ಎಚ್‌ಡಿಕೆ, ನಿರಾಣಿ, ಜೊಲ್ಲೆ ವಿರುದ್ಧವೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಮಾಡಲಿ: ಭಂಡಾರಿ ಸವಾಲು

| Published : Aug 20 2024, 12:49 AM IST

ಎಚ್‌ಡಿಕೆ, ನಿರಾಣಿ, ಜೊಲ್ಲೆ ವಿರುದ್ಧವೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಮಾಡಲಿ: ಭಂಡಾರಿ ಸವಾಲು
Share this Article
  • FB
  • TW
  • Linkdin
  • Email

ಸಾರಾಂಶ

ಬ್ರಹ್ಮಗಿರಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಜ್ಯಪಾಲರ ನಡೆಯ ವಿರುದ್ಧ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಬಿಜೆಪಿ, ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಬಿಜೆಪಿ ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯದ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಕೆಲಸಕ್ಕೆ ಕೈ ಹಾಕಿದೆ. ಅಮಿಷ್ ಶಾ ಅವರ ಏಜೆಂಟ್‌ನಂತೆ ರಾಜ್ಯಪಾಲರು ವರ್ತಿಸುತ್ತಿದ್ದಾರೆ. ಅವರು ಅನುಮತಿ ನೀಡುವುದಾದರೆ ಎಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಅವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಿ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಸವಾಲು ಹಾಕಿದ್ದಾರೆ.

ಅವರು ಸೋಮವಾರ ಬ್ರಹ್ಮಗಿರಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಜ್ಯಪಾಲರ ನಡೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಈ ಪ್ರತಿಭಟನೆಯನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ, ರಾಜ್ಯಪಾಲರು ತಮ್ಮ ಆದೇಶವನ್ನು ಹಿಂತೆಗೆದುಕೊಳ್ಳು ವರೆಗೆ ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದವರು ಎಚ್ಚರಿಸಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ರಾಜ್ಯಪಾಲರು ಸಂವಿಧಾನವನ್ನು ಗಾಳಿಗೆ ತೂರಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಾಮಾನ್ಯವಾಗಿ ಆರೋಪದ ಬಗ್ಗೆ ವಿಚಾರಣೆ ನಂತರ ಅಗತ್ಯವಿದ್ದಲ್ಲಿ ಮಾತ್ರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗುತ್ತದೆ. ಆದರೆ ಇಲ್ಲಿ ರಾಜ್ಯಪಾಲರು ವಿಚಾರಣೆಯನ್ನೇ ಮಾಡಿಲ್ಲ. ನ್ಯಾಯಾಂಗದ ಮೇಲೆ ನಮಗೆ ಭರವಸೆ ಇದೆ, ಜಯ ಕಾಂಗ್ರೆಸ್ ಪಕ್ಷಕ್ಕೇ ಸಿಗುತ್ತದೆ ಎಂದರು.ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್, ಬೈಂದೂರು ಮಾಜಿ ಶಾಸಕ ಗೋಪಾಲ್ ಪೂಜಾರಿ, ಉಡುಪಿ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮಳವಳ್ಳಿ, ಕೃಷ್ಣಮೂರ್ತಿ ಆಚಾರ್ಯ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹರೀಶ್ ಕಿಣಿ, ಪ್ರಖ್ಯಾತ್ ಶೆಟ್ಟಿ, ಡಾ.ಸುನಿತಾ ಶೆಟ್ಟಿ, ಶುಭದಾ ರಾವ್ ಕಾರ್ಕಳ, ಜ್ಯೋತಿ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಆರಂಭವಾದ ಪಾದಯಾತ್ರೆ ಜೋಡುಕಟ್ಟೆ ವರೆಗೆ ತೆರಳಿ, ವಾಪಸ್‌ ಬ್ರಹ್ಮಗಿರಿ ವೃತ್ತದಲ್ಲಿ ಸಮಾಪನವಾಯಿತು. ಜಿಲ್ಲೆಯ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.