ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಆರ್ಥಿಕ ದಿವಾಳಿಯಾಗಿರುವ ರಾಜ್ಯ ಸರ್ಕಾರ ೯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಎಬಿವಿಪಿ ಕಾರ್ಯಕರ್ತರು, ರಾಜ್ಯಸರ್ಕಾರ, ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಚಾಮರಾಜನಗರ, ಕೊಪ್ಪಳ, ಕೊಡಗು ಅಂತಹ ಹಿಂದುಳಿದ ಜಿಲ್ಲೆಗಳಲ್ಲಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದ ಕಾರ್ಯಕರ್ತರು, ಸರ್ಕಾರದ ನಡೆಯಿಂದ ಆಯಾ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ ೫೦ ಸಾವಿರ ಕೋಟಿ ರು. ಹಣ ನೀಡುತ್ತಿದೆ. ಅದರಲ್ಲಿ ಶೇ. ೧ರಷ್ಟು ಅಂದರೆ ೫೦೦ ಕೋಟಿ ರು. ಹಣವನ್ನು ವಿಶ್ವವಿದ್ಯಾಲಯಗಳಿಗೆ ನೀಡಿದರೆ ವಿಶ್ವವಿದ್ಯಾಲಯಗಳ ಸ್ಥಿತಿ ಸುಧಾರಿಸುತ್ತದೆ. ಕಳೆದ ೧೦- ೧೫ ವರ್ಷಗಳಿಂದ ರಾಜ್ಯ ಸರ್ಕಾರಗಳು ವಿಶ್ವವಿದ್ಯಾಲಯಗಳಿಗೆ ಯಾವುದೇ ರೀತಿಯ ಅನುದಾನ ನೀಡಿಲ್ಲ ಎಂದು ಕಿಡಿಕಾರಿದರು.
ಎಲ್ಲಾ ವಿವಿಗಳು ವಿದ್ಯಾರ್ಥಿಗಳಿಗ ಪರೀಕ್ಷಾ ಶುಲ್ಕ ಮರು ಎಣಿಕೆ ಅಥವಾ ಮರು ಮೌಲ್ಯಮಾಪನ ಶುಲ್ಕಗಳಲ್ಲಿ ಮತ್ತು ಆಂತರಿಕ ಹಣಕಾಸು ಉತ್ಪಾದನೆಯ ಮೂಲಕ ಇಂದು ವಿವಿಗಳು ನಡೆಯುತ್ತಿರುವುದು ಅವಮಾನದ ಸಂಗತಿಯಾಗಿದೆ. ಕರ್ನಾಟಕದಂತಹ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅದರದ್ದೇ ಆದ ಗೌರವ ಮತ್ತು ಹೆಗ್ಗಳಿಕೆ ಇದೆ. ಕೇವಲ ಹಣಕಾಸಿನ ದೃಷ್ಟಿಯಿಂದ ವಿವಿಗಳನ್ನು ಮುಚ್ಚಲು ಹೊರಟಿರುವುದು, ಒಂದು ಘನ ಸರ್ಕಾರಕ್ಕೆ ಶೋಭೆ ತರುವಂತಹ ಕಾರ್ಯವಲ್ಲ ಎಂದು ದೂಷಿಸಿದರು.ಹಿಂದಿನ ಸರ್ಕಾರ ಜಿಲ್ಲೆಗೊಂದು ವಿವಿ ಪ್ರಾರಂಭಿಸಿದರೆ ಅಲ್ಲಿನ ಗ್ರಾಮೀಣ ಮಕ್ಕಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಹೊಸದಾಗಿ ೧೦ ವಿವಿಗಳನ್ನು ಪ್ರಾರಂಭಿಸಿತ್ತು. ಹಾಸನ, ಚಾಮರಾಜನಗರ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ, ನೃಪತುಂಗ ಹಾಗೂ ಬೀದರ್‌ನಲ್ಲಿ ಹೊಸ ವಿವಿಗಳಿಗೆ ಅನುದಾನ ನೀಡಿ ಅಭಿವೃದ್ಧಿಪಡಿಸಿದರೆ ಅವುಗಳನ್ನು ಮುಚ್ಚುವುದಕ್ಕೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ನಿರ್ಧರಿಸಿರುವುದು ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾವ ಶಿಕ್ಷಣ ತಜ್ಞರ ಶಿಫಾರಸ್ಸಿನ ಮೇರೆಗೆ ವಿವಿಗಳನ್ನು ಮುಚ್ಚುತ್ತಿದ್ದೀರಾ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ ಅವರು, ರಾಜ್ಯದ ಉನ್ನತ ಶಿಕ್ಷಣ ಪರಿಷತ್ ಶಿಫಾರಸ್ಸು ಮಾಡಿರುವ ಹಣವನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಎಬಿವಿಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಎಚ್.ಬಿ.ಪ್ರಜ್ವಲ್, ವಿದ್ಯಾರ್ಥಿ ನಾಯಕರಾದ ದರ್ಶನ್, ರೋಹಿತ್, ಪ್ರಶಾಂತ್, ಚಂದನ್, ಬಿ.ಎಂ.ಹರ್ಷ ಸೇರಿ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.