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕ ವ್ಯಕ್ತಿ ತನಿಖಾ ಆಯೋಗ ರಚಿಸಿದ್ದಾರೆ. ಆರೋಪ ಎದುರಿಸುತ್ತಿರುವವರೇ ತನಿಖಾ ಕ್ರಮ ನಿರ್ಧರಿಸುವುದು ಕಾನೂನು ಸಮ್ಮತವಲ್ಲ. ಹೀಗಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದೇನೆ ಎಂದು ರಾಜ್ಯಪಾಲರು ಅನುಮತಿ ಆದೇಶದಲ್ಲಿ ಹೇಳಿದ್ದಾರೆ.ಅರ್ಜಿದಾರರಿಗೆ ರಾಜ್ಯಪಾಲರ ಬುಲಾವ್:

ಅಲ್ಲದೆ, ಆರ್‌ಟಿಐ ಕಾರ್ಯಕರ್ತರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ, ಪ್ರದೀಪ್‌ ಕುಮಾರ್‌ ಅವರಿಗೆ ಬುಲಾವ್‌ ನೀಡಿದ ರಾಜ್ಯಪಾಲರು ಅನುಮತಿ ನೀಡಿರುವ ಪತ್ರವನ್ನು ನೀಡಿದರು. ಈ ಪತ್ರವನ್ನು ಪಡೆದ ಕಾರ್ಯಕರ್ತರು ನ್ಯಾಯಾಲಯದಲ್ಲಿ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.ರಾಜೀನಾಮೆ ಪ್ರಶ್ನೆಯೇ ಇಲ್ಲ- ಸಿಎಂ:

ಸಚಿವ ಸಂಪುಟ ಸಭೆ ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಹೈಕಮಾಂಡ್‌ನಿಂದ ದೂರವಾಣಿ ಕರೆ ಮಾಡಿ ಬೆಂಬಲ ತಿಳಿಸಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. 7 ಕೋಟಿ ಜನರ ಆಶೀರ್ವಾದದಿಂದ ರಚನೆಯಾಗಿರುವ ಸರ್ಕಾರ ಅಸ್ಥಿರಗೊಳಿಸುವ ಯತ್ನ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಕಾನೂನು ಹೋರಾಟ:

ರಾಜ್ಯಪಾಲರ ನಡೆ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ. ಇದರಿಂದ ಎಲ್ಲಾ ರಾಜ್ಯಗಳಲ್ಲೂ ಸುಸ್ಥಿರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಬಿಜೆಪಿಯ ಬಣ್ಣ ಬಯಲಾಗಿದೆ. ಹೀಗಾಗಿ ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ. ಜತೆಗೆ ಕಾರ್ಯಕರ್ತರು ಬೀದಿಗೆ ಇಳಿದೂ ಸಹ ಹೋರಾಟ ನಡೆಸಲಿದ್ದಾರೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.