ವಿದ್ಯಾರ್ಥಿಗಳ ಭವಿಷ್ಯಕ್ಕೆ ಸರ್ಕಾರಿ ಶಾಲೆ ಸಹಕಾರಿ: ಶಿವಕುಮಾರ್

| Published : Feb 10 2025, 01:50 AM IST

ಸಾರಾಂಶ

ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಉನ್ನತ ಶಿಕ್ಷಣ ದೊರಕುತ್ತಿದೆ. ಇದನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಪಡೆದುಕೊಂಡು ನುರಿತ ಶಿಕ್ಷಕರಿಂದ ಉತ್ತಮ ಶಿಕ್ಷಣ ಪಡೆಯಬೇಕು.

ಕನ್ನಡಪ್ರಭ ವಾರ್ತೆ ಹಲಗೂರು

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿಯಾಗಿದೆ ಎಂದು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲ ಶಿವಕುಮಾರ್ ತಿಳಿಸಿದರು.

ಹಲಗೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಅವರಣದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಉನ್ನತ ಶಿಕ್ಷಣ ದೊರಕುತ್ತಿದೆ. ಇದನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಪಡೆದುಕೊಂಡು ನುರಿತ ಶಿಕ್ಷಕರಿಂದ ಉತ್ತಮ ಶಿಕ್ಷಣ ಪಡೆಯುವಂತೆ ಕಿವಿಮಾತು ಹೇಳಿದರು.

ನಿಮ್ಮ ಸಂಬಂಧಿಕರ ಹಾಗೂ ನಿಮ್ಮ ಸ್ನೇಹಿತರು ಖಾಸಗಿ ಶಾಲೆಗಳಿಗೆ ಹೋಗುತ್ತಿದ್ದರೆ ಅವರಿಗೆ ಸರ್ಕಾರಿ ಶಾಲೆ ಬಗ್ಗೆ ತಿಳಿಸಿ ಅವರನ್ನು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ನಿಟ್ಟಿನಲ್ಲಿ ನೀವುಗಳು ಮುಂದಾಗಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಪಬ್ಲಿಕ್ ಪ್ರೌಢಶಾಲೆ ಶಾಲೆ ಶಿಕ್ಷಕ ಎನ್.ಎಂ.ಪುಟ್ಟಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಬೇಕಾದರೆ ಅದು ವಿದ್ಯಾರ್ಥಿಗಳ ಕೈಯಲ್ಲೇ ಇದೆ. ಇಡೀ ಮಂಡ್ಯ ಜಿಲ್ಲೆ ನಮ್ಮ ಶಾಲೆ ಕಡೆ ತಿರುಗಿ ನೋಡುವಂತಹ ಸಾಧನೆಯನ್ನು ನಮ್ಮ ವಿದ್ಯಾರ್ಥಿಗಳು ಮಾಡಬೇಕು ಎಂದರು.

ಡಿ.ಕೆ.ಕರಿಯಪ್ಪ ಮಾತನಾಡಿ, ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ನೂರು-ಮೂರು ವಿದ್ಯಾರ್ಥಿಗಳು ಇದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಾರೆ. ಅದೇ ರೀತಿ ನಮ್ಮ ಅಕ್ಕ ಪಕ್ಕದ ಗ್ರಾಮದ ವಿದ್ಯಾರ್ಥಿಗಳು ಪಟ್ಟಣ ಪ್ರದೇಶಗಳಿಗೆ ಹೋಗಿ ವ್ಯಾಸಂಗ ಪಡೆಯುವುದಕ್ಕಿಂತ ನಮ್ಮ ಈ ಕಾಲೇಜಿನಲ್ಲೇ ಉನ್ನತ ಶಿಕ್ಷಣ ದೊರಕುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಂಡು ನಿಮ್ಮ ಉತ್ತಮ ಜೀವನವನ್ನು ರೂಪಿಸಿಕೊಳ್ಳಿ ಎಂದರು.

ಎಸ್ ಡಿ ಎಂ ಸಿ ಉಪಾಧ್ಯಕ್ಷ ಜಿ.ಎಂ.ಮಹಾದೇವ ಗಿಡಕ್ಕೆ ನೀರು ಹಾಕಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಸೋಮಣ್ಣ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಶಬ್ದ ಕೋಶಗಳನ್ನು ನೀಡಿದರು ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಈ ವೇಳೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಸತೀಶ್, ಮುಖ್ಯ ಶಿಕ್ಷಕರಾದ ಸಿದ್ದರಾಜು, ಅನ್ನಪೂರ್ಣ, ಶೈಲಜಾ, ಶಿಕ್ಷಕರಾದ ಪುಟ್ಟಸ್ವಾಮಿ ಗೌಡ, ಉಪನ್ಯಾಸಕರಾದ ಮಹೇಶ್, ಮಹಾಂತೇಶ್ ಸೇರಿದಂತೆ ಉಪನ್ಯಾಸ ವರ್ಗ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.